ಕನ್ನಡಪ್ರಭ ವಾರ್ತೆ ಕೆಜಿಎಫ್ ಬೇಸಿಗೆ ಕಾಲ ಪ್ರಾರಂಭವಾಗಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುದರಿಂದ ಮುಂದಿನ ದಿನಗಳಲ್ಲಿ ತಾಲೂಕಿನ ಕೆಲವು ಭಾಗಗಳಲ್ಲಿ ಕುಡಿವ ನೀರಿನ ಸಮಸ್ಯೆ ಉದ್ಭವಿಸಬಹುದಾಗಿದ್ದು, ಅಧಿಕಾರಿಗಳು ಯಾವುದೇ ಕಾರಣಕ್ಕೂ ತಾಲೂಕಿನಾದ್ಯಂತ ಕುಡಿವ ನೀರಿನ ಸಮಸ್ಯೆಗಳಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಶಾಸಕಿ ರೂಪಕಲಾ ಶಶಿಧರ್ ತಾಕೀತು ಮಾಡಿದರು.
ನಗರದ ಹೊರವಲಯದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಪಿಡಿಒಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಮಾತನಾಡಿದರು.ಪಿಡಿಒಗಳ ಜವಾಬ್ದಾರಿಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಗ್ರಾಮಕ್ಕೂ ಕುಡಿಯುವ ನೀರನ್ನು ಒದಗಿಸುವ ಜವಾಬ್ದಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೇಲಿದ್ದು, ಪಿಡಿಒಗಳು ನಿರ್ಲಕ್ಷ್ಯ ಮಾಡದೆ ಕಾಲ ಕಾಲಕ್ಕೆ ಸಮಸ್ಯೆ ಬಗ್ಗೆ ತಮಗೆ ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡಬೇಕೆಂದು ಸಭೆಯಲ್ಲಿ ಸೂಚಿಸಿದರು. ಕುಡಿಯುವ ನೀರಿನ ಲಭ್ಯತೆ ಬಗ್ಗೆ ಪಿಡಿಒಗಳು ಪಂಚಾಯಿತಿವಾರು ಮಾಹಿತಿ ನೀಡಿ, ಹಲವು ಗ್ರಾಮಗಳಲ್ಲಿ ಕೊಳವೆ ಬಾವಿಗಳಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿದ್ದು ಬೇಸಿಗೆ ಹೆಚ್ಚಾಗುತ್ತಿದ್ದಂತೆ ನೀರಿನ ಸಮಸ್ಯೆ ಉದ್ಭವಿಸುವ ಅವಕಾಶ ಹೆಚ್ಚಾಗಿದೆ. ಅಗತ್ಯವಿದ್ದಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಸಲಾಗುವುದು ಎಂದರು.
ಜಲಜೀವನ್ ಯೋಜನೆಹಲವು ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಅಡಿ ಕೊಳವೆಬಾವಿಗಳನ್ನು ಕೊರೆಸಿದ್ದು, ನೀರು ಸಹಾ ಕೊಳವೆಬಾವಿಗಳಲ್ಲಿ ಲಭ್ಯವಿದ್ದು, ಪಂಪು, ಮೋಟಾರ್ ಹಾಗು ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ. ಮತ್ತೆ ಕೆಲವು ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಪೈಪ್ ಲೈನ್ ಅಳವಡಿಸಿದ್ದು, ಕೊಳವೆ ಬಾವಿ ಹಾಗೂ ನೀರಿನ ಟ್ಯಾಂಕ್ ವ್ಯವಸ್ಥೆ ಕಲ್ಪಿಸಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಪಿಡಿಒಗಳಿಗೆ ಸೂಚಿಸಿದರು. ಸಭೆಯಲ್ಲಿ ಹಾಜರಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ರವರಿಗೆ ಸಮಸ್ಯೆಯನ್ನು ಬಗೆಹರಿಸಲು ಕ್ರಮ ವಹಿಸುವಂತೆ ಶಾಸಕಿ ಸೂಚಿಸಿದ್ದಕ್ಕೆ, ಜಲ ಜೀವನ್ ಮಿಷನ್ ಅಡಿಯಲ್ಲಿ ಕೊಳವೆ ಬಾವಿ ಕಾಮಗಾರಿಯನ್ನು ಸೇರ್ಪಡೆ ಮಾಡದ ಗ್ರಾಮಗಳಿಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಪತ್ರವನ್ನು ಪಡೆದು ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆಯಲಾಗುವುದೆಂದು ತಿಳಿಸಿದರು. ನೀರಿನ ಘಟಕಗಳ ನಿರ್ವಹಣೆ
ಶುದ್ಧ ಕುಡಿಯುವ ನೀರಿನ ಘಟಕಗಳು ಅಳವಡಿಸಿರುವ ಗ್ರಾಮಗಳಲ್ಲಿ ಘಟಕಗಳು ಯಾವುದೇ ತೊಂದರೆಯಿಲ್ಲದೇ ಕೆಲಸ ಮಾಡುವಂತೆ ನಿರ್ವಹಣೆ ಮಾಡಬೇಕು ಮತ್ತು ಒಂದು ವೇಳೆ ತಾಂತ್ರಿಕ ದೋಷಗಳುಂಟಾದಲ್ಲಿ ಕೂಡಲೇ ದುರಸ್ಥಿ ಕಾರ್ಯ ಕೈಗೊಂಡು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ರವರಿಗೆ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮೀಣ ಭಾಗದಲ್ಲಿ ವಿಶೇಷವಾಗಿ ಜಾನುವಾರುಗಳಿಗೆ ಕುಡಿಯುವ ನೀರು ಸಮಸ್ಯೆ ಆಗದಂತೆ ಅಗತ್ಯವಾದ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿಕೊಳ್ಳುವಂತೆ ಮತ್ತು ಬೇಸಿಗೆ ಹೆಚ್ಚಾದಲ್ಲಿ ಮೇವಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕರಿಗೆ ತಿಳಿಸಿದರು.ನೀರಿನ ಸಮಸ್ಯೆ ಆಗದಂತೆ ಕ್ರಮಕೆಜಿಎಫ್ ನಗರ ಭಾಗದಲ್ಲಿ ನೀರಿನ ಸರಬರಾಜು ಹಾಗೂ ಬೇಸಿಗೆಯಲ್ಲಿ ಸಮಸ್ಯೆ ಆಗದಂತೆ ತೆಗೆದುಕೊಂಡ ಮುಂಜಾಗ್ರತ ಕ್ರಮಗಳ ಬಗ್ಗೆ ನಗರಸಭೆ ಎಇಇ ಹಾಗೂ ನಗರ ನೀರು ಸರಬರಾಜು ಮಂಡಳಿ ಎಇಇ ರವರಿಂದ ಮಾಹಿತಿ ಪಡೆದುಕೊಂಡು ನಗರ ಪ್ರದೇಶದಲ್ಲಿಯೂ ಸಹ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು. ತಹಸೀಲ್ದಾರ್ ನಾಗವೇಣಿ, ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಪ್ಪ, ನಗರಸಭೆ ಪೌರಾಯುಕ್ತ ಪವನ್ ಕುಮಾರ್, ಎಇಇ ರವಿಚಂದ್ರ, ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಸಭೆಯಲ್ಲಿ ಹಾಜರಿದ್ದರು.