ದೌರ್ಜನೆ ತಡೆಗೆ ಕಾನೂನು ಅರಿವು ಹೊಂದಿ: ನ್ಯಾ.ಬಿ.ಎಸ್.ಭಾರತಿ

KannadaprabhaNewsNetwork |  
Published : Nov 10, 2024, 01:55 AM ISTUpdated : Nov 10, 2024, 01:56 AM IST
ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ | Kannada Prabha

ಸಾರಾಂಶ

ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನುಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಲು ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್. ಭಾರತಿ ಅವರು ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಆಸರೆ ಚಾರಿಟಬಲ್ ಟ್ರಸ್ಟ್ ಇವರ ಸಹಯೋಗದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು, ಮಕ್ಕಳು, ವಿಶೇಷಚೇತನರು ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಕಾನೂನು ಅರಿವು ಹೊಂದಬೇಕು. ನಾಗರಿಕರ ರಕ್ಷಣೆಗಾಗಿ ರೂಪಿಸಿರುವ ಕಾನೂನುಗಳನ್ನು ಎಲ್ಲರು ಸದ್ಭಳಕೆ ಮಾಡಿಕೊಳ್ಳಬೇಕು. ಆದರೆ ಎಷ್ಟೋ ಕಡೆ ಕಾನೂನಿನ ದುರ್ಬಳಕೆಯಾಗುತ್ತಿವೆ. ಇದು ಶಾಶ್ವತವಲ್ಲ. ಪ್ರತಿಯೊಬ್ಬರು ಕಾನೂನು ಅರಿವು ಹೊಂದಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಮಾತನಾಡಿ, ಕಾನೂನುಗಳ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷ ನ.೯ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಆಚರಿಸಲಾಗುತ್ತಿದೆ. ಕಾನೂನಿನಡಿ ಎಲ್ಲರೂ ಸಮಾನರು. ಯಾವುದೇ ತಾರತಮ್ಯವಿಲ್ಲದೇ ನ್ಯಾಯ ದೊರಕಿಸಲು ರಾಷ್ಟ್ರೀಯ, ರಾಜ್ಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳನ್ನು ಸ್ಥಾಪಿಸಲಾಗಿದೆ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಸ್.ನಂಜಯ್ಯ ಮಾತನಾಡಿ, ಈಗಿನ ಮಕ್ಕಳನ್ನು ನಾಳಿನ ಉತ್ತಮ ಪ್ರಜೆಗಳಾಗಿ ರೂಪಿಸಲು ಕಾನೂನು ಸೇವಾ ದಿನಾಚಚರಣೆಯನ್ನು ಶಾಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ನಾವೆಲ್ಲರೂ ಸಮಾಜಜೀವಿಗಳು. ಸಮಾಜದಲ್ಲಿ ಗೌರವಯುತವಾಗಿ ಜೀವಿಸಲು ಕಾನೂನು ಜ್ಞಾನ ಹೊಂದುವುದು ಅವಶ್ಯವಾಗಿದೆ ಎಂದು ತಿಳಿಸಿದರು.

ಆಸರೆ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಟಿ.ಜೆ.ಸುರೇಶ್ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನು ತಲುಪಿದರೆ ಕಾನೂನು ಸೇವಾ ದಿನ ಸಾರ್ಥಕತೆ ಕಾಣಲಿದೆ. ಪ್ರತಿಯೊಬ್ಬರು ನಿತ್ಯಜೀವನದಲ್ಲಿ ಕಾನೂನು ಅಳವಡಿಸಿಕೊಳ್ಳಬೇಕು. ಇಂದಿನ ವಿದ್ಯಾರ್ಥಿಗಳು ಹೆಚ್ಚಾಗಿ ಸೋಶಿಯಲ್ ಮೀಡಿಯಾಗೆ ಅವಲಂಬಿತರಾಗುತ್ತಿರುವುದು ವಿಷಾದನೀಯ ಸಂಗತಿ. ಇದರಿಂದ ಸಾಕಷ್ಟು ಅವಘಡಗಳಾಗುತ್ತಿದೆ. ಫೋಕ್ಸೋ ಪ್ರಕರಣಗಳು ದಿನೆದಿನೇ ಹೆಚ್ಚಾಗುತ್ತಿವೆ. ಇದು ಸಲ್ಲದು. ತಂದೆ-ತಾಯಿಗೆ, ಈ ನೆಲದ ಕಾನೂನಿಗೆ ಗೌರವ ಕೊಡಿ ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಪಿ.ಎಸ್.ಗುರುಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾನೂನು ಅರಿವು ಹೊಂದಲು ಇದು ಸದಾವಕಾಶವಾಗಿದೆ. ಮಾಡುವ ಕೆಲಸಗಳು ತಪ್ಪು ಎಂದು ತಿಳಿದಿದ್ದರೂ ಮತ್ತದೇ ತಪ್ಪು ಮರುಕಳಿಸಬಾರದು. ಇದರಿಂದ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಸೋಶಿಯಲ್ ಮೀಡಿಯಾಗಳನ್ನು ಉತ್ತಮ ಕೆಲಸಗಳಿಗೆ ಬಳಸಿಕೊಳ್ಳುವಂತೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇದೇ ವೇಳೆ ಹಾಸನ ಜಿಲ್ಲೆಯ ಹಾಸನಾಂಬ ಜಾತ್ರಾ ಸಮಯದಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದ ಕಾಲೇಜಿನ ವಿದ್ಯಾರ್ಥಿಗಳಿಗೆ ಗಣ್ಯರು ಪ್ರಮಾಣಪತ್ರ ವಿತರಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಸ್ಟರಿ ಅಸೋಸಿಯೆಟ್ ಪ್ರೊ.ನೀಲಕಂಠಸ್ವಾಮಿ, ಅರ್ಥಶಾಸ್ತ್ರ ಪ್ರಾಧ್ಯಾಪಕ ಮಲ್ಲೇಶ್ ಕಾರ್ಯಕ್ರಮದಲ್ಲಿ ಇದ್ದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ