ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಕಂಡು ಬರಬಹುದಾದ ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಲು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ 24*7 ಸನ್ನದ್ಧರಾಗಿರುವಂತೆ ಹಾಗೂ ಎಲ್ಲ ತಾಲೂಕುಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.ನಗರದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಸಿದ್ಧತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿ ಹಿಂದಿನಂತೆ ಯಾವುದೇ ಸಮಸ್ಯೆಯಾಗದಂತೆ ಕೈಗೊಂಡಿರುವ ಕಾಮಗಾರಿಗಳನ್ನು ಆದ್ಯತೆಯಲ್ಲಿ ಮುಕ್ತಾಯಗೊಳಿಸಿ ವರದಿ ನೀಡುವಂತೆ ಸಣ್ಣ ನೀರಾವರಿ ಮತ್ತು ಜಿಪಂ ಅಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳನ್ನು ಈ ತಿಂಗಳೊಳಗೆ ಮುಕ್ತಾಯಗೊಳಿಸುವಂತೆ ಹಾಗೂ ರಸ್ತೆಗಳ ಪಕ್ಕದಲ್ಲಿ ಚರಂಡಿ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಹಾಗೂ ಮಳೆ ನೀರು ರಸ್ತೆಯಲ್ಲಿ ನಿಲ್ಲದಂತೆ ಎಚ್ಚರವಹಿಸಬೇಕು, ಶಿರಸಿ-ಕುಮಟಾ ರಸ್ತೆಯಲ್ಲಿ ಕೈಗೊಂಡಿರುವ ಎಲ್ಲ ಕಾಮಗಾರಿಗಳನ್ನು ಮೇ ಅಂತ್ಯದೊಳಗೆ ಸಂಪೂರ್ಣ ಮುಕ್ತಾಯಗೊಳಿಸಬೇಕು ಎಂದರು.ಈಗಾಗಲೇ ಗುರುತಿಸಲಾಗಿರುವ ಗುಡ್ಡ ಕುಸಿತ ಪ್ರದೇಶದಲ್ಲಿ ಸ್ಪಾಟರ್ಸ್ ನೇಮಕ ಮಾಡಲಾಗಿದೆ. ಅವರು ನಿರಂತರವಾಗಿ ನಿಗಾ ವಹಿಸಬೇಕು. ಹೆದ್ದಾರಿಯಲ್ಲಿ ಅಪಾಯಕಾರಿ ಪ್ರದೇಶಗಳಲ್ಲಿ ಸೂಕ್ತ ಎಚ್ಚರಿಕೆ ಫಲಕ, ಬ್ಯಾರಿಕೇಡ್ ಸೇರಿದಂತೆ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಬೇಕು. ಅಗತ್ಯ ಔಷಧಗಳ ಕೊರತೆಯಾಗಬಾರದು. ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಲಭ್ಯವಿರಬೇಕು. ವೈದ್ಯಕೀಯ ಉಪಕರಣಗಳು ಹಾಗೂ ಆಂಬುಲೆನ್ಸ್ ಗಳು ಸುಸ್ಥಿತಿಯಲ್ಲಿರುವಂತೆ ಎಚ್ಚರವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾನ್ಸೂನ್ ಅವಧಿಯಲ್ಲಿ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯ ಮತ್ತು ಸಹಕಾರದಿಂದ ಒಟ್ಟಾಗಿ ಕಾರ್ಯನಿರ್ವಹಿಸುವುದರ ಮೂಲಕ ಜಿಲ್ಲೆಯಲ್ಲಿ ಮಾನ್ಸೂನ್ ವೇಳೆಯಲ್ಲಿ ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯವಿರುವ ನೆರವು ಒದಗಿಸಬೇಕು ಎಂದರು.