ಮಳೆಗಾಲ ವಿಕೋಪಗಳಿಗೆ ತಕ್ಷಣ ಸ್ಪಂದಿಸಲು ಸನ್ನದ್ಧರಾಗಿರಿ: ಅಧಿಕಾರಿಗಳಿಗೆ ಡಿಸಿ ಸೂಚನೆ

KannadaprabhaNewsNetwork |  
Published : May 13, 2025, 01:32 AM IST
12ವಿಕೋಪ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಹೆಚ್ಚು ಮಳೆಯಿಂದ ಉಂಟಾಗಾಬಹುದಾದ ಪ್ರಕೃತಿ ವಿಕೋಪಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿಜಿಲ್ಲೆಯಲ್ಲಿ ಹೆಚ್ಚು ಮಳೆಯಿಂದ ಉಂಟಾಗಾಬಹುದಾದ ಪ್ರಕೃತಿ ವಿಕೋಪಗಳ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ತಯಾರಿಯೊಂದಿಗೆ ಮುಂಚಿತವಾಗಿಯೇ ಯೋಜನೆಗಳನ್ನು ರೂಪಿಸಿಕೊಂಡು, ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ

ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ಬಾರಿ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಹೆಚ್ಚಾಗಿ ಕೃತಕ ನೆರೆ ಉಂಟಾಗಿ ಮನೆಗಳಿಗೆ ಹಾಗೂ ಕೃಷಿಜಮೀನಿಗೆ ನೀರು ನುಗ್ಗಿ

ಹಾನಿ ಉಂಟಾಗಿತ್ತು.ಈ ಬಾರಿ ಹೀಗಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ನದಿ, ರಾಜ ಕಾಲುವೆ, ತೋಡುಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮವಹಿಸಬೇಕು, ಅಗತ್ಯವಿದ್ದಲ್ಲಿ ಹೂಳೆತ್ತಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಕ್ರಮ ಕೈಗೊಳ್ಳಬೇಕು.

ಈಗಾಗಲೇ ಯಾವ ಯಾವ ಪ್ರದೇಶಗಳಲ್ಲಿ ಕೈಗೊಳ್ಳಬೇಕಾಗಿರುವ ಕಾಮಗಾರಿಗಳ ಬಗ್ಗೆ ತಿಳಿಸಿದರೂ ಸಹ ಹೆದ್ದಾರಿ ಇಲಾಖೆಗಳ ಅಭಿಯಂತರರುಗಳು ಸ್ಪಂದಿಸದೇ ಇರುವುದು ಕಂಡುಬರುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಅಂತಹವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.ಮಳೆ ನೀರು ಕೊಯ್ಲು ಸರ್ಕಾರಿ ಹಾಗೂ ಖಾಸಗಿ ಬೋರ್‌ವೆಲ್ ಹಾಗೂ ತೆರೆದ ಬಾವಿಗಳಿಗೆ ಅಳವಡಿಸುವಂತೆ ಕಳೆದ ಸಾಲಿನಲ್ಲಿ ಸೂಚನೆ ನೀಡಲಾಗಿತ್ತು. ಜಿಲ್ಲೆಯಲ್ಲಿ ಗ್ರಾಮೀಣ ಭಾಗದ 1616 ತೆರೆದ ಬಾವಿಗಳು ಹಾಗೂ 1554 ಕೊಳವೆ ಬಾವಿಗಳು ಇವೆ. ಆದರೆ ಕ್ರಮವಾಗಿ 44 ಹಾಗೂ 93 ಗಳಿಗೆ ಮಾತ್ರ ಮಳೆ ನೀರು ಕೊಯ್ಲು ಅಳವಡಿಸಲಾಗಿದೆ. ಇವುಗಳನ್ನು ಆದ್ಯತೆಯ ಮೇಲೆ ಕೂಡಲೆ ಅಳವಡಿಸಬೇಕೆಂದು ಸೂಚನೆ ನೀಡಿದ ಅವರು, ಖಾಸಗಿಯವರೂ ಸಹ ಮಳೆ ನೀರು ಕೊಯ್ಲನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಅಂತರ್ಜಲ ಹೆಚ್ಚುವುದರ ಜೊತೆಗೆ ಬೇಸಿಗೆಯಲ್ಲಿ ನೀರಿನ ಅಭಾವ ತಪ್ಪಿಸಲು ಸಾಧ್ಯ ಎಂದರು.ಜಿಲ್ಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿಲ್ಲ. ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಸ್ಪಂದಿಸಬೇಕು ಎಂದ ಅವರು, ನೀರಿನ ಗುಣಮಟ್ಟ ಪರೀಕ್ಷೆಗಳನ್ನು ಆಗಿಂದಾಗ್ಗೆ ಕೈಗೊಳ್ಳಬೇಕು ಸೂಚನೆ ನೀಡಿದರು.

ಅಪಾಯಕಾರಿಯಾದಂತಹ ಹಳೆಯ ಮರಗಳು, ಬೇರು ಸಡಿಲಗೊಂಡ ಮರಗಳನ್ನು ತೆರವು ಕಾರ್ಯಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಕಳೆದ ಸಾಲಿನಲ್ಲಿ ಮರಗಳ ಉರುಳುವಿಕೆಯಿಂದ ಎರಡು ಮಾನವ ಹಾನಿ ಪ್ರಕರಣಗಳು ಉಂಟಾಗಿವೆ. ಈ ಬಾರಿ ಹಾಗಾಗದಂತೆ ಗ್ರಾಪಂ ಅಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ತೆರವು ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.ಮಳೆಯಿಂದ ಉಂಟಾದ ಕಟ್ಟಡದ ಹಾನಿ, ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನ ಬಿಡುಗಡೆಗೊಳಿಸಲಾಗಿದೆ. ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದ ಅವರು, ಶಾಲಾ ಕಾಲೇಜುಗಳ ಕಟ್ಟಡಗಳನ್ನು ಪರೀಕ್ಷಿಸಿ, ಅವುಗಳು ಸರಿಯಿವೆ ಎಂಬ ದೃಢೀಕರಣಗಳನ್ನು ಅಭಿಯಂತರರಿಂದ ಪಡೆಯಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗ್ರಾ.ಪಂ. ವ್ಯಾಪ್ತಿಯಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು,

ಸಮಿತಿಗಳಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಮಹಿಳೆಯರನ್ನೂ ಸದಸ್ಯರನ್ನಾಗಿಸಬೇಕು. ವಿಪತ್ತುಗಳ ಸಂದರ್ಭದಲ್ಲಿ ಗ್ರಾಮ ಲೆಕ್ಕಿಗರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು. ಮರಣ ಸಂಭವಿಸಿದ್ದಲ್ಲಿ 24 ಗಂಟೆಯ ಒಳಗಾಗಿ ಮನೆಯವರಿಗೆ ಪರಿಹಾರ ಒದಗಿಸಬೇಕು ಎಂದರು.ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಮಾತನಾಡಿ, ಪಾಕ್ ವಿರುದ್ಧ ಯುದ್ಧ ಸನ್ನದ್ಧ ಸ್ಥಿತಿ ಹಿನ್ನೆಲೆ, ಜಿಲ್ಲೆಯಲ್ಲಿ ಕಾನೂನು

ಸುವ್ಯವಸ್ಥೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಗ್ನಿ ಶಾಮಕ ದಳದ ಕೇಂದ್ರಗಳು, 24 ಗಂಟೆಗಳು ಸನ್ನದ್ಧ ಸ್ಥಿತಿಯಲ್ಲಿವೆ. ಪೌರ ರಕ್ಷಣಾ ವ್ಯವಸ್ಥೆ ಬಲಪಡಿಸಲು 400 ಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಗುರುತಿಸಲಾಗಿದೆ. ಈಗಾಗಲೆ 18 ವರ್ಷ ಮೇಲ್ಪಟ್ಟ ಎನ್.ಎಸ್.ಎಸ್ ಹಾಗೂ ಎನ್.ಸಿ.ಸಿ. ಸ್ವಯಂ ಸೇವಕರುಗಳಿಗೂ ತರಬೇತಿ ನೀಡಿ, ಅಗತ್ಯವಿದ್ದಲ್ಲಿ ತುರ್ತು ಸಂದರ್ಭಗಳಲ್ಲಿ ಅವರನ್ನು ನಿಯೋಜಿಸಲಾಗುವುದು ಎಂದ ಅವರು, ಕರಾವಳಿ ಕಾವಲು ಪಡೆಯ ಭದ್ರತೆ ಬಿಗಿಗೊಳಿಸಲಾಗಿದೆ ಎಂದರು.ಜಿಲ್ಲಾಡಳಿತದಿಂದ ಹೊರತುಪಡಿಸಿ, ಮತ್ತಿತರ ಕಡೆಗಳಿಂದ ಬರುವ ಸುಳ್ಳು ಮಾಹಿತಿಗಳನ್ನು ಸಾಮಾಜಿಕ ಜಾಲತಾಣ ಸೇರಿದಂತೆ ಮತ್ತಿತರ ಕಡೆ ಹಂಚಿಕೊಳ್ಳುವಂತಿಲ್ಲ ಎಂದರು.ಸಹಾಯಕ ಕಮೀಷನರ್ ರಶ್ಮಿ ಎಸ್., ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರ್‌ರು, ಇ.ಓಗಳು ಮತ್ತಿತರರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ