ಖರೀದಿಸಿದ ವಸ್ತುಗಳಿಗೆ ಕಡ್ಡಾಯವಾಗಿ ರಶೀದಿ ಪಡೆಯಿರಿ: ಡಾ. ನಾಗರಾಜ್ ಎಲ್.

KannadaprabhaNewsNetwork | Published : Mar 16, 2025 1:49 AM

ಸಾರಾಂಶ

ವಸ್ತುಗಳ ಗುಣಮಟ್ಟ ಹಾಗೂ ಅಳತೆ, ತೂಕ ನೋಡಿ ಖರೀದಿಸಬೇಕು. ವಸ್ತುಗಳಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಪರಿಹಾರಕ್ಕೆ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಬೇಕು. ಈ ಕುರಿತು ಪ್ರಶಿಕ್ಷಣಾರ್ಥಿಗಳಾದ ತಾವು ತಿಳಿದುಕೊಂಡು ತಮ್ಮ ಕುಟುಂಬ ಹಾಗೂ ನೆರೆಹೊರೆಯವರಿಗೆ ಜಾಗೃತಿ ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್. ಹೇಳಿದರು.

ಹಾವೇರಿ: ಹಣ ನೀಡಿ ವಸ್ತು ಖರೀದಿಸುವ ಹಾಗೂ ಸೇವೆ ಪಡೆಯುವ ಎಲ್ಲರೂ ಗ್ರಾಹಕರಾಗುತ್ತಾರೆ. ಗ್ರಾಹಕರು ಖರೀದಿಸಿದ ಪ್ರತಿ ವಸ್ತುಗಳಿಗೆ ಕಡ್ಡಾಯವಾಗಿ ರಶೀದಿ ಪಡೆಯಬೇಕು. ಒಂದು ವೇಳೆ ತಾವು ಖರೀದಿಸಿದ ವಸ್ತುಗಳಲ್ಲಿ ನ್ಯೂನತೆ ಕಂಡುಬಂದಲ್ಲಿ ಗ್ರಾಹಕರ ವ್ಯಾಜ್ಯಗಳ ಆಯೋಗದಲ್ಲಿ ದೂರು ದಾಖಲಿಸುವ ಮೂಲಕ ಪರಿಹಾರ ಪಡೆದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್. ಹೇಳಿದರು.

ನಗರದ ಶ್ರೀ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಚೈತನ್ಯ ಸಂಸ್ಥೆ ಜಿಲ್ಲಾ ಮಾಹಿತಿ ಕೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಹಾಗೂ ಶ್ರೀ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ ಹಾಗೂ ಎನ್.ಎಸ್.ಎಸ್. ಘಟಕ ಸಹಯೋಗದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಸ್ತುಗಳ ಗುಣಮಟ್ಟ ಹಾಗೂ ಅಳತೆ, ತೂಕ ನೋಡಿ ಖರೀದಿಸಬೇಕು. ವಸ್ತುಗಳಲ್ಲಿ ಲೋಪದೋಷಗಳು ಕಂಡುಬಂದಲ್ಲಿ ಪರಿಹಾರಕ್ಕೆ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಬೇಕು. ಈ ಕುರಿತು ಪ್ರಶಿಕ್ಷಣಾರ್ಥಿಗಳಾದ ತಾವು ತಿಳಿದುಕೊಂಡು ತಮ್ಮ ಕುಟುಂಬ ಹಾಗೂ ನೆರೆಹೊರೆಯವರಿಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಆರ್. ಮುತಾಲಿಕದೇಸಾಯಿ, ಗ್ರಾಹಕರ ಹಕ್ಕುಗಳ ಕುರಿತು ಎಲ್ಲರೂ ತಿಳಿದುಕೊಳ್ಳಬೇಕು. ಇಂದು ಆನ್‌ಲೈನ್ ವ್ಯವಹಾರ ಹೆಚ್ಚಾಗಿದೆ. ಆನ್‌ಲೈನ್ ಖರೀದಿಯಲ್ಲಿ ಅನೇಕ ಮೋಸಗಳು ಕಂಡುಬರುತ್ತಿವೆ. ಆನ್‌ಲೈನ್‌ನಲ್ಲಿ ವಸ್ತುಗಳ ಖರೀದಿ ಸಮಯದಲ್ಲಿ ಬಹಳ ಜಾಗರೂಕತೆಯಿಂದ ವ್ಯವಹಾರ ಮಾಡಬೇಕು. ಒಂದು ವೇಳೆ ಗ್ರಾಹಕರ ಹಕ್ಕುಗಳಿಗೆ ಚ್ಯುತಿಬಂದಾಗ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿ ನ್ಯಾಯ ಪಡೆದುಕೊಳ್ಳಬಹುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಈಶ್ವರಪ್ಪ ಬಿ.ಎಸ್. ಮಾತನಾಡಿ, ಗ್ರಾಹಕರು ಡಿಜಿಟಲ್ ಹಣಕಾಸು ವ್ಯವಹಾರವನ್ನು ಬಹಳ ಜಾಗರೂಕತೆಯಿಂದ ಮಾಡಬೇಕು. ಖರೀದಿಸಿದ ವಸ್ತುಗಳಲ್ಲಿ ಹಾಗೂ ಸೇವೆಯಲ್ಲಿ ದೋಷಗಳು ಕಂಡುಬಂದಲ್ಲಿ ಎರಡು ವರ್ಷದೊಳಗಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿ ಪರಿಹಾರ ಪಡೆಯಬಹುದು ಎಂದು ಹೇಳಿದರು.

ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್.ಎನ್. ಡಿಳ್ಳೆಪ್ಪನವರ ಉಪನ್ಯಾಸ ನೀಡಿದರು. ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್. ಜತ್ತಿ ಹಾಗೂ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಮಂಜುನಾಥ ವಡ್ಡರ ಗ್ರಾಹಕರ ಕಾಯ್ದೆಗಳ ಕುರಿತು ಮಾತನಾಡಿದರು. ಹೊಸಮಠದ ಬಸವಶಾಂತಲಿಂಗ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಎಂ.ಎಸ್. ರಮೇಶ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಉಮಾದೇವಿ ಎಸ್. ಹಿರೇಮಠ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕ ಕುಮಾರ ವಡ್ಡನಕಟ್ಟಿ ಉಪಸ್ಥಿತರಿದ್ದರು. ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ನಿರ್ದೇಶಕ ಎಸ್.ಎಚ್. ಮಜೀದ್ ಸ್ವಾಗತಿಸಿದರು.

Share this article