ಮಂಗಳಮುಖಿಯರ ವೇಷ ಧರಿಸಿ ಭಿಕ್ಷಾಟನೆ: ಕ್ರಮಕ್ಕೆ ಜಿಪಂ ಸಿಇಒ ಸೂಚನೆ

KannadaprabhaNewsNetwork |  
Published : Feb 25, 2025, 12:48 AM IST
ಸಭೆಯಲ್ಲಿ ಮಾತನಾಡುತ್ತಿರುವ ಜಿಪಂ ಸಿಇಒ ಆನಂದ್‌  | Kannada Prabha

ಸಾರಾಂಶ

ಮಂಗಳೂರಿನಲ್ಲಿ ಬೇರೆ ರಾಜ್ಯದ ಮಹಿಳೆಯರು ಮಂಗಳಮುಖಿಯರಂತೆ ವೇಷಧರಿಸಿ ಭಿಕ್ಷಾಟನೆ, ವೇಶ್ಯಾವಾಟಿಕೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಸಮಿತಿ ಸಭೆಯಲ್ಲಿ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ನಗರದಲ್ಲಿ ಬೇರೆ ರಾಜ್ಯದ ಮಹಿಳೆಯರು ಮಂಗಳಮುಖಿಯರಂತೆ ವೇಷಧರಿಸಿ ಭಿಕ್ಷಾಟನೆ, ವೇಶ್ಯಾವಾಟಿಕೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್‌ ಅವರು ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಿಕ್ಷಾಟನೆಯ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಧನಶ್ರೀ (ಎಚ್ಐವಿ ಸೋಂಕಿತ ಮಹಿಳೆಯರಿಗೆ) ಮತ್ತು ಚೇತನ ಯೋಜನೆಯಡಿ (ದಮನಿತ ಮಹಿಳೆಯರಿಗೆ) ಸ್ವ ಉದ್ಯೋಗಕ್ಕೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಯೋಜನೆಯ ಮಾಹಿತಿಯನ್ನು ಅವರಿಗೆ ನೀಡಬೇಕು. ಜಿಲ್ಲೆಯಲ್ಲಿನ ತೃತೀಯ ಲಿಂಗಿಗಳಿಗೆ ಗುರುತು ಚೀಟಿಗೆ ನೋಂದಾಯಿಸಲು ವ್ಯಕ್ತಿಗಳ ಪರಿಶೀಲನೆ ನಡೆಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬ್ಯಾಂಕ್ ಪಾಸ್ ಬುಕ್, ಪಡಿತರ ಚೀಟಿ, ವೋಟರ್ ಐಡಿ, ಆಧಾರ್ ಕಾರ್ಡ್, ವಿಮಾ ಯೋಜನೆಗಳನ್ನು ಅವರಿಗೆ ಒದಗಿಸಬೇಕು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಅವರಿಗೆ ನಿವೇಶನ ಒದಗಿಸಿಕೊಡುವ ಪ್ರಯತ್ನವಾಗಬೇಕು ಎಂದು ತಿಳಿಸಿದರು.

ಪ್ರತಿಯೊಂದು ವಿದ್ಯಾ ಸಂಸ್ಥೆಯಲ್ಲಿ ಎಚ್‍ಐವಿ ಸೋಂಕಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಮಾಡಬೇಕು. ಎಚ್ಐವಿ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ಏರ್ಪಡಿಸಬೇಕು. ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಹೊಟೇಲ್‌, ರೆಸ್ಟೋರೆಂಟ್‍ಗಳಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿಲ್ಲ ಎಂಬ ಸ್ವಯಂ ಘೋಷಣೆಯ ಬೋರ್ಡ್ ಹಾಕಬೇಕು . ಕೌಟುಂಬಿಕ ಹಿಂಸೆ, ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಾಟ ಮತ್ತು ಮಾರಾಟ, ಮಹಿಳೆಯರ ವಿರುದ್ಧ ನಡೆಯುವ ದೌರ್ಜನ್ಯಗಳ ಬಗ್ಗೆ ಪ್ರತಿ ಗ್ರಾಮ ಸಭೆಯಲ್ಲಿ ಚರ್ಚಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಒ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಎ., ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ವಿಟ್ಲ, ಪುತ್ತೂರು ಹಾಗೂ ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಇಲಾಖಾಧಿಕಾರಿಗಳು ಇದ್ದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ