ಬಳ್ಳಾರಿ: ಜಿಲ್ಲೆಯು ಕೇವಲ ಗಣಿನಾಡು ಅಷ್ಟೇ ಅಲ್ಲ, ಅನೇಕ ಪ್ರತಿಭಾನ್ವಿತ ಕಲಾವಿದರನ್ನೊಳಗೊಂಡ ಸಮೃದ್ಧ ಸಾಂಸ್ಕೃತಿಕ ಜಿಲ್ಲೆಯಾಗಿದೆ ಎಂದು ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ತಿಳಿಸಿದರು.
ಈ ಜಿಲ್ಲೆಯ ಅನೇಕ ಕಲಾವಿದರು ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿ, ಜಿಲ್ಲೆಯ ಹೆಸರು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.
ಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಕಲಾವಿದರಾದ ಬಳ್ಳಾರಿ ರಾಘವ, ಬೆಳಗಲ್ ವೀರಣ್ಣ, ಜೋಳದರಾಶಿ ದೊಡ್ಡನಗೌಡರು, ಮನ್ಸೂರ್ ಸುಭದ್ರಮ್ಮನವರು ಮತ್ತಿತರರು ಸಾಂಸ್ಕೃತಿಕ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪ್ರತಿಭಾನ್ವಿತರು ದೊಡ್ಡ ಸಂಖ್ಯೆಯಲ್ಲಿದ್ದು, ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ. ಜಿಲ್ಲಾ ಮಟ್ಟದಲ್ಲಿ ಜರುಗುವ ಇಂತಹ ಕಲಾ ಪ್ರತಿಭೋತ್ಸವದಲ್ಲಿ ಯುವ ಸಮುದಾಯ ಪಾಲ್ಗೊಳ್ಳುವುದರಿಂದ ಅವರಲ್ಲಿನ ಪ್ರತಿಭೆ ಅನಾವರಣಕ್ಕೆ ಅವಕಾಶವಾಗಲಿದೆ ಎಂದರು.ಕಲಾವಿದರು ಸೇರಿದಂತೆ ನಾಡಿನ ಪ್ರತಿಭಾನ್ವಿತರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿ, ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದೆ. ಜಿಲ್ಲೆಯ ಕಲಾವಿದರು ಹಾಗೂ ಕಲಾ ಸಂಘ-ಸಂಸ್ಥೆಗಳು ಸರ್ಕಾರದ ಅನೇಕ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಲಾವಿದರು ಹಾಗೂ ಕಲಾ ಸಂಸ್ಥೆಗಳು ಆಯೋಜಿಸುವ ವಿವಿಧ ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಜಾನಪದ ಗೀತೆ ಗಾಯನ ಜರುಗಿದವು. ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ನಾಡೋಜ ಸುಭದ್ರಮ್ಮ ಮನ್ಸೂರ್ ಬಯಲು ರಂಗಮಂದಿರದಲ್ಲಿ ಚಿತ್ರಕಲಾ ಸ್ಪರ್ಧೆ (ಸ್ವಕಲ್ಪಿತ), ನಗರದ ಸಾಂಸ್ಕೃತಿಕ ಸಮುಚ್ಛಯದ ಹೊಂಗಿರಣ ಸಭಾಂಗಣದಲ್ಲಿ ಹಿಂದೂಸ್ಥಾನಿ, ಕರ್ನಾಟಕ ಶಾಸ್ತ್ರೀಯ ವಾದ್ಯ, ಹಿಂದೂಸ್ಥಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ಸುಮಾರು 60ಕ್ಕಿಂತ ಹೆಚ್ಚು ಸ್ಪರ್ಧಿಗಳು ಭಾಗವಹಿಸಿ ತಮ್ಮ ಕಲಾ ಪ್ರದರ್ಶನ ನೀಡಿದರು.