ಕನ್ನಡಪ್ರಭ ವಾರ್ತೆ ಉಡುಪಿಬ್ಲಾಗರ್‌ಗಳು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಕುರಿತು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನರಿಗೆ ಮಾಹಿತಿ ನೀಡುವುದರಿಂದ ಜಿಲ್ಲೆಯ ಪ್ರವಾಸಿಗರ ಸಂಖ್ಯೆ ಹೆಚ್ಚುವುದರ ಜೊತೆಗೆ ಈ ಭಾಗದ ಜನರಿಗೆ ಉದ್ಯೋಗ ಅವಕಾಶಗಳು ಲಭಿಸಿ ಆರ್ಥಿಕ ಲಾಭವಾಗಲಿದೆ ಎಂದು ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.
ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯ ಸುಂದರ ಪ್ರಾಕೃತಿಕ ತಾಣಗಳು, ಧಾರ್ಮಿಕ ಕೇಂದ್ರಗಳು, ಕಡಲ ತೀರಗಳು, ಹಳ್ಳ ಕೊಳ್ಳಗಳು ಸೇರಿದಂತೆ ಅನೇಕ ಪ್ರವಾಸಿ ತಾಣಗಳಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಜಿಲ್ಲೆಯ ಪ್ರವಾಸೋದ್ಯಮದ ಬೆಳವಣಿಗೆಗೆ ಬ್ಲಾಗರ್‌ಗಳು ಇನ್ನಷ್ಟು ಪ್ರೋತ್ಸಹವನ್ನು ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅಸೋಸಿಯೇಶನ್ ಆಫ್ ಕೋಸ್ಟಲ್ ಟೂರಿಸಂ ಅಧ್ಯಕ್ಷ ಮನೋಹರ್ ಶೆಟ್ಟಿ, ದೇಶ ವಿದೇಶಗಳ ಜನರಿಗೆ ಜಿಲ್ಲೆಯ ಸಂಸ್ಕೃತಿ, ಆಚರಣೆ ಹಾಗೂ ಪ್ರವಾಸಿ ತಾಣಗಳ ಕುರಿತು ಮಾಹಿತಿ ನೀಡುವುದರೊಂದಿಗೆ ಪ್ರವಾಸಿಗರನ್ನು ಜಿಲ್ಲೆಯತ್ತ ಸೆಳೆಯುವ ಕಾರ್ಯವಾಗಬೇಕು ಎಂದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸಿ.ಯು. ಕುಮಾರ್, ಟ್ರಾವೆಲ್ ಅಸೋಸಿಯೇಷನ್ ಅಧ್ಯಕ್ಷ ನಾಗರಾಜ ಹೆಬ್ಬಾರ್, ಉಡುಪಿ ಜಿಲ್ಲಾ ಪ್ರವಾಸೋದ್ಯಮದ ಭಾಗಿದಾರರು, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಬ್ಲಾಗರ್ಸ್‌ಗಳು ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.