ಕನ್ನಡಪ್ರಭ ವಾರ್ತೆ ಕಲಬುರಗಿ
ಶನಿವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲಬುರಗಿ ನಗರದಲ್ಲಿನ ವಿವಿಧ ಸಮಸ್ಯೆಗಳನ್ನು ನೇರವಾಗಿ ಸಾರ್ವಜನಿಕರಿಂದ ಕೇಳಿ ಪರಿಹಾರ ಹುಡುಕುವ ನಿಟ್ಟಿನಲ್ಲಿ ಜನಸ್ಪಂದನಾ ಸಭೆ ಆಯೋಜಿಸಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಬರಬೇಕು. ಅಂದು ಬೆ.10.30 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಸಾರ್ವಜನಿಕ ಅಹವಾಲು ಆಲಿಸಲಾಗುತ್ತದೆ ಎಂದರು.
ಕಳೆದ ಬಾರಿ ಚಿಂಚೊಳಿಯಲ್ಲಿ ನಡೆಸಿದ ಚೊಚ್ಚಲ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದ 612 ಅರ್ಜಿಗಳಲ್ಲಿ 606 ಅರ್ಜಿಗಳನ್ನು ವಿಲೇವಾರಿ ಮಾಡಿದ್ದು, ಕೇವಲ 6 ಅರ್ಜಿಗಳು ಮಾತ್ರ ವಿಲೇವಾರಿಗೆ ಬಾಕಿ ಉಳಿದಿವೆ ಎಂದು ಮಾಹಿತಿ ನೀಡಿದರು.2023ರ ಮುಂಗಾರು ಹಿಂಗಾರಿನಲ್ಲಿ ಮಳೆರಾಯ ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಸುಮಾರು 33,000 ಕೋಟಿ ರೂ. ಬೆಳೆ ಹಾನಿಯಾಗಿದ್ದು, ಇದರಲ್ಲಿ 19,000 ಕೋಟಿ ರೂ. ಪರಿಹಾರ ನೀಡಬೇಕೆಂದು ಕೇಂದ್ರಕ್ಕೆ ಮನವಿ ಮಾಡಿದ್ದು, ಇದೂವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಇದಲ್ಲದೆ ರೈತರಿಗೆ ಹೆಚ್ಚಿನ ಪರಿಹಾರ ನೀಡುವ ನಿಟ್ಟಿನಲ್ಲಿ ಎನ್.ಡಿ.ಆರ್.ಎಫ್. ಮಾರ್ಗಸೂಚಿ ತಿದ್ದುಪಡಿ ಮಾಡುವಂತೆ ಸಹ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿಗಳು ಖುದ್ದಾಗಿ ಪ್ರಧಾನಮಂತ್ರಿಗೆ ಭೇಟಿಯಾಗಿ ಮನವರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಮಲತಾಯಿ ದೋರಣೆ ಅನುಸರಿಸುತ್ತಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ರಸ್ತೆ ಸಂಪರ್ಕ ಸುಧಾರಣೆ: ಜಿಲ್ಲೆಯಲ್ಲಿ ಗ್ರಾಮೀಣ, ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳನ್ನು ಸುಧಾರಣೆ ಮಾಡಲಾಗುತ್ತಿದೆ. ಮುಂದಿನ 4 ವರ್ಷದಲ್ಲಿ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ 9,000 ಕೋಟಿ ರು.ಗೆ ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ಜಿಲ್ಲೆಯಲ್ಲಿನ ರಸ್ತೆಗಳನ್ನು ತೆಗೆದುಕೊಳ್ಳುವಂತೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಲ್ಲಿ ಮನವಿ ಮಾಡಿಕೊಂಡಿದ್ದೇನೆ ಎಂದರು.