ಬೆಂಗಳೂರು : ಕರ್ತವ್ಯದ ವೇಳೆ ಮೃತಪಟ್ಟ 100 ಮಂದಿ ಸರ್ಕಾರಿ ನೌಕರರ ಅವಲಂಬಿತರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅನುಕಂಪದ ಆಧಾರದ ಮೇಲಿನ ನೇಮಕಾತಿ ಆದೇಶ ಪತ್ರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿತರಿಸಿದರು.
ಆರೋಗ್ಯ ಸೌಧದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ನೇಮಕಾತಿ ಪತ್ರ ವಿತರಿಸಿ ನಂತರ ಮಾತನಾಡಿದ ದಿನೇಶ್ ಗುಂಡೂರಾವ್, ನೌಕರರು ಮೃತಪಟ್ಟ ನಂತರ ಅವರ ಕುಟುಂಬದವರು ಆರ್ಥಿಕ ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಳ್ಳಲು ಅನುಕಂಪದ ಆಧಾರದಲ್ಲಿ ಕೆಲಸ ನೀಡಲಾಗುತ್ತಿದೆ. ಈವರೆಗೆ 116 ಮಂದಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲಾಗಿದ್ದು, ಇನ್ನೂ 60 ಪ್ರಕರಣಗಳಲ್ಲಿ ಉದ್ಯೋಗ ನೀಡುವುದು ಬಾಕಿಯಿದೆ. ಶೀಘ್ರದಲ್ಲಿ ಆ ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ಉದ್ಯೋಗ ನೀಡಲಾಗುವುದು ಎಂದು ಭರವಸೆ ನೀಡಿದರು. ಆರೋಗ್ಯ ಇಲಾಖೆಯಲ್ಲಿ ಅನುಕಂಪದ ಆಧಾರದಲ್ಲಿ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ಆರೋಗ್ಯಾಧಿಕಾರಿ ಮತ್ತು ಡಿ ದರ್ಜೆ ಹುದ್ದೆಗಳನ್ನು ನೀಡಲಾಗುತ್ತಿದೆ. ಅಭ್ಯರ್ಥಿಗಳ ವಿದ್ಯಾರ್ಹತೆಯನ್ನಾಧರಿಸಿ ಉದ್ಯೋಗ ನೀಡಲಾಗುವುದು ಎಂದರು.
ಆರೋಗ್ಯ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ನಿರ್ದೇಶಕ ವಸಂತ್‌ಕುಮಾರ್ ಇತರರಿದ್ದರು.