ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯ ವಿದ್ಯಾರ್ಥಿ ನಿಲಯಗಳಿಗೆ 40 ಕೋಟಿ ರು. ವೆಚ್ಚದಲ್ಲಿ ತಲಾ 15,000 ಟೂ ಟಯರ್ ಕಾಟ್ (ಮಂಚ) ಹಾಗೂ ಕಾಯಿರ್ ಮ್ಯಾಟ್ರಸ್ (ತೆಂಗಿನ ನಾರಿನ ಹಾಸಿಗೆ) ಖರೀದಿ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇದೇ ವೇಳೆ ಹಿಂದುಳಿದ ವರ್ಗಗಳಿಗೆ ಸೇರಿದ ನಿರುದ್ಯೋಗಿಗಳಿಗೆ 33.09 ಕೋಟಿ ರು.ಗಳ ಅಂದಾಜು ವೆಚ್ಚದಲ್ಲಿ 1,103 ವಿದ್ಯುತ್ ಚಾಲಿತ ನಾಲ್ಕು ಚಕ್ರಗಳ ಆಹಾರ ಕಿಯೋಸ್ಕ್ ವಾಹನಗಳನ್ನು ಖರೀದಿಸಿ ವಿತರಿಸಲು ತೀರ್ಮಾನಿಸಲಾಗಿದೆ.
ಉಳಿದಂತೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ವರದಾ ನದಿಯಿಂದ ನರೇಗಲ್ ಹಾಗೂ ಕುಸನೂರ ಏತ ನೀರಾವರಿ ಮುಖಾಂತರ 111 ಕೆರೆ ತುಂಬಿಸುವ ಯೋಜನೆಯನ್ನು 220 ಕೋಟಿ ರು. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಬಾಗಲಕೋಟೆ ತಾಲೂಕಿನ ಸೊಕನಾದಗಿ ಗ್ರಾಮ ಮತ್ತು ಸುತ್ತಮುತ್ತಲಿನ 588 ಹೆಕ್ಟೇರ್ ಕ್ಷೇತ್ರಕ್ಕೆ 17 ಕೋಟಿ ರು. ವೆಚ್ಚದಲ್ಲಿ ಏತ ನೀರಾವರಿ ಯೋಜನೆಯ ಮೂಲಕ ನೀರಾವರಿ ಸೌಲಭ್ಯ, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ 33.78 ಕೋಟಿ ರು. ವೆಚ್ಚದಲ್ಲಿ 100 ಹಾಸಿಗೆಗಳ ತಾಲೂಕು ಮಟ್ಟದ ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.
ಕಾರ್ಮಿಕರ ರಾಜ್ಯ ವಿಮಾ ಸೊಸೈಟಿ ರಚನೆ:
ಕಾರ್ಮಿಕ ರಾಜ್ಯ ವಿಮಾ ಯೋಜನೆ, ವೈದ್ಯಕೀಯ ಸೇವೆಗಳು ಇಲಾಖೆಯನ್ನು ಇಎಸ್‌ಐಸಿ ಮಾರ್ಗಸೂಚಿ ಅನ್ವಯ ಸೊಸೈಟಿ ನೋಂದಣಿ ಕಾಯ್ದೆ -1860 ಅಡಿಯಲ್ಲಿ ನೋಂದಾಯಿಸಿ ‘ಕರ್ನಾಟಕ ಕಾರ್ಮಿಕರ ರಾಜ್ಯ ವಿಮಾ ಸೊಸೈಟಿ’ ರೂಪಿಸಲು ನಿರ್ಧಾರ ಮಾಡಲಾಗಿದೆ.
ಇತರೆ ತೀರ್ಮಾನಗಳು:
- ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿರುವ 100 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನು 91.25 ಕೋಟಿ ರು. ವೆಚ್ಚದಲ್ಲಿ 200 ಸಾಮರ್ಥ್ಯದ ಆಸ್ಪತ್ರೆಯಾಗಿ ಉನ್ನತೀಕರಣ.
- ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 36 ಕೋಟಿ ರು. ವೆಚ್ಚದಲ್ಲಿ 100 ಹಾಸಿಗೆಗಳ ಸಾಮರ್ಥ್ಯದ ಕ್ಯಾನ್ಸರ್ ಆಸ್ಪತ್ರೆ.
- ರಾಜ್ಯದ 15 ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ 15 ಮಹಿಳಾ ಕಾಲೇಜು ಕಟ್ಟಡಗಳ ನಿರ್ಮಾಣದ ₹87.60 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.
-90 ಕೋಟಿ ರು. ವೆಚ್ಚದಲ್ಲಿ ಹಾರಂಗಿ ಬಲದಂಡೆ ನಾಲೆಯಡಿ ಬರುವ ಮರೂರು ಶಾಖಾ ನಾಲಾ ಹಾಗೂ ಅದರಡಿ ಬರುವ ವಿತರಣಾ ನಾಲೆಗಳ ಆಧುನೀಕರಣ.
- 49.85 ಕೋಟಿ ರು. ವೆಚ್ಚದಲ್ಲಿ ಮೈಸೂರು ಜಿಲ್ಲೆ, ಹುಣಸೂರು ತಾಲೂಕಿನ ಕಟ್ಟೆಮಳವಾಡಿ ಅಣೆಕಟ್ಟು ನಾಲೆ ಮತ್ತು ವಡಕಕಟ್ಟೆ ಹೈಲೆವೆಲ್ ನಾಲೆಗಳ ಆಧುನೀಕರಣ.