;Resize=(412,232))
ಬಳ್ಳಾರಿ/ಹೊಸಪೇಟೆ: ರಾಜ್ಯದಲ್ಲಿ ಕಳೆದ 75 ವರ್ಷಗಳಲ್ಲೇ ಕಾಣದಂತಹ ಭೀಕರ ಬರಗಾಲ ಎದುರಾಗಿದ್ದು, ಶೇ.90ರಷ್ಟು ಬೆಳೆ ಹಾನಿಯಾಗಿದೆ. ತೊಗರಿ, ಜೋಳ ಸೇರಿ ರೈತರು ಬೆಳೆದ ಬೆಳೆಗಳು ಸಂಪೂರ್ಣ ನೆಲಕಚ್ಚಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬಳ್ಳಾರಿ ಹಾಗೂ ಹೊಸಪೇಟೆ ತಾಲೂಕಿನಲ್ಲಿ ಬುಧವಾರ ಬರ ಪರಿಶೀಲನೆ ನಡೆಸಿದ ಡಿಸಿಎಂ, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಬರದಿಂದ ಸುಮಾರು ₹46000 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಆದರೆ, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ನೀಡಲು ಅವಕಾಶವಿರುವ ಪ್ರಮಾಣ ಪರಿಗಣಿಸಿ ₹10ರಿಂದ ₹11 ಸಾವಿರ ಕೋಟಿ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಈಗಾಗಲೇ ಎರಡು ಬಾರಿ ಮನವಿ ಸಲ್ಲಿಸಲಾಗಿದೆ ಎಂದರು. ಕರಾವಳಿ ತೀರದ 10–15 ತಾಲೂಕುಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಭಾಗಗಳಲ್ಲಿ ಭೀಕರ ಬರ ಆವರಿಸಿದೆ. ಈಗಾಗಲೇ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಉಳಿದ 23 ತಾಲೂಕುಗಳಲ್ಲಿ ಕ್ಷೇತ್ರಗಳ ವಾಸ್ತವಿಕ ಪರಿಶೀಲನೆ ನಡೆಯುತ್ತಿದೆ. ಅವುಗಳಲ್ಲಿಯೂ 10 ರಿಂದ 15 ತಾಲೂಕುಗಳನ್ನು ಶೀಘ್ರವೇ ಬರಪೀಡಿತ ಪಟ್ಟಿಗೆ ಸೇರಿಸಲಾಗುವುದು ಎಂದರು.
ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ನಿಲ್ಲಲಿದ್ದು, ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಬಾರದು. ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಸಾಲ ವಸೂಲಾತಿಯನ್ನು ಒಂದು ವರ್ಷ ಮುಂದೂಡಲು ಸೂಚನೆ ನೀಡಲಾಗಿದೆ. ಇದಲ್ಲದೆ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ವಿದ್ಯುತ್ ಸಬ್ಸಿಡಿ ಮೂಲಕ ಬಡ ಹಾಗೂ ರೈತ ಕುಟುಂಬಗಳಿಗೆ ವಾರ್ಷಿಕ ₹60,000 ದಿಂದ ₹70,000 ಕೋಟಿ ಆರ್ಥಿಕ ನೆರವು ತಲುಪುತ್ತಿದೆ. ಬರ ಪರಿಹಾರ ಕಾಮಗಾರಿಗಳೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಸ್ಪಷ್ಟಪಡಿಸಿದರು