;Resize=(412,232))
ದಾವಣಗೆರೆ : ಉತ್ತರ ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಪರವಾಗಿ ಹೋರಾಟ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇದೀಗ, ಮಧ್ಯ ಕರ್ನಾಟಕದಲ್ಲಿ ಮೆಕ್ಕೆಜೋಳ ರೈತರ ಪರ ಹೋರಾಟ ನಡೆಸಲಿದ್ದಾರೆ. ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸುವಂತೆ ಹಾಗೂ ಶೀಘ್ರ ಖರೀದಿ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸಿ ದಾವಣಗೆರೆಯಲ್ಲಿ ಮಂಗಳವಾರ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಈ ಬಗ್ಗೆ ಮಾಹಿತಿ ನೀಡಿದರು. ಮಂಗಳವಾರ ಬೆಳಗ್ಗೆ 10.30ಕ್ಕೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಎತ್ತಿನ ಗಾಡಿಗಳಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬಳಿಕ, ಉಪವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ನಂತರ, ಸಮಾವೇಶ ನಡೆಸಿ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಲಾಗುವುದು. ಜಿಲ್ಲೆಯ ಎಲ್ಲ ತಾಲೂಕುಗಳಿಂದ ರೈತರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಗೆ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದರು.
ನ.27 ಮತ್ತು 28ರಂದು ಬಿಜೆಪಿ ಮಂಡಳ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಹೋರಾಟ ನಡೆಯಲಿದೆ. ಅಲ್ಲದೆ, ಡಿ.1 ಮತ್ತು 2ರಂದು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
-ಇತ್ತೀಚೆಗೆ ಮೆಕ್ಕೆಜೋಳ ಬೆಲೆ ಕುಸಿತ, ರಾಜ್ಯದ ವಿವಿಧೆಡೆ ಪ್ರತಿಭಟನೆ
-ಇದೀಗ ಹೋರಾಟದ ಅಖಾಡಕ್ಕೆ ಬಿಜೆಪಿ, ವಿವಿಧೆಡೆ ಧರಣಿಗೆ ಸಜ್ಜು
-ಮೆಕ್ಕೆಜೋಳದ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಆಗ್ರಹ
-ನ.27 ಮತ್ತು 28ರಂದು ಬಿಜೆಪಿ ಮಂಡಳ ವ್ಯಾಪ್ತಿಯಲ್ಲಿ ಹೋರಾಟ
-ಡಿ.1 ಮತ್ತು 2ರಂದು ಆಯಾ ಜಿಲ್ಲಾ ಕೇಂದ್ರದಲ್ಲಿ ಪಕ್ಷ ಪ್ರತಿಭಟನೆ