;Resize=(412,232))
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ, ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಹಾಗೂ ಆಶಾ ಕಾರ್ಯಕರ್ತೆಯರ ಸಂಘ ಸೋಮವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ.
ನಗರದ ಸ್ವಾತಂತ್ರ್ಯ ಉದ್ಯಾನ ಸೇರಿದಂತೆ ಮಂಡ್ಯ ಮತ್ತು ಹುಬ್ಬಳ್ಳಿಯಲ್ಲಿ ಕೇಂದ್ರ ಸರ್ಕಾರದ ಸಚಿವರ ನಿವಾಸಗಳ ಎದುರು ಪ್ರತಿಭಟಿಸುವುದರೊಂದಿಗೆ ರಾಜ್ಯಾದ್ಯಂತ ಹೋರಾಟ ಆರಂಭಿಸಲಾಗಿದೆ. ತುಮಕೂರಿನಲ್ಲಿ ಅಹೋರಾತ್ರಿ ಧರಣಿ ನಡೆಯುತ್ತಿದೆ.
ಅಂಗನವಾಡಿ ಘಟಕ ವೆಚ್ಚ ಹೆಚ್ಚಳ ಮಾಡಿ, ಸ್ಥಳೀಯ ಆಹಾರ ಪದಾರ್ಥಗಳನ್ನು ನೀಡಬೇಕು. ಆದರೆ, 2018ರಿಂದ ಅಂಗನವಾಡಿ ನೌಕರರಿಗೆ ಕೇಂದ್ರ ಸರ್ಕಾರ ವೇತನ ಹೆಚ್ಚಳ ಮಾಡಲಿಲ್ಲ. ಇಂದಿಗೂ ಅಂಗನವಾಡಿ ಕಾರ್ಯಕರ್ತೆಗೆ 2,700 ರು., ಸಹಾಯಕಿಯರಿಗೆ 1,350 ರು. ಮಾತ್ರ ಕೇಂದ್ರ ಸರ್ಕಾರ ನೀಡುತ್ತಿದೆ. ಕನಿಷ್ಠ ವೇತನವನ್ನೂ ನೀಡುತ್ತಿಲ್ಲ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೌತಿಕ ಗುರುತು ವ್ಯವಸ್ಥೆ (ಎಫ್‌ಆರ್‌ಎಸ್) ರದ್ದು ಮಾಡಬೇಕು. ಇಲ್ಲದಿದ್ದರೆ ಎಫ್‌ಆರ್‌ಎಸ್ ಇರುವ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ವೈಫೈ ವ್ಯವಸ್ಥೆ ಅಳವಡಿಸಬೇಕು. ಅಂಗನವಾಡಿ ನೌಕರರನ್ನು ಚುನಾವಣಾ ಕೆಲಸಗಳಿಗೆ ಬಳಸಬಾರದು. ಅಂಗನವಾಡಿ ನೌಕರರನ್ನು 3 ಮತ್ತು 4ನೇ ದರ್ಜೆ ನೌಕರರನ್ನಾಗಿ ಪರಿಗಣಿಸಬೇಕು ಪ್ರತಿಭಟನಾಕಾರರು ಒತ್ತಾಯಿಸಿದರು.
ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇಎಸ್‌ಐ, ಪಿಎಫ್ ವ್ಯವಸ್ಥೆಯಿದೆ. ನಿಗದಿತ ವೇತನ ನೀಡಲಾಗುತ್ತಿದೆ. ಆದರೆ, ದೇಶಾದ್ಯಂತ 64 ಲಕ್ಷ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ನೀಡದಿರುವುದು ಖಂಡನೀಯ. ಅಲ್ಲದೆ, ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯರನ್ನು ಕಾಯಂಗೊಳಿಸದೇ ಶೋಷಣೆ ಮಾಡಲಾಗುತ್ತಿದೆ. ಈ ಎಲ್ಲ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾ ಸಭೆಯಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವರಲಕ್ಷ್ಮಿ ಸೇರಿದಂತೆ ಇತರರಿದ್ದರು.