ಬೆಂಗಳೂರು : ದ್ವೇಷ ಭಾಷಣ, ದ್ವೇಷದ ಅಪರಾಧ ತಡೆ ಹಾಗೂ ಸುಳ್ಳು ಸುದ್ದಿ, ಅಪಪ್ರಚಾರ ನಿಯಂತ್ರಣಕ್ಕೆ ಪ್ರತ್ಯೇಕ ವಿಧೇಯಕಗಳನ್ನು ಜಾರಿಗೆ ತರುವ ಸಂಬಂಧ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆಸಲಾಯಿತು.
ರಾಜ್ಯದಲ್ಲಿ ದ್ವೇಷ ಭಾಷಣ ತಡೆಯಲು ಮುಂದಿನ ಅಧಿವೇಶನದಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಮಂಡಿಸುವ ಕುರಿತು ವಿವಿಧ ಅಂಶಗಳನ್ನು ಚರ್ಚಿಸಲಾಯಿತು.
ರಾಜ್ಯದಲ್ಲಿ ದ್ವೇಷ ಭಾಷಣ ಪ್ರಕರಣಗಳು ಹೆಚ್ಚಾಗಿವೆ. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆ ಸೇರಿ ಹಲವೆಡೆ ದ್ವೇಷ ಭಾಷಣ, ಪ್ರಚೋದನೆಗಳು ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಕೆಲವರನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಸಹ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ತಡೆಗೆ ವಿಧೇಯಕ ಜಾರಿಗೆ ಪ್ರಸ್ತಾಪಿಸಿದೆ.
ಶುಕ್ರವಾರ ಗೃಹ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ದ್ವೇಷ ಭಾಷಣ ಮೂಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಶಿಕ್ಷೆ ವಿಧಿಸಲು ವಿಧೇಯಕದಲ್ಲಿ ಅವಕಾಶ ಮಾಡಿಕೊಡುವ ಬಗ್ಗೆ ಚರ್ಚಿಸಲಾಗಿದೆ. ಕಾನೂನು ಉಲ್ಲಂಘನೆಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ 5 ಸಾವಿರ ದಂಡದ ಜತೆಗೆ ಶಿಕ್ಷೆ ವಿಧಿಸಲು ಪ್ರಸ್ತಾಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಳ್ಳು ಸುದ್ದಿ ಮೇಲೆ ನಿಗಾ ಇಡಲು ವಿಧೇಯಕ:
ರಾಜ್ಯದಲ್ಲಿ ಸುಳ್ಳು ಸುದ್ದಿಯನ್ನು ಹರಡುತ್ತಿರುವವರ ಮೇಲೆ ನಿಗಾ ಇಟ್ಟು ನಿಯಂತ್ರಿಸಲು ಸುದ್ದಿ ಮಾಧ್ಯಮ, ಸಾಮಾಜಿಕ ಜಾಲತಾಣಗಳ ಮೂಲಕ ತಪ್ಪು ಮಾಹಿತಿ ಹಾಗೂ ಸುಳ್ಳು ಸುದ್ದಿ ಹರಡುವುದನ್ನು ನಿಯಂತ್ರಿಸಲು ವಿಧೇಯಕ ಜಾರಿಗೆ ತರಲು ಚರ್ಚಿಸಲಾಗಿದೆ.
ಸಾಮಾಜಿಕ ಜಾಲತಾಣಗಳ ಮಾನಿಟರಿಂಗ್ ಸೆಲ್ ತೆರೆದು ನಿಗಾ ಇಡಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ, ಕೀಳು ಅಭಿರುಚಿಯ ಸುದ್ದಿಗಳು, ಕಮೆಂಟ್‌ಗಳ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆಯೂ ಚರ್ಚಿಸಲಾಯಿತು ಎಂದು ತಿಳಿದುಬಂದಿದೆ.
ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಮುರುಗನ್ ಸೇರಿದಂತೆ ಹಲವರು ಹಾಜರಿದ್ದರು.
402 ಪಿಎಸ್‌ಐ ಹುದ್ದೆಗಳ ಶೀಘ್ರ ನೇಮಕಾತಿಗೆ ಕ್ರಮ ಕೈಗೊಳ್ಳಿ: ಪರಂ
ರಾಜ್ಯದಲ್ಲಿ 402 ಪಿಎಸ್‌ಐ ಹುದ್ದೆಗಳ ನೇಮಕಾತಿ ವಿಳಂಬದ ಬಗ್ಗೆ ಸಭೆಯಲ್ಲಿ ಸಚಿವ ಡಾ.ಜಿ. ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಿಎಸ್‌ಐ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ನಾಲ್ಕು ವರ್ಷ ಕಳೆದರೂ ಇನ್ನೂ ನೇಮಕಾತಿ ಪೂರ್ಣಗೊಂಡಿಲ್ಲ. ಈ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ಉಂಟಾಗಲಿದೆ. ಹೀಗಾಗಿ ಒಂದು ವಾರದಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ನೇಮಕಾತಿ ವಿಭಾಗದ ಎಡಿಜಿಪಿ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
2021ರ ಮಾರ್ಚ್ ತಿಂಗಳಿನಲ್ಲಿ ಪ್ರಕಟವಾದ 402 ಪಿಎಸ್ಐ ಅಧಿಸೂಚನೆಗೆ ನಾಲ್ಕು ವರ್ಷಗಳು ಕಳೆದರು ಇನ್ನೂ ನೇಮಕಾತಿ ಪೂರ್ಣವಾಗಿಲ್ಲ. 2024ರ ಅ.3 ರಂದು ಪರೀಕ್ಷೆ ನಡೆಸಿದ್ದು, ಆಯ್ಕೆಯಾದ ಅಭ್ಯರ್ಥಿಗಳ ಶೈಕ್ಷಣಿಕ ದಾಖಲಾತಿಗಳ ಪರಿಶೀಲನೆ, ವೈದ್ಯಕೀಯ ದೃಢ ಪರೀಕ್ಷೆ ಸಿಂಧುತ್ವ ಕಾರ್ಯ ಮತ್ತು ಪೊಲೀಸ್ ಪರಿಶೀಲನೆ ನೆಪದಲ್ಲಿ ಇನ್ನೂ ನೇಮಕಾತಿ ಆದೇಶವನ್ನೇ ನೀಡಿಲ್ಲ.