ಪಶ್ಚಿಮಘಟ್ಟದ ಅಕ್ರಮ ರೆಸಾರ್ಟ್‌ ಇಂದಿನಿಂದ ತೆರವು : ಹೋಂ ಸ್ಟೇಗಳು ಸೇರಿ ಎಲ್ಲ ಅರಣ್ಯ ಒತ್ತುವರಿ ತೆರವಿಗೆ ಕಾರ್ಯಪಡೆ

Published : Aug 05, 2024, 07:28 AM IST
western ghats

ಸಾರಾಂಶ

ರಾಜ್ಯದ 10 ಜಿಲ್ಲೆಗಳನ್ನು ಆವರಿಸಿರುವ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿದಂತೆ ಎಲ್ಲಾ ಮಾದರಿಯ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಲಾಗಿದೆ.

ಬೆಂಗಳೂರು  :  ರಾಜ್ಯದ 10 ಜಿಲ್ಲೆಗಳನ್ನು ಆವರಿಸಿರುವ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿದಂತೆ ಎಲ್ಲಾ ಮಾದರಿಯ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಲಾಗಿದೆ. ಸೋಮವಾರದಿಂದಲೇ ತೆರವು ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮೊದಲು ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್, ಹೋಂಸ್ಟೇಗಳು, ನಂತರ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಎಲ್ಲರೂ ಕಾನೂನಿನ ಮುಂದೆ ಸಮಾನರು. ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಪಶ್ಚಿಮಘಟ್ಟ ಅರಣ್ಯದಲ್ಲಿ 2015ರ ನಂತರದ ಒತ್ತುವರಿಗೆ ಸಂಬಂಧಿಸಿದಂತೆ ಕರ್ನಾಟಕ ಅರಣ್ಯ ಕಾಯ್ದೆ ಸೆಕ್ಷನ್ 64ಎ ಅಡಿ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಕೂಡಲೇ ತೆರವು ಕಾರ್ಯಾಚರಣೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎಪಿಸಿಸಿಎಫ್‌ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿ ತೆರವು ಆದೇಶ ನೀಡಲು ಅವಕಾಶವಿದೆ. ಈಗಾಗಲೇ ನೋಟಿಸ್ ನೀಡಿ ತೆರವು ಮಾಡುವುದು ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಆದ್ಯತೆ ನೀಡಲಾಗುತ್ತದೆ. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಲಾಗಿದೆ ಎಂದು ಸಚಿವ ಖಂಡ್ರೆ ತಿಳಿಸಿದ್ದಾರೆ.

 ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರುದ್ಧವೂ ಕ್ರಮ: 

ಪಶ್ಚಿಮಘಟ್ಟ ಪ್ರದೇಶದಲ್ಲಿ ರಸ್ತೆ ಕಾಮಗಾರಿ ವೇಳೆ ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕಡಿದು ಗುಡ್ಡ ಕುಸಿತಕ್ಕೆ ಕಾರಣವಾಗಿರುವ ಗುತ್ತಿಗೆದಾರರು ಮತ್ತು ಎಂಜಿನಿಯರ್‌ಗಳಿಗೆ ನೋಟಿಸ್ ನೀಡಿ ಕ್ರಮ ಜರುಗಿಸಲು ನಿರ್ದೇಶಿಸಲಾಗಿದೆ ಎಂದು ಸಚಿವ ಖಂಡ್ರೆ ತಿಳಿಸಿದ್ದಾರೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!