ಎತ್ತಿನಹೊಳೆ ಯೋಜನೆ : ಮೊದಲ ಹಂತದ ಕಾಮಗಾರಿ ಉದ್ಘಾಟನೆಗೆ ದಿನಾಂಕ ನಿಗದಿ -ಡಿ.ಕೆ. ಶಿವಕುಮಾರ್‌

Published : Sep 03, 2024, 11:12 AM IST
Yettinahole

ಸಾರಾಂಶ

ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದ ಕಾಮಗಾರಿಗಳನ್ನು ಇದೇ ತಿಂಗಳ 6 ರಂದು ಉದ್ಘಾಟನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಈ ಯೋಜನೆಯನ್ನು 2027ಕ್ಕೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರು :  ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದ ಕಾಮಗಾರಿಗಳ ಉದ್ಘಾಟನೆಯನ್ನು ಇದೇ ತಿಂಗಳ 6ರಂದು ಮಾಡಲಾಗುವುದು ಎಂದು ಜಲಸಂಪನ್ಮೂಲ ಖಾತೆ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಶುಕ್ರವಾರ ಗೌರಿ ಹಬ್ಬ ಇದೆ. ಆ ಶುಭದಿನದಂದು ಗಂಗಾ ಮಾತೆಗೆ ಪೂಜೆ ಸಲ್ಲಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 12.05ಕ್ಕೆ ನೀರನ್ನು ಮೇಲಕ್ಕೆ ಎತ್ತುವ ಪಂಪ್‌ಗಳಿಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಲಾಗುವುದು. ರಾಹುಕಾಲ ಮುಂಚಿತವಾಗಿ ಬೆಳಗ್ಗೆ 10 ಗಂಟೆ ಸುಮಾರಿಗೆ ಏಳು ಕಡೆ ಸಚಿವರು ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಪ್ರಾಯೋಗಿಕ ಪರೀಕ್ಷೆ ನಡೆಸುವ ಮುನ್ನ ಕೆಲವೆಡೆ ನೀರು ಸೋರಿಕೆಯಾಗಿದ್ದು, ಅದನ್ನು ಸರಿಪಡಿಸಲಾಗಿದೆ. ನದಿ, ತೊರೆಗಳಿಂದ ಎತ್ತುವ ನೀರನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಎಂಬುದರ ಕುರಿತು ಅಧ್ಯಯನ ಮಾಡಲು ಪ್ರತ್ಯೇಕ ತಂಡ ರಚಿಸಲಾಗಿದೆ. ತಂಡವು ಅಧ್ಯಯನ ನಡೆಸಿ ವರದಿ ನೀಡಲಿದೆ. ಎತ್ತಿನಹೊಳೆ ಯೋಜನೆಯನ್ನು 2027ಕ್ಕೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಪ್ರಸ್ತುತ ಪಂಪ್ ಮಾಡಿದ ನೀರನ್ನು 132 ಕಿ.ಮೀ. ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತದೆ. ಅರಣ್ಯ ಭೂಮಿ ತಕರಾರು ಬಗೆಹರಿಸಿ ಮುಂದಿನ 140 ಕಿ.ಮೀ. ಕಾಮಗಾರಿ ಪೂರ್ಣಗೊಳಿಸಿ, ತುಮಕೂರಿಗೆ ನೀರು ಹರಿಸಲಾಗುವುದು ಎಂದು ಮಾಹಿತಿ ನೀಡಿದರು.

ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4ರಿಂದ 32 ಕಿ.ಮೀ.ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುವುದು. ನ.1ರ ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುವುದು. ಅರಣ್ಯ ಇಲಾಖೆಯಿಂದ 502 ಎಕರೆ ಜಮೀನು ಪಡೆಯಬೇಕಾಗಿದ್ದು, ಇದಕ್ಕೆ ಬದಲಿಯಾಗಿ ನಾವು 452 ಎಕರೆ ಜಮೀನು ನೀಡಿದ್ದೇವೆ. ಮುಂದಿನ 4 ತಿಂಗಳಲ್ಲಿ ಈ ಕೆಲಸ ಮುಗಿಯಲಿದ್ದು, ನಂತರ ತುಮಕೂರು ಭಾಗದ ಕೆಲಸವನ್ನು ತ್ವರಿತವಾಗಿ ಮುಗಿಸಲಾಗುವುದು ಎಂದು ವಿವರಿಸಿದರು.

 98 ಟಿಎಂಸಿ ನೀರು ಸಂಗ್ರಹ:   ತುಂಗಭದ್ರಾ ಕ್ರಸ್ಟ್ ಗೇಟ್ ಅವಘಡ ಸಂಭವಿಸಿದಾಗ ನೀರನ್ನು ಹೊರಗೆ ಬಿಡಬಾರದು ಎಂದು ಹಲವು ಮಂದಿ ತಿಳಿಸಿದರು. ತಂತ್ರಜ್ಞರ ಬಳಿ ಚರ್ಚೆ ನಡೆಸಿ ಅಣೆಕಟ್ಟಿನ ಉಳಿವಿಗಾಗಿ ಕಠಿಣ ನಿರ್ಧಾರ ತೆಗೆದುಕೊಳ್ಳಲಾಯಿತು. ರೈತರು ಬೆಳೆ ಹಾಳಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರೂ ನೀರನ್ನು ಹೊರಗೆ ಬಿಡಬೇಕಾಯಿತು. ಅವಘಡ ನಡೆದ 3 ಗಂಟೆಗಳಲ್ಲಿ ಗೇಟಿನ ವಿನ್ಯಾಸವನ್ನು ಮೂರು ಎಂಜಿನಿಯರಿಂಗ್ ಸಂಸ್ಥೆಗಳಿಗೆ ನೀಡಿ ತಯಾರಿಸಲು ಸೂಚನೆ ನೀಡಿದ್ದು, ಈ ಕಾರ್ಯವನ್ನು ಇಡೀ ದೇಶವೇ ಗಮನಿಸುತ್ತಿತ್ತು. ಕೇವಲ 4 ದಿನಗಳಲ್ಲಿ ನೂತನ ಗೇಟನ್ನು ಅಳವಡಿಸಲಾಯಿತು. ಶೇ.50 ರಷ್ಟು ನೀರು ಪೋಲಾಯಿತು. ಎತ್ತಿನಹೊಳೆ ಕಾರ್ಯಕ್ರಮ ಮುಗಿದ ತಕ್ಷಣ ತುಂಗಭದ್ರಾಕ್ಕೂ ಬಾಗಿನ ಅರ್ಪಿಸಲಾಗುವುದು ಎಂದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಗುಣಮಟ್ಟದ ಹಿಪ್ಪುನೇರಳೆ ಬೆಳೆದು ಲಾಭ ಗಳಿಸಿ
ರಾಮಗೊಂಡನಹಳ್ಳಿ ಕ್ರಿಕೆಟ್ ತಂಡಕ್ಕೆ ಪ್ರಥಮ ಬಹುಮಾನ