;Resize=(412,232))
ಮೈಸೂರು : ‘ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ ಹಕ್ಕು, ಗೌರವ, ಸ್ವಾತಂತ್ರ್ಯ ಹಾಗೂ ಸಮಾನತೆಯ ರಕ್ಷಾ ಕವಚ. ಅದರ ಆಶಯ ಮತ್ತು ಮೌಲ್ಯಗಳನ್ನು ಬಾಲ್ಯದಿಂದಲೇ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಸಂವಿಧಾನ ದಿನ ಆಯೋಜಿಸಲಾಗುವುದು. ಶಾಲಾ ಪಠ್ಯಕ್ರಮದಲ್ಲಿ ಸಂವಿಧಾನ ಅಳವಡಿಸಲಾಗುವುದು’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನ ಭಾರತದ ಅಂತರಾತ್ಮ. ಪ್ರಜಾಪ್ರಭುತ್ವದ ಶಕ್ತಿ. ದೇಶದ 140 ಕೋಟಿ ಜನರ ಕನಸು, ಗೌರವ ಮತ್ತು ಹಕ್ಕುಗಳನ್ನು ಕಾಪಾಡುವ ರಾಷ್ಟ್ರೀಯ ಶಕ್ತಿ. ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಿಳಿದುಕೊಳ್ಳಬೇಕು. ಅದರ ಆಶಯ ಮತ್ತು ಮೌಲ್ಯಗಳನ್ನು ಬಾಲ್ಯದಿಂದಲೇ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಪಠ್ಯಕ್ರಮದಲ್ಲಿ ಸಂವಿಧಾನಕ್ಕೆ ಸಂಬಂಧಿಸಿದ ಪಾಠಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಯುವಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮತ್ತು ನಾಯಕತ್ವದ ಗುಣ ಬೆಳೆಸಲು ವಿಧಾನಸಭಾ ಕ್ಷೇತ್ರಗಳಲ್ಲಿ ಯುವ ಸಂಸತ್ ಗಳ ರಚನೆ ಹಾಗೂ ಯುವ ನಾಯಕರನ್ನು ಗುರುತಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಮುಂದಿನ ಪೀಳಿಗೆಗೆ ಸಂವಿಧಾನದ ಮಹತ್ವ ತಲುಪಿಸುವ ನಿಟ್ಟಿನಲ್ಲಿ ಇಂತಹ ಪ್ರಯತ್ನಗಳು ಅಗತ್ಯ ಎಂದು ಅವರು ಹೇಳಿದರು.
ಸಂವಿಧಾನ ಪ್ರತಿಯೊಬ್ಬ ಪ್ರಜೆಗೂ ನೀಡಿರುವ ಅತ್ಯಂತ ಅಮೂಲ್ಯವಾದ ಹಕ್ಕು. ಶ್ರೀಮಂತ-ಬಡವ ಎಂಬ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ಮತದಾನದ ಹಕ್ಕು ನೀಡಿರುವುದು ಪ್ರಜಾಪ್ರಭುತ್ವದ ಶ್ರೇಷ್ಠತೆ. ಆದರೆ, ಮತದಾರರ ಪಟ್ಟಿಯಿಂದ ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರ ಮತಗಳನ್ನು ತೆಗೆದುಹಾಕುವ ಪ್ರಯತ್ನಗಳು ನಡೆಯುತ್ತಿರುವ ಆತಂಕವಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ''''ನಮ್ಮ ಮತ ನಮ್ಮ ಹಕ್ಕು, ನಮ್ಮ ಮತ ನಮ್ಮ ಬದುಕು'''' ಎಂಬ ಅರಿವಿನೊಂದಿಗೆ ಪ್ರತಿಯೊಬ್ಬರೂ ಮತದಾನದ ಹಕ್ಕನ್ನು ರಕ್ಷಿಸಿಕೊಳ್ಳಲು ಒಗ್ಗಟ್ಟಿನಿಂದ ನಿಲ್ಲಬೇಕು” ಎಂದು ಕರೆ ನೀಡಿದರು.
ಸಂವಿಧಾನವೇ ಭಾರತದ ರಾಷ್ಟ್ರೀಯ ಗ್ರಂಥ, ಸಂವಿಧಾನವೇ ಭಾರತದ ಏಕೈಕ ಧರ್ಮ ಗ್ರಂಥ ಎಂಬ ಭಾವನೆಯೊಂದಿಗೆ ಅದನ್ನು ಉಳಿಸಿ ಬೆಳೆಸಬೇಕು. ಆದರೆ, ಅದರ ಮೂಲ ಆಶಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವವನ್ನು ಎಂದಿಗೂ ಮರೆಯಬಾರದು ಎಂದರು.
‘ಸಂವಿಧಾನ ಕೇವಲ ಮುಖ್ಯಮಂತ್ರಿ, ಸಚಿವರು, ಶಾಸಕರು ಹಾಗೂ ಪಂಚಾಯಿತಿ ಸದಸ್ಯರಿಗೆ ಅಧಿಕಾರ ನೀಡಿಲ್ಲ. ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಧೈರ್ಯವನ್ನೂ ಸಾಮಾನ್ಯ ಜನರಿಗೆ ನೀಡಿದೆ. ನ್ಯಾಯ ಸಿಗದಿದ್ದಾಗ ನ್ಯಾಯಾಲಯದ ಮೆಟ್ಟಿಲೇರಿ ಸಂವಿಧಾನದ ಆಶಯದಂತೆ ತಮ್ಮ ಹಕ್ಕನ್ನು ಕೇಳುವ ಅವಕಾಶ ಪ್ರತಿಯೊಬ್ಬರಿಗೂ ಇದೆ. ಶ್ರೀಮಂತರು ಮತ್ತು ಬಡವರು ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಒಂದೇ ಕಾನೂನು, ಒಂದೇ ನ್ಯಾಯ ಎಂಬ ತತ್ವವನ್ನು ಸಂವಿಧಾನ ಎತ್ತಿ ಹಿಡಿದಿದೆ’ ಎಂದು ಅವರು ಹೇಳಿದರು.
ನಾನು ರೈತನ ಮಗನಾಗಿ, ಜನರ ಪ್ರಜಾಸೇವಕನಾಗಿ ಮುಖ್ಯಮಂತ್ರಿಯಾಗಿ ಇಲ್ಲಿ ನಿಂತಿದ್ದೇನೆ. ಕಳೆದ 40 ವರ್ಷಗಳಿಂದ ವಿವಿಧ ಹಂತಗಳಲ್ಲಿ ಜನಸೇವೆ ಮಾಡಿಕೊಂಡು ಬಂದಿದ್ದೇನೆ. ನನ್ನ ಬದುಕಿಗೆ ಶಕ್ತಿ, ಧೈರ್ಯ, ಸ್ಫೂರ್ತಿ ಮತ್ತು ಪ್ರೇರಣೆ ನೀಡಿರುವುದು ಸಂವಿಧಾನ. ಅಧಿಕಾರ ನೀಡುವುದರ ಜತೆಗೆ ಜನರ ಹಕ್ಕುಗಳನ್ನು ಗೌರವಿಸುವ ಜವಾಬ್ದಾರಿಯನ್ನೂ ಅದು ನಮಗೆ ನೀಡಿದೆ ಎಂದು ಅವರು ತಿಳಿಸಿದರು.
ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬದುಕುವ ಅವಕಾಶ, ಗೌರವ ಮತ್ತು ಆರ್ಥಿಕ ಭದ್ರತೆ ಸಿಗಬೇಕು. ಇದೇ ಉದ್ದೇಶದಿಂದ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಭೂಮಿ ಗ್ಯಾರಂಟಿ ಯೋಜನೆಯೂ ಇದೇ ಆಶಯದ ಭಾಗ. ಬಡವರು, ರೈತರು, ಮಹಿಳೆಯರು ಹಾಗೂ ದುರ್ಬಲ ವರ್ಗಗಳ ಬದುಕಿನಲ್ಲಿ ಬದಲಾವಣೆ ತರುವುದೇ ಸರ್ಕಾರದ ಉದ್ದೇಶ. ಎಲ್ಲರಿಗೂ ಸಮಬಾಳು, ಸಮಾನ ಅವಕಾಶ ಕಲ್ಪಿಸುವುದಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.