ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ : ಇಂದು ಕೋರ್ಟ್ ತೀರ್ಪು

Published : Feb 07, 2025, 06:17 AM IST
BS Yadiyurappa

ಸಾರಾಂಶ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ’ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ  ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌ ಶುಕ್ರವಾರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ.

 ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ’ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌ ಶುಕ್ರವಾರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ.

ಈ ಕುರಿತು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಪಡಿಸುವಂತೆ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆಯನ್ನು ಜ.17ರಂದು ಪೂರ್ಣಗೊಳಿಸಿ ಕಾಯ್ದಿರಿಸಿರುವ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಶುಕ್ರವಾರ ತೀರ್ಪು ಪ್ರಕಟಿಸಲಿದೆ.

ಪ್ರಕರಣದ ಕುರಿತು ಸದಾಶಿವನಗರ ಠಾಣಾ ಪೊಲೀಸರು 2024ರ ಮಾ.14ರಂದು ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಅದನ್ನು ರದ್ದುಪಡಿಸಲು ಕೋರಿ ಯಡಿಯೂರಪ್ಪ ಅವರು 2024ರ ಜೂ.13ರಂದು ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಜೂ.14ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಪ್ರಕರಣದ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತಾದರೂ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸಿಐಡಿ ತನಿಖಾಧಿಕಾರಿಗಳಿಗೆ ಸೂಚಿಸಿತ್ತು.

ನಂತರ ಪ್ರಕರಣದ ಕುರಿತು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಖುದ್ದು ಹಾಜರಾಗುವುದರಿಂದ ಯಡಿಯೂರಪ್ಪ ಅವರಿಗೆ ವಿನಾಯ್ತಿ ನೀಡಿ, 2024ರ ಜು.12ರಂದು ಹೈಕೋರ್ಟ್‌ ಮತ್ತೊಂದು ಆದೇಶ ಮಾಡಿತ್ತು. ಅಂತಿಮವಾಗಿ 2025ರ ಜ.17ರಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ಒಂದು ವೇಳೆ ಅರ್ಜಿಯನ್ನು ಹೈಕೋರ್ಟ್‌ ಪುರಸ್ಕರಿಸಿ ಎಫ್‌ಐಆರ್‌ ರದ್ದುಪಡಿಸಿದರೆ ಯಡಿಯೂರಪ್ಪ ಅವರು ನಿರಾಳರಾಗಲಿದ್ದಾರೆ. ಅರ್ಜಿ ತಿರಸ್ಕೃತವಾದರೆ , ಯಡಿಯೂರಪ್ಪ ಅವರಿಗೆ ಬಂಧನ ಭೀತಿ ಮತ್ತು ತನಿಖೆ ಬಿಸಿ ಕಾಡಲಿದೆ.

PREV

Recommended Stories

ಮುಸುಕುಧಾರಿಯು ಕಿಂದರಿ ಜೋಗಿ, ಎಸ್‌ಐಟಿ ಇಲಿ ಆಗದಿರಲಿ : ಸುರೇಶ್‌
ರಾಜ್ಯಾದ್ಯಂತ ಏಕರೂಪದ ಹಾಲು ದರ ಖರೀದಿ ನಿಗದಿಗಾಗಿ ಒತ್ತಾಯ