ದರ್ಶನ್‌ ವೈದ್ಯಕೀಯ ವರದಿ ಹೈಕೋರ್ಟ್‌ಗೆ ಸಲ್ಲಿಕೆ - ಕೊಲೆ ಕೇಸಿನ ಹೆಚ್ಚುವರಿ ಆರೋಪ ಪಟ್ಟಿ

Published : Nov 22, 2024, 09:21 AM IST
south actor darshan thoogudeepa renuka swamy murder case

ಸಾರಾಂಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯನ್ನು ಗುರುವಾರ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯನ್ನು ಗುರುವಾರ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.

ಪ್ರಕರಣದಲ್ಲಿ ಜಾಮೀನು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠಕ್ಕೆ ದರ್ಶನ್ ಪರ ವಕೀಲರು ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಿದರು.

ವರದಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಪಿ.ಪ್ರಸನ್ನಕುಮಾರ್ ಅವರಿಗೆ ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆಯನ್ನು ನ.26ಕ್ಕೆ ನಿಗದಿಪಡಿಸಿತು.

ಇದಕ್ಕೂ ಮುನ್ನ ವಿಚಾರಣೆ ವೇಳೆ ಪಿ.ಪ್ರಸನ್ನಕುಮಾರ್‌ ವಾದ ಮಂಡಿಸಿ, ಪ್ರಕರಣ ಸಂಬಂಧ ಹೆಚ್ಚುವರಿ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಸಂಬಂಧ ನ್ಯಾಯಾಲಯ ವಿಚಾರಣೆ ಆರಂಭಿಸಲಿದೆ. ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ವರದಿ ನಮ್ಮ ಕೈಸೇರಿಲ್ಲ. ಈ ಹಿಂದೆ ನಡೆದ ವಿಚಾರಣೆ ವೇಳೆ ಶಸ್ತ್ರ ಚಿಕಿತ್ಸೆಗೆ ಒಳಗಾಗಬೇಕು ಎಂದು ಅರ್ಜಿದಾರರು ತಿಳಿಸಿದ್ದರು. ಆದರೆ, ಶಸ್ತ್ರ ಚಿಕಿತ್ಸೆ ನಡೆಸುವ ದಿನಾಂಕವನ್ನು ತಿಳಿಸಿಲ್ಲ ಎಂದು ಪೀಠಕ್ಕೆ ವಿವರಿಸಿದರು.

ಪ್ರಕರಣದ ಹಿನ್ನೆಲೆ:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ಗೆ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ್ದ ಕಾರಣ ಹೈಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ನಡುವೆ, ತಾನು ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು. ಅದನ್ನ ಪರಿಗಣಿಸಿದ್ದ ಹೈಕೋರ್ಟ್‌, ಚಿಕಿತ್ಸೆ ಪಡೆಯಲು ದರ್ಶನ್‌ಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿ ಇತ್ತೀಚೆಗೆ ಆದೇಶಿಸಿತ್ತು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು