ಕೆಪಿಎಸ್ಸಿ ಅಕ್ರಮದ ಕುರಿತು ಸದನದಲ್ಲಿ ಚರ್ಚೆ: ಬಿವೈವಿ

Published : Jul 27, 2026, 05:45 AM IST
BY Vijayendra

ಸಾರಾಂಶ

ಕೆಪಿಎಸ್‌ಸಿ ಮೂಲಕ ನಡೆದ 400 ಪಶುವೈದ್ಯರ ನೇಮಕಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

  ಬೆಂಗಳೂರು :  ಕೆಪಿಎಸ್‌ಸಿ ಮೂಲಕ ನಡೆದ 400 ಪಶುವೈದ್ಯರ ನೇಮಕಾತಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಕೆಪಿಎಸ್‌ಸಿ ಭ್ರಷ್ಟಾಚಾರ ಸೇರಿ ಬರ ಪರಿಸ್ಥಿತಿ, ಬಿಡದಿ ಟೌನ್‌ಶಿಪ್‌ ಯೋಜನೆ, ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ, ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳ ವೈಫಲ್ಯ ಕುರಿತು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಕೆಪಿಎಸ್ಸಿ ಅಕ್ರಮ ಗಂಭೀರ:

ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿ ಆಡಿಯೋ ಲೀಕ್ ಆಗಿರುವುದು ಅತ್ಯಂತ ಗಂಭೀರ ಬೆಳವಣಿಗೆ. ಅಭ್ಯರ್ಥಿಗಳು ಹಣ ನೀಡಿದರೆ ಹೆಚ್ಚಿನ ಅಂಕಗಳನ್ನು ಕೊಡಿಸುವುದಾಗಿ ಅದರಲ್ಲಿ ಹೇಳಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದು ನೇಮಕಾತಿ ಪ್ರಕ್ರಿಯೆಯ ವಿಶ್ವಾಸಾರ್ಹತೆಗೆ ಧಕ್ಕೆ ತಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಬೆಳಗ್ಗೆಯೇ ದೂರು ನೀಡಲು ಹೋದರೂ ಮಧ್ಯರಾತ್ರಿ ಸುಮಾರು 3 ಗಂಟೆಗೆ ಮಾತ್ರ ಪ್ರಕರಣ ದಾಖಲಿಸಲಾಗಿದೆ. ಸರ್ಕಾರದ ಅನುಮತಿ ಪಡೆದು ಪ್ರಕರಣ ದಾಖಲಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಟೀಕಿಸಿದರು.

ಕೆಪಿಎಸ್‌ಸಿ ಅಕ್ರಮದ ಬಗ್ಗೆ ಉದ್ಯೋಗಾಕಾಂಕ್ಷಿಗಳು ಭೇಟಿ ನೀಡಿ ತಮ್ಮ ಅಳಲು ವ್ಯಕ್ತಪಡಿಸಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿದ್ದು, ಅವರ ಸಮಸ್ಯೆಗಳಿಗೆ ನ್ಯಾಯ ದೊರಕಿಸಲು ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ಪ್ರಕರಣದಲ್ಲಿ ರಾಜ್ಯ ಸರ್ಕಾರ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕಾಗಿತ್ತು. ಆದರೆ ಸರ್ಕಾರ ಕೈಕಟ್ಟಿ ಕುಳಿತಿರುವುದರಿಂದ ಕೆಪಿಎಸ್‌ಸಿಯ ವಿಶ್ವಾಸಾರ್ಹತೆ ಕುಸಿದಿದೆ. ಕೆಪಿಎಸ್‌ಸಿ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.

ನಮ್ಮ ಕಡೆಯಿಂದಲೂ ತಪ್ಪಾಗಿದೆ:

ವಿದ್ಯಾರ್ಥಿಗಳ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಕಡೆಯಿಂದಲೂ ತಪ್ಪಾಗಿದೆ ಎಂಬುದನ್ನು ನೇರವಾಗಿ ಒಪ್ಪಿಕೊಳ್ಳುತ್ತೇನೆ. ಯುವಕರು ಬೀದಿಗಿಳಿದು ಹೋರಾಟ ನಡೆಸುವಾಗ ಅದನ್ನು ಇನ್ನಷ್ಟು ಗಂಭೀರವಾಗಿ ಪರಿಗಣಿಸಬೇಕಾಗಿತ್ತು. ವಿದ್ಯಾರ್ಥಿಗಳೊಂದಿಗೆ ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವಿಷಯಕ್ಕೆ ಹೆಚ್ಚಿನ ಗಮನ ಹರಿಸುತ್ತೇವೆ ಎಂದು ವಿಜಯೇಂದ್ರ ಹೇಳಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಪಶುವೈದ್ಯ ನೇಮಕಕ್ಕೆ ತಡೆ, ತನಿಖೆಗಾಗಿ ಸಮಿತಿ ರಚನೆ
ದೊಡ್ಡಬಳ್ಳಾಪುರದ ವಿವಿಧೆಡೆ ಆಷಾಢ ಏಕಾದಶಿ ವ್ರತಾಚರಣೆ