ರಾತ್ರಿ 8ರಿಂದ 10ರವರೆಗಷ್ಟೇ ಪಟಾಕಿಗೆ ಅವಕಾಶ

Published : Oct 31, 2026, 10:45 AM IST
firecrackers

ಸಾರಾಂಶ

ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ತಡೆಯಲು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಲು ಸಮಯ ನಿಗದಿ ಮಾಡಲಾಗಿದ್ದು, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.

ಬೆಂಗಳೂರು : ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ತಡೆಯಲು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಲು ಸಮಯ ನಿಗದಿ ಮಾಡಲಾಗಿದ್ದು, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ನಿಗದಿತ ಸಮಯ ಮೀರಿ ಪಟಾಕಿ ಸಿಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ಆದೇಶಗಳ ಅನ್ವಯ ಮಾರ್ಗಸೂಚಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ಆದೇಶಗಳ ಅನ್ವಯ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಜಿಲ್ಲಾಧಿಕಾರಿಗಳು, ಪೊಲೀಸ್‌‍ ವರಿಷ್ಠಾಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ನ್ಯಾಯಾಲಯದ ಆದೇಶಗಳನ್ನು ಚಾಚೂತಪ್ಪದೆ ಪಾಲಿಸಬೇಕು. ಮುಂಜಾಗ್ರತಾ ಕ್ರಮವಾಗಿ ಪಟಾಕಿ ಗೋದಾಮುಗಳನ್ನು ಪರಿಶೀಲನೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲಿಸಬೇಕು

ಪಟಾಕಿಗಳ ಸಿಡಿತದಿಂದ ವಿವಿಧ ಬಣ್ಣಗಳು ಹೊರ ಹೊಮ್ಮಲು ಹಲವಾರು ಬಗೆಯ ಲೋಹಗಳನ್ನು ಬಳಸಲಾಗುತ್ತಿದೆ. ಇತ್ತೀಚೆಗೆ ಹೆಚ್ಚು ಶಬ್ದ ಮಾಡುವ ಪಟಾಕಿಗಳ ಬಳಕೆ ಹೆಚ್ಚಾಗಿ ಮಾಲಿನ್ಯ ಉಂಟಾಗುವುದನ್ನು ತಡೆಯಲು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಎಲ್ಲರೂ ಅದನ್ನು ಪಾಲಿಸಬೇಕು ಎಂದರು.

ಪ್ರಮುಖವಾಗಿ ಆಯಾ ಜಿಲ್ಲಾಧಿಕಾರಿಗಳು ಕಾರ್ಯಪಡೆ ರಚಿಸಿ, ತಮ್ಮ ವ್ಯಾಪ್ತಿಯಲ್ಲಿರುವ ಪಟಾಕಿ ಗೋದಾಮುಗಳನ್ನು ಪರಿಶೀಲಿಸಬೇಕು. ಹಸಿರು ಪಟಾಕಿ ಹೊರತು ಪಡಿಸಿ ಬೇರೆ ಪಟಾಕಿ ಕಂಡು ಬಂದರೆ ಇಡೀ ಗೋದಾಮು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ಹೂಡಬೇಕು. ಆಸ್ಪತ್ರೆ, ಹಾಗೂ ಶಿಕ್ಷಣ ಸಂಸ್ಥೆ ಸುತ್ತ ಹಾಗೂ ಇನ್ನಾವುದೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿ ಸ್ಪೋಟಿಸುವಂತಿಲ್ಲ. ಈ ಬಗ್ಗೆ ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್‌ ಇಲಾಖೆಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಚಿವರು ವಿವರಿಸಿದರು.

ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ರೈಲ್ವೆ, ಬಸ್‌ ನಿಲ್ದಾಣ, ಮಾಲ್‌ಗಳಲ್ಲಿ ಕರ ಪತ್ರ ಹಂಚುವ ಹಾಗೂ ವಿಡಿಯೋ ಮತ್ತು ಆಡಿಯೋ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ದೀಪಾವಳಿ ಸಮಯದಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಸೂಕ್ತ ಕ್ರಮ ಜರುಗಿಸಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸುವಂತೆ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ರಾಜ್ಯೋತ್ಸವಕ್ಕೆ ಎಚ್‌ಎಂಟಿ ಹೊಸ ಕೈಗಡಿಯಾರಗಳು ಇಂದು ಬಿಡುಗಡೆ
ರೈತರ ಭೂಮಿ ರಕ್ಷಣೆ 6ನೇ ಗ್ಯಾರಂಟಿ : ಡಿಕೆ