ಬೆಂಗಳೂರು : ಗುರುವಾರ ಸಂಜೆ ನಗರದ ಬಹುತೇಕ ಕಡೆಗಳಲ್ಲಿ ಸುರಿದ ಜೋರು ಮಳೆಯಿಂದ ನಗರದ ಹಲವು ರಸ್ತೆಗಳು ಜಲಾವೃತಗೊಂಡು ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.
ಕೆ.ಆರ್. ಮಾರುಕಟ್ಟೆ ಸಮೀಪದ ಎಸ್‌ಜೆಪಿ ರಸ್ತೆ, ಎಲೆಕ್ಟ್ರಾನಿಕ್ ಸಿಟಿ ಬಳಿಯ ಹೊಸೂರು ರಸ್ತೆ, ಮೈಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ, ಓಕಳಿಪುರ ಜಂಕ್ಷನ್, ಗೊರಗುಂಟೆಪಾಳ್ಯ ಜಂಕ್ಷನ್, ಕೆ.ಆರ್.ಸರ್ಕಲ್, ಬನ್ನೇರುಘಟ್ಟ ರಸ್ತೆ, ಕಸ್ತೂರಿ ನಗರ, ಹೆಬ್ಬಾಳ ಜಂಕ್ಷನ್ ಸೇರಿದಂತೆ ಹಲವು ರಸ್ತೆಗಳಲ್ಲಿ ನೀರು ನಿಂತಿತ್ತು. ಪರಿಣಾಮ ವಾಹನಗಳು ಮುಂದೆ ಸಾಗದೆ ಗಂಟೆಗಟ್ಟಲೇ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದವು.
ಎಲೆಕ್ಟ್ರಾನಿಕ್ ಸಿಟಿ ಬಳಿಯ ಮೇಲ್ಸೇತುವೆ ಕೆಳಗಿನ ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿತ್ತು. ಕಾರುಗಳ ಚಕ್ರಗಳು ಮುಳುಗುವಷ್ಟು ನೀರು ನಿಂತಿದ್ದು, ಕಾರು ಸಂಚರಿಸುವಾಗ ಅಲೆಗಳು ಸೃಷ್ಟಿಯಾಗಿರುವ ವಿಡಿಯೊವನ್ನು ಸಾರ್ವಜನಿಕರು ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಗುರುವಾರ ಸಂಜೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸರಾಸರಿ 20 ಮಿಲಿ ಮೀಟರ್ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ತಿಳಿಸಿದೆ.
ಶುಕ್ರವಾರವೂ ಮಳೆ ಮುನ್ಸೂಚನೆ: ಶುಕ್ರವಾರವೂ ನಗರದಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.