ರಾಜ್ಯದಲ್ಲಿ ಮೇ 21ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಮೇ 21ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ.
ಪ್ರಮುಖವಾಗಿ ಕರಾವಳಿಯ ಮೂರು ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ, ದಕ್ಷಿಣ ಒಳನಾಡಿನ, ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತಮಕೂರು, ವಿಜಯನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಮಳೆಯೊಂದಿಗೆ ಗಾಳಿ, ಗುಡುಗು, ಸಿಡಿಲಿನ ಆರ್ಭಟವೂ ಹೆಚ್ಚಾಗಿರಲಿದೆ. ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯೂ ಇದೆ ಎಂದು ತಿಳಿಸಿದೆ.
ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಿರುವ ಹವಾಮಾನ ಇಲಾಖೆ ವರದಿ ಪ್ರಕಾರ, ರಾಯಚೂರಿನಲ್ಲಿ ಅತಿ ಹೆಚ್ಚು 38 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಜಗಳೂರು ಹಾಗೂ ಹರಪನಹಳ್ಳಿಯಲ್ಲಿ ಅತಿ ಹೆಚ್ಚು 11 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಬೇಗೂರು 6, ಕೊಣನೂರು ಹಾಗೂ ಚಿಂತಾಮಣಿಯಲ್ಲಿ ತಲಾ 5, ಚಿತ್ತಾಪುರ, ಹುಣಸೂರಿನಲ್ಲಿ ತಲಾ 4, ಹೊಸಕೋಟೆ, ಕೋಲಾರ, ಚಾಮರಾಜನಗರ, ಲಕ್ಷ್ಮೇಶ್ವರ, ಬೀದರ್ ಹಾಗೂ ನಾಯಕನಹಟ್ಟಿಯಲ್ಲಿ ತಲಾ 3, ರಾಮನಗರ, ಹಿರಿಯೂರು, ಅರಕಲಗೂಡು, ಸೋಮವಾರಪೇಟೆಯಲ್ಲಿ ತಲಾ 2, ಕಳಸ ಮತ್ತಿತರ ಕಡೆ 1 ಸೆಂ.ಮೀ ಮಳೆಯಾಗಿದೆ.
ಶೇ.56 ರಷ್ಟು ಹೆಚ್ಚಿನ ಮಳೆ:
ರಾಜ್ಯದಲ್ಲಿ ಮಾರ್ಚ್‌ನಿಂದ ಈವರೆಗೆ ಸಾಮಾನ್ಯವಾಗಿ ವಾಡಿಕೆ ಪ್ರಕಾರ 69 ಮಿ.ಮೀ ಮಳೆಯಾಗಬೇಕು. ಆದರೆ, ಈ ಬಾರಿ 108 ಮಿ.ಮೀ ಮಳೆಯಾಗಿದೆ. ಒಟ್ಟಾರೆ ಶೇ.56ರಷ್ಟು ಹೆಚ್ಚಿನ ಮಳೆಯಾಗಿದೆ. ಕರಾವಳಿಯಲ್ಲಿ 89.8 ಮಿ.ಮೀ. ಮಳೆಯಾಗುವ ಮೂಲಕ ಶೇ.34ರಷ್ಟು ಹೆಚ್ಚಿನ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ 89.3 ಮಿ.ಮೀ ಮಳೆಯಾಗಿದ್ದು, ಶೇ.89ರಷ್ಟು ಹೆಚ್ಚಿನ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 128 ಮಿ.ಮೀ ಮಳೆಯಾಗಿದ್ದು, ಶೇ.44 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.