;Resize=(412,232))
ಬೆಂಗಳೂರು : ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ (ಪಿಯುಸಿವರೆಗೆ) ಶನಿವಾರ ರಜೆ ಘೋಷಿಸಲಾಗಿದೆ.
ಶೃಂಗೇರಿ ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ, ನಂದಿನಿ, ನಳಿನಿ ನದಿಗಳು ತುಂಬಿ ಹರಿಯುತ್ತಿವೆ. ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಾರಂಗಿ ಜಲಾಶಯ ಭರ್ತಿಯಾಗಿದ್ದು, ಶನಿವಾರ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುವುದು. ಈ ಹಿನ್ನೆಲೆಯಲ್ಲಿ ಅಣೆಕಟ್ಟಿನ ಕೆಳ ಭಾಗದ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಹಾರಂಗಿ ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಕೃಷ್ಣಾ ನದಿಯ ಒಳಹರಿವು 97 ಸಾವಿರ ಕ್ಯೂಸೆಕ್ಸ್‌ಗಳಿಗೆ ಏರಿದೆ. ಹೀಗಾಗಿ, ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ಆಲಮಟ್ಟಿ ಜಲಾಶಯದ 14 ಗೇಟ್‌ಗಳನ್ನು ತೆರೆದು ನೀರನ್ನು ನದಿಗೆ ಬಿಡಲಾಗುತ್ತಿದೆ. ಇದೇ ವೇಳೆ, ಆಲಮಟ್ಟಿ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಎಲ್ಲಾ 6 ಘಟಕಗಳ ಮೂಲಕ 270 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳ ಒಳಹರಿವಿನ ಹೆಚ್ಚಳದಿಂದಾಗಿ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ 8 ಕೆಳಹಂತದ ಸೇತುವೆಗಳು ಜಲಾವೃತಗೊಂಡಿವೆ.