ಐಎಂಎ ಹಗರಣ: ರಂಜಾನ್‌ಗೆ ಮೊದಲು ಪರಿಹಾರ - ಠೇವಣಿದಾರರಿಗೆ ಸಚಿವ ಕೃಷ್ಣಬೈರೇಗೌಡ ಭರವಸೆ

Published : Feb 25, 2025, 07:51 AM IST
Money

ಸಾರಾಂಶ

ಬಹುಕೋಟಿ ವಂಚನೆ ಮಾಡಿದ್ದ ಐಎಂಎ (ಐ-ಮಾನಿಟರಿ ಅಡ್ವೈಸರಿ) ಕಂಪನಿಯ ₹534.5 ಕೋಟಿ ಮೌಲ್ಯದ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ.

 ಬೆಂಗಳೂರು : ಬಹುಕೋಟಿ ವಂಚನೆ ಮಾಡಿದ್ದ ಐಎಂಎ (ಐ-ಮಾನಿಟರಿ ಅಡ್ವೈಸರಿ) ಕಂಪನಿಯ ₹534.5 ಕೋಟಿ ಮೌಲ್ಯದ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಯನ್ನು ಹರಾಜು ಮಾಡಿ ಐಎಂಎ ಸಂಸ್ಥೆಯಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಹತ್ತು ದಿನ ಮೊದಲೇ ಪರಿಹಾರ ನೀಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಸಚಿವರಾದ ಜಮೀರ್ ಅಹ್ಮದ್‌ ಖಾನ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌ ಹಾಗೂ ಕೆಲ ಸಂತ್ರಸ್ತರ ಜತೆ ಐಎಂಎ ಹಗರಣದಿಂದ ಹಣ ಕಳೆದುಕೊಂಡವರಿಗೆ ಪರಿಹಾರ ನೀಡುವ ಕುರಿತು ಕೃಷ್ಣ ಬೈರೇಗೌಡ ಚರ್ಚಿಸಿದರು.

ಐಎಂಎ ಹಗರಣದ ಮೊತ್ತ ಎಷ್ಟು? ಈವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಕಳೆದ ಏಳು ವರ್ಷದಲ್ಲಿ ಈ ಸಂಸ್ಥೆಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ. ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕೆಲ ಮಹತ್ವದ ನಿರ್ಧಾರಗಳನ್ನು ಮಾಡಿದರು ಎಂದು ತಿಳಿದುಬಂದಿದೆ.

ಸಭೆಯಲ್ಲಿ ಸಂತ್ರಸ್ತರಿಗೆ ಭರವಸೆ ನೀಡಿದ ಕೃಷ್ಣ ಬೈರೇಗೌಡ, ಐಎಂಎ ಸಂಸ್ಥೆಗೆ ಸಂಬಂಧಿಸಿದ 10ಕ್ಕೂ ಹೆಚ್ಚು ಆಸ್ತಿಗಳನ್ನು ಈಗಾಗಲೇ ಸರ್ಕಾರ ವಶಕ್ಕೆ ಪಡೆದಿದೆ. ಚರಾಸ್ತಿಗಳ ಮೌಲ್ಯ 106.92 ಕೋಟಿ ಹಾಗೂ ಸ್ಥಿರಾಸ್ತಿಗಳ ಮೌಲ್ಯ 401.92 ಕೋಟಿ ರು. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಕಂಪೆನಿಗೆ ಸಂಬಂಧಿಸಿದ ವಿವಿಧ ಬ್ಯಾಂಕ್ ಖಾತೆಗಳಿಂದ 2.88 ಕೋಟಿ ನಗದು, 11.72 ರು. ಹೂಡಿಕೆ ಪತ್ರ ಸೇರಿ ಒಟ್ಟಾರೆ 534.5 ಕೋಟಿ ರು. ಅನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಪೀಠದ ಆದೇಶದಂತೆ ಶೀಘ್ರ ಈ ಆಸ್ತಿಗಳನ್ನು ಹರಾಜಿಗೊಳಪಡಿಸಿ ಇದರಿಂದ ಬಂದ ಹಣವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗುವುದು ಎಂದು ಹೇಳಿದರು.

ಅರ್ಹ ಸಂತ್ರಸ್ತರಿಗೆ ಹರಿಹಾರ:

ಐಎಂಎ ಹಗರಣ ಬೆಳಕಿಗೆ ಬಂದಾಗಲೇ ಸರ್ಕಾರ ಸಂತ್ರಸ್ತರನ್ನು ಗುರುತಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ನೀಡಿತ್ತು. ಈ ವೇಳೆ ಐಎಂಎ ಜೊತೆ ಆರ್ಥಿಕ ವ್ಯವಹಾರ ಮಾಡಿದ ಬ್ಯಾಂಕ್ ಖಾತೆ ಚಾಲ್ತಿಯಲ್ಲಿದ್ದರೆ ಅದನ್ನೇ ಅಧಿಕೃತ ಎಂದು ಪರಿಗಣಿಸಲಾಯಿತು. ಒಂದು ವೇಳೆ ಖಾತೆ ನಿಷ್ಕ್ರಿಯವಾಗಿದ್ದರೆ ಠೇವಣಿಪತ್ರ, ಷೇರುಪ್ರಮಾಣ ಪತ್ರದಂಥ ದಾಖಲೆಗಳನ್ನು ಕೋರಿತ್ತು.

ಅರ್ಜಿ ಸಲ್ಲಿಸುವವರ ಮಾಹಿತಿಗಳನ್ನು ಐಎಂಎ ಸಂಸ್ಥೆಯಲ್ಲಿರುವ ದತ್ತಾಂಶಗಳೊಂದಿಗೆ ಹೊಂದಾಣಿಕೆ ಮಾಡಿ ಹಾಗೂ ಆಧಾರ್ ಕಾರ್ಡ್, ಇತರ ಮಾಹಿತಿಗಳನ್ನು ಸಮೀಕರಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಒಂದು ವೇಳೆ ಫಲಾನುಭವಿಗಳು ಮೃತಪಟ್ಟಿದ್ದರೆ ಠೇವಣಿದಾರರು ಸೂಚಿಸಿರುವ ನಾಮನಿರ್ದೇಶಿತ ವ್ಯಕ್ತಿಗಳಿಗೆ ಆ ಹಣ ನೀಡಲಾಗುವುದು.

ಹಣ ಡಬ್ಲಿಂಗ್ ಆಸೆಯಿಂದಾಗಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಠೇವಣಿದಾರರು 3213.58 ಕೋಟಿ ರು.ಅನ್ನು ಐಎಂಎ ಕಂಪೆನಿಯಲ್ಲಿ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ. ಕಂಪೆನಿಯ ಒಟ್ಟು ಠೇವಣಿದಾರರ ಸಂಖ್ಯೆ 69069. ಈ ಪೈಕಿ 1400 ಕೋಟಿ ರು. ಅನ್ನು ಲಾಭಾಂಶದ ಮಾದರಿಯಲ್ಲಿ ಐಎಂಎ ಕಾಲಕಾಲಕ್ಕೆ ಠೇವಣಿದಾರರಿಗೆ ನೀಡುತ್ತಾ ಬಂದಿದೆ. ಹಗರಣ ಬೆಳಕಿಗೆ ಬಂದ ನಂತರ ವಿಶೇಷ ನ್ಯಾಯಾಲಯದ ಆದೇಶದಂತೆ ಕಂಪೆನಿ ಖಾತೆಯಲ್ಲಿದ್ದ 19.12 ಕೋಟಿ ರು.ಗಳನ್ನು 50,000 ರು.ಗಳಂತೆ 6858 ಜನ ಸಂತ್ರಸ್ತರ ಖಾತೆಗಳಿಗೆ 2022 ಏಪ್ರಿಲ್‌ನಲ್ಲಿ ಜಮೆ ಮಾಡಲಾಗಿತ್ತು.

66.66 ಕೋಟಿ ರು.ಗಳನ್ನು 53,142 ಜನ ಸಂತ್ರಸ್ತರ ಖಾತೆಗಳಿಗೆ 2023ರ ನ.8 ರಂದು ಜಮೆ ಮಾಡಲಾಗಿತ್ತು. 1.28 ಕೋಟಿ ರು.ಗಳನ್ನು 626 ಸಂತ್ರಸ್ತರ ಖಾತೆಗಳಿಗೆ 2024ರ ಮೇ 23ರಂದು ಜಮೆ ಮಾಡಿತ್ತು. 276 ಜನ ಸಂತ್ರಸ್ತರಿಗೆ 36.14 ಲಕ್ಷ ರು.ಗಳನ್ನು 2024ರ ನ.7 ರಂದು ಜಮೆ ಮಾಡಲಾಗಿತ್ತು. ಒಟ್ಟಾರೆ ಈವರೆಗೆ 87.43 ಕೋಟಿ ರು.ಗಳನ್ನು 60902 ಜನ ಸಂತ್ರಸ್ತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು ಸಭೆಯಲ್ಲಿ ಸಚಿವರು ಮಾಹಿತಿ ಹಂಚಿಕೊಂಡರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ
ಕರ್ನಾಟಕಕ್ಕೆ ಇನ್ನೊಂದು ‘ಜಲಸಮರ’ದ ಕಂಟಕ!