;Resize=(412,232))
ಬೆಂಗಳೂರು : ವಿವಾದಗಳು, ಅಕ್ರಮದ ಆರೋಪ ಎದುರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಮಹತ್ವದ ಸುಧಾರಣೆ ತರಲು ಉದ್ದೇಶಿಸಿದ್ದು, ಪರೀಕ್ಷೆ ನಡೆದ ಕೂಡಲೇ ಒಎಂಆರ್ ಪ್ರತಿಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡುವುದು ಹಾಗೂ ಒಂದೇ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗಂಭೀರ ಚರ್ಚೆ ನಡೆದಿದೆ.
ಕೆಪಿಎಸ್‌ಸಿಯ ನೂತನ ಪರೀಕ್ಷಾ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರೊಂದಿಗೆ ಆಯೋಗದ ಸದಸ್ಯರು ಶುಕ್ರವಾರ ಸಭೆ ನಡೆಸಿದರು. ಈ ವೇಳೆ ನೇಮಕಾತಿ ಪ್ರಕ್ರಿಯೆಗಳನ್ನು ಮತ್ತಷ್ಟು ಪಾರದರ್ಶಕ, ತಂತ್ರಜ್ಞಾನಾಧಾರಿತ ಹಾಗೂ ತ್ವರಿತಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು.
ಮುಂದಿನ ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮಾದರಿಯಲ್ಲಿ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪರೀಕ್ಷಾ ಪದ್ಧತಿಗಳಲ್ಲಿ ಪಾರದರ್ಶಕತೆ ಹೆಚ್ಚಿಸುವುದು ಹಾಗೂ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಮೂಲಕ 3 ರಿಂದ 5 ತಿಂಗಳೊಳಗೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸುವ ಉದ್ದೇಶ ಹೊಂದಿರುವುದಾಗಿ ಎಚ್. ಪ್ರಸನ್ನ ವಿವರಿಸಿದರು.
ನೇಮಕಾತಿ ಪರೀಕ್ಷೆಗಳು ಪೂರ್ಣಗೊಂಡ ಕೂಡಲೇ ಆಯಾ ಜಿಲ್ಲೆಗಳಲ್ಲಿ ಲಭ್ಯವಿರುವ ಸ್ಕ್ಯಾನಿಂಗ್ ಯಂತ್ರಗಳ ಮೂಲಕ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ, ಆಯೋಗದ ಅಧಿಕೃತ ಅಂತರ್ಜಾಲ ತಾಣದಲ್ಲಿ ಅಪ್‌ಲೋಡ್ ಮಾಡುವ ವ್ಯವಸ್ಥೆ ಕಲ್ಪಿಸಲಾಗುವುದು. ಇದರಿಂದ ಅಭ್ಯರ್ಥಿಗಳು ತಮ್ಮ ಒಎಂಆರ್ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲು ಅನುಕೂಲವಾಗಲಿದೆ. ಅಲ್ಲದೆ, ಪರೀಕ್ಷೆ ಪೂರ್ಣಗೊಂಡ ಒಂದು ವಾರದೊಳಗೆ ಫಲಿತಾಂಶ ಪ್ರಕಟಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸರ್ಕಾರಿ ಉದ್ಯೋಗಕ್ಕೆ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿ ಅಭ್ಯರ್ಥಿಗಳು ಯಾವುದೇ ವ್ಯಕ್ತಿಗಳು ಒಡ್ಡುವ ಆಮಿಷಗಳಿಗೆ ಒಳಗಾಗದೆ, ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ಮಾಹಿತಿ ಮಾತ್ರ ಅವಲಂಬಿಸುವಂತೆ ಆಯೋಗ ಮನವಿ ಮಾಡಿದೆ.
ಮುಂದಿನ ದಿನಗಳಲ್ಲಿ ಕೇಂದ್ರ ಲೋಕಸೇವಾ ಆಯೋಗದ ಮಾದರಿಯ ಪಾರದರ್ಶಕತೆ, ತಂತ್ರಜ್ಞಾನ ಬಳಕೆ ಮತ್ತು ತ್ವರಿತ ನೇಮಕಾತಿ ವ್ಯವಸ್ಥೆ ಅಳವಡಿಸಿಕೊಂಡು, ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ವೇಗವಾಗಿ ಪೂರ್ಣಗೊಳಿಸಿ ಸರ್ಕಾರದ ಆಶಯದಂತೆ ಕಾರ್ಯನಿರ್ವಹಿಸಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
- ಮಹತ್ವದ ಸುಧಾರಣೆ ತರಲು ಗಂಭೀರ ಚರ್ಚೆ
- ಆಯೋಗದ ಸದಸ್ಯರ ಜೊತೆ ಪ್ರಸನ್ನ ಸಭೆ
- ಸಾಲು ಸಾಲು ವಿವಾದ, ಅಕ್ರಮಗಳ ಆರೋಪದಿಂದ ನಲುಗಿರುವ ಕರ್ನಾಟಕ ಲೋಕಸೇವಾ ಆಯೋಗ
- ಕೆಪಿಎಸ್ಸಿಯ ನೂತನ ಪರೀಕ್ಷಾ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಸನ್ನರಿಂದ ಸಭೆ
- ಆಯೋಗದ ಸದಸ್ಯರೂ ಭಾಗಿ. ಪಾರದರ್ಶಕ, ತಂತ್ರಜ್ಞಾನಾಧಾರಿತ, ತ್ವರಿತ ಪ್ರಕ್ರಿಯೆ ಬಗ್ಗೆ ಚರ್ಚೆ
- ಯುಪಿಎಸ್‌ಸಿ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ನಡೆಸುವ ಬಗ್ಗೆ ಸಮಾಲೋಚನೆ
- ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿ 3ರಿಂದ 5 ತಿಂಗಳಲ್ಲಿ ಪ್ರಕ್ರಿಯೆ ಮುಗಿಸಲು ಒಲವು