ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಪಂಚಮಸಾಲಿಗರ ಮೇಲೆ ಲಾಠಿ ಚಾರ್ಜ್‌ : ನ್ಯಾಯಾಂಗ ತನಿಖೆಗೆ ಕೋರ್ಟ್‌ ಸೂಚನೆ -

ಸಾರಾಂಶ

ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಅವರಣದಲ್ಲಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ನಡೆದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ

  ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಅವರಣದಲ್ಲಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ನಡೆದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಕಳೆದ ಡಿಸೆಂಬರ್‌ನಲ್ಲಿ ನಡೆದ ಬೆಳಗಾವಿ ಅಧಿವೇಶನ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿ ಪ್ರಹಾರ ಪ್ರಕರಣ ಕುರಿತು ತನಿಖೆಗೆ ಆದೇಶಿಸಲು ಕೋರಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆಗೆ ನಡೆಸಬೇಕು. ಕಾಲಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿದೆ.

ವಿಚಾರಣೆ ವೇಳೆ ಹೋರಾಟಗಾರರ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಆಗ್ರಹಿಸಿ ಸುವರ್ಣ ಸೌಧಕ್ಕೆ ಮುತ್ತಿಗೆಗೆ ಯತ್ನಿಸಿದ್ದ ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ದುರುದ್ದೇಶಪೂರ್ವಕವಾಗಿಯೇ ಲಾಠಿ ಪ್ರಹಾರ ನಡೆಸಲಾಗಿತ್ತು. ಈ ನಡೆ ಖಂಡಿಸಿ ಅರ್ಜಿದಾರರು ಪ್ರತಿಭಟನೆ ನಡೆಸಿದ್ದರು ಹಾಗೂ ಘಟನೆ ಕುರಿತು ತನಿಖೆ ನಡೆಸಲು ಆದೇಶಿಸುವಂತೆ ಸರ್ಕಾರವನ್ನು ಕೋರಿದ್ದರು. ಈ ಮನವಿಗೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಲಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದಿದ್ದರು.

Share this article