ಬೆಂಗಳೂರು : ರಾಜ್ಯದ ಸಾಂಸ್ಕೃತಿಕ ನಾಯಕ ಬಸವಣ್ಣನವರಿಗೆ ಅಪಮಾನ ಮಾಡಿರುವ ‘ಬಸವ ಮಂಟಪ’ ಪುಸ್ತಕದ ಹಿಂದೆ ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮಕ್ಕೆ ತೀರ್ಮಾನಿಸಿದ್ದೇವೆ. ಪುಸ್ತಕದ ಪ್ರತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಈಗಾಗಲೇ ಮಾರ್ಗದರ್ಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಅಲ್ಲದೆ, ಜಾತಿ ವಿಚಾರವಾಗಿ ಸಮಾಜದಲ್ಲಿ ಪರಸ್ಪರ ವೈಷಮ್ಯ ಮೂಡಿಸುವ ಕೆಲಸವನ್ನು ಕೆಲ ಮಾಧ್ಯಮಗಳು ಹಾಗೂ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಈ ವಿಚಾರ ಗಂಭೀರವಾಗಿ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರತಿಭಟನೆಗಳು ನಡೆದು ಶಾಂತಿ ಭಂಗ ಉಂಟಾಗುವ ಸಾಧ್ಯತೆಗಳಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳುತ್ತಿದೆ ಎಂದರು.
ಬಸವಣ್ಣನವರಿಗೆ ಅಪಮಾನವಾಗಿರುವುದು ಕರ್ನಾಟಕಕ್ಕೆ ದೊಡ್ಡ ಅಗೌರವದ ಸಂಗತಿ. ಬಸವಣ್ಣನವರನ್ನು ನಾವು ಸಾಂಸ್ಕೃತಿಕ ನಾಯಕರೆಂದು ಗೌರವಿಸುತ್ತೇವೆ. ಅವರ ಆಚಾರ-ವಿಚಾರ ಹಾಗೂ ತತ್ವಾದರ್ಶಗಳನ್ನು ನಮ್ಮ ಸರ್ಕಾರ ಅಳವಡಿಸಿಕೊಳ್ಳುತ್ತಿದೆ. ಬಸವಣ್ಣನವರ ಹೆಜ್ಜೆ ಗುರುತುಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಶಿವಕುಮಾರ್ ಹೇಳಿದರು.
ದೆಹಲಿಯಲ್ಲೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಲಾಗಿದೆ. ರಾಜ್ಯದ ಪ್ರತಿಯೊಂದು ಊರು, ಮನೆ, ಶಾಲೆ ಹಾಗೂ ಕಚೇರಿಗಳಲ್ಲಿ ಅವರ ವಿಚಾರಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸಿ, ಅವರ ಆಚಾರ-ವಿಚಾರಗಳಿಗೆ ಅನುಗುಣವಾಗಿ ಸರ್ಕಾರ ಮುನ್ನಡೆಯುತ್ತಿದೆ. ಹೀಗಾಗಿ ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ ಎಂದರು.
ಜಾತಿ ವಿಚಾರವಾಗಿ ಸಮಾಜದಲ್ಲಿ ಪರಸ್ಪರ ವೈಷಮ್ಯ ಮೂಡಿಸುವ ಕೆಲಸವನ್ನು ಕೆಲ ಮಾಧ್ಯಮ ಹಾಗೂ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಗಂಭೀರವಾಗಿ ಚರ್ಚಿಸಲಾಗಿದೆ. ಸಚಿವರಾದ ಈಶ್ವರ್ ಖಂಡ್ರೆ, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಬಸವರಾಜ ರಾಯರೆಡ್ಡಿ, ಯತೀಂದ್ರ ಸಿದ್ದರಾಮಯ್ಯ, ಕೆ.ಎಚ್.ಮುನಿಯಪ್ಪ ಸೇರಿ ಇಡೀ ಸಚಿವ ಸಂಪುಟವು ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಿದೆ ಎಂದು ಶಿವಕುಮಾರ್ ಹೇಳಿದರು.
ಪುಸ್ತಕ ಕುರಿತು ಬಸವ ಸಮಿತಿಯವರೂ ನನಗೆ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಇನ್ನಷ್ಟು ಸುದೀರ್ಘ ಚರ್ಚೆ ನಡೆಸಬೇಕಿದೆ. ವಿವಿಧ ಪಕ್ಷಗಳ ಮುಖಂಡರೂ ನಮ್ಮೊಂದಿಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಪ್ರತಿಭಟನೆಗಳು ನಡೆದು ಶಾಂತಿ ಭಂಗ ಉಂಟಾಗುವ ಸಾಧ್ಯತೆಗಳಿದ್ದ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಶಿವಕುಮಾರ್ ಸ್ಪಷ್ಟಪಡಿಸಿದರು.