;Resize=(412,232))
ಬೆಂಗಳೂರು : ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡಲು ರೂಪಿಸಲಾಗುತ್ತಿರುವ ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ರಲ್ಲಿ ಕ್ರೂಸ್ ಪ್ರವಾಸೋದ್ಯಮ, ಬೀಚ್ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂಧನ ಭವನದಲ್ಲಿ ಶುಕ್ರವಾರ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜ್ಯದ ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸುವ ದೂರದೃಷ್ಟಿಯ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ರಾಜ್ಯದ ಕರಾವಳಿ ಹಾಗೂ ಮಲೆನಾಡು ವ್ಯಾಪ್ತಿಯ ಆರು ಜಿಲ್ಲೆಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸಿದ್ಧವಾಗುತ್ತಿರುವ ಹೊಸ ಪ್ರವಾಸೋದ್ಯಮ ನೀತಿಯಲ್ಲಿ, ವಿಷಯಾಧಾರಿತ ಪ್ರವಾಸೋದ್ಯಮ ಸರ್ಕೀಟ್‌ಗಳು, ಕಡಲತೀರ ಪ್ರವಾಸೋದ್ಯಮ, ಕ್ರೂಸ್ ಪ್ರವಾಸೋದ್ಯಮ, ಸಾಹಸ ಕ್ರೀಡೆಗಳು ಹಾಗೂ ಸ್ಥಳೀಯ ಆರ್ಥಿಕತೆ ಉತ್ತೇಜಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಸಚಿವರು ತಿಳಿಸಿದರು.
ಅಂತಾರಾಷ್ಟ್ರೀಯ ಕ್ರೂಸ್ ಹಡಗುಗಳು ಮಂಗಳೂರು ಸೇರಿ ರಾಜ್ಯದ ವಿವಿಧ ಬಂದರುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಮಗ್ರ ಕಾರ್ಯತಂತ್ರ ರೂಪಿಸಬೇಕಿದೆ. ಕ್ರೂಸ್ ಪ್ರವಾಸಿಗರು ಕರ್ನಾಟಕದಲ್ಲಿ ಹೆಚ್ಚು ದಿನ ಉಳಿಯುವಂತೆ ಆಕರ್ಷಕ ಪ್ರವಾಸೋದ್ಯಮ ಪ್ಯಾಕೇಜ್‌ಗಳು ಮತ್ತು ಸರ್ಕೀಟ್‌ಗಳನ್ನು ಅಭಿವೃದ್ಧಿಪಡಿಸಬೇಕು. ಈ ನಿಟ್ಟಿನಲ್ಲಿ ಪ್ರಮುಖ ಕ್ರೂಸ್ ಆಪರೇಟರ್‌ಗಳೊಂದಿಗೆ ಸಭೆ ನಡೆಸಿ, ಅವರ ಹಾಗೂ ಪ್ರವಾಸಿಗರ ನಿರೀಕ್ಷೆಗಳನ್ನು ಆಧರಿಸಿ ನೀತಿಯಲ್ಲಿ ಅಗತ್ಯ ಬದಲಾವಣೆ ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ಮತ್ತು ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ಸ್ (ಜೆಎಲ್‌ಆರ್) ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಗುಣಮಟ್ಟದ ವಸತಿ, ಮೂಲ ಸೌಕರ್ಯ, ಸ್ವಚ್ಛತೆ, ಮಾಹಿತಿ ವ್ಯವಸ್ಥೆ ಹಾಗೂ ಪ್ರವಾಸಿಗರಿಗೆ ಅಗತ್ಯ ಸೇವೆಗಳನ್ನು ಮತ್ತಷ್ಟು ವಿಸ್ತರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಆಯುಕ್ತ ಡಾ. ವಿ.ರಾಮ್ ಪ್ರಸಾತ್ ಮನೋಹರ್, ಕೆಎಸ್‌ಟಿಡಿಸಿ ಹಾಗೂ ಜೆಎಲ್‌ಆರ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
- ಇಲಾಖೆ ಹಿರಿಯ ಅಧಿಕಾರಿಗಳ ಜತೆಗೆ ಸಚಿವ ಸಭೆ