ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ

Published : Jun 15, 2025, 11:56 AM ISTUpdated : Jun 15, 2025, 12:02 PM IST
Nikhil kumaraswamy

ಸಾರಾಂಶ

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಸಂಘಟನೆ ನಿಟ್ಟಿನಲ್ಲಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರದಿಂದ ಆ.10ರವರೆಗೆ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ.

  ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಸಂಘಟನೆ ನಿಟ್ಟಿನಲ್ಲಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರದಿಂದ ಆ.10ರವರೆಗೆ ರಾಜ್ಯ ಪ್ರವಾಸ ಹಮ್ಮಿಕೊಳ್ಳಲಾಗಿದೆ.

ಈ ಪ್ರವಾಸ ಪೂರ್ಣಗೊಂಡ ಬಳಿಕ ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ, ಪ್ರತಿಕ್ರಿಯೆ ಗಮನಿಸಿ ನಿಖಿಲ್‌ಗೆ ರಾಜ್ಯಾಧ್ಯಕ್ಷ ಹುದ್ದೆಯ ಪಟ್ಟಾಭಿಷೇಕ ನೆರವೇರಿಸುವ ನಿರೀಕ್ಷೆಯಿದೆ.

ಮೊದಲ ಹಂತದ ಈ ಪ್ರವಾಸ ಸೋಮವಾರ ತುಮಕೂರಿನಿಂದ ಆರಂಭವಾಗಲಿದೆ. ನಿಖಿಲ್‌ ಅವರು ಒಟ್ಟು 58 ದಿನಗಳ ಕಾಲ ತುಮಕೂರು, ರಾಯಚೂರು, ಕೊಪ್ಪಳ. ವಿಜಯನಗರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ 90 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಅಂದರೆ, ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

ಈ ಪ್ರವಾಸ ಸಂಪೂರ್ಣ ಪಕ್ಷ ಸಂಘಟನೆಗೆ ಸಂಬಂಧಿಸಿದ್ದು, ಪಕ್ಷದ ಸ್ಥಳೀಯ ಮುಖಂಡರು, ಗ್ರಾಪಂ, ತಾಪಂ, ಜಿಪಂ ಸದಸ್ಯರು, ಬೂತ್‌, ಹೋಬಳಿ, ತಾಲೂಕು ಮಟ್ಟದ ಪದಾಧಿಕಾರಿಗಳೊಂದಿಗೆ ನಿಖಿಲ್‌ ಸಭೆ ನಡೆಸಿ ಬೇರು ಮಟ್ಟದಿಂದ ಪಕ್ಷದ ಬಲವರ್ಧನೆ ಬಗ್ಗೆ ಚರ್ಚಿಸಲಿದ್ದಾರೆ. ಮುಖಂಡರು ಹಾಗೂ ಪದಾಧಿಕಾರಿಗಳ ಅನಿಸಿಕೆ ಹಾಗೂ ಸಲಹೆಗಳನ್ನು ಆಲಿಸಲಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಪಕ್ಷದ ತಯಾರಿ ಸೇರಿ ಪಕ್ಷ ಸಂಘಟನೆ ಕುರಿತು ಮುಖಂಡರೊಂದಿಗೆ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಪಕ್ಷವನ್ನು ತಳಮಟ್ಟದಿಂದ ಭದ್ರಪಡಿಸುವ ನಿಟ್ಟಿನಲ್ಲಿ ನಿಖಿಲ್‌ ಕೈಗೊಂಡಿರುವ ಈ ಪ್ರವಾಸದಲ್ಲಿ ಜೆಡಿಎಸ್‌ನ ಹಿರಿಯ ನಾಯಕರು ಸಹ ಕೈ ಜೋಡಿಸಲಿದ್ದಾರೆ. ಈಗಾಗಲೇ ನಿಖಿಲ್‌ ಅವರು ಪಕ್ಷದ ಹಿರಿಯ ನಾಯಕರಿಗೆ ದೂರವಾಣಿ ಕರೆ ಮಾಡಿ ತಮ್ಮ ರಾಜ್ಯ ಪ್ರವಾಸದ ಬಗ್ಗೆ ಮಾಹಿತಿ ನೀಡಿದ್ದು, ಸಹಕಾರ ಕೋರಿದ್ದಾರೆ. ಬಹುತೇಕ ನಾಯಕರು ಪ್ರವಾಸದಲ್ಲಿ ಜೊತೆಯಾಗುವುದಾಗಿ ಅಭಯ ನೀಡಿದ್ದಾರೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

ಇಂದು ‘ಜನರೊಂದಿಗೆ ಜನತಾದ’ ಸಮಾವೇಶ 

ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿರುವ ಜೆಡಿಎಸ್‌ ಭಾನುವಾರ ಬೆಳಗ್ಗೆ 11 ಗಂಟೆಗೆ ಪಕ್ಷದ ಜೆ.ಪಿ.ಭವನದ ಆವರಣದಲ್ಲಿ ‘ಜನರೊಂದಿಗೆ ಜನತಾದಳ’ ಎಂಬ ಸಮಾವೇಶ ಹಮ್ಮಿಕೊಂಡಿದೆ.

ಸಮಾವೇಶವನ್ನು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಉದ್ಘಾಟಿಸಲಿದ್ದಾರೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಎಂ.ಮಲ್ಲೇಶ್‌ಬಾಬು, ಮಾಜಿ ಸಚಿವ ವೆಂಕಟರಾವ್‌ ನಾಡಗೌಡ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿ ಪಕ್ಷದ ಮುಖಂಡರು ಉಪಸ್ಥಿತರಿರಲಿದ್ದಾರೆ.

ಈ ಸಮಾವೇಶದಲ್ಲಿ ಪಕ್ಷದ ಸಂಘಟನೆ ನಿಟ್ಟಿನಲ್ಲಿ ನಿಖಿಲ್‌ ಕುಮಾರಸ್ವಾಮಿ ಕೈಗೊಂಡಿರುವ ‘ಸಂಘಟನಾ ರಾಜ್ಯ ಪ್ರವಾಸ’ ಹಾಗೂ ‘ಮಿಸ್ಡ್‌ ಕಾಲ್‌ ಸದಸ್ಯತ್ವ ಅಭಿಯಾನ’ಕ್ಕೆ ಚಾಲನೆ ನೀಡಲಾಗುತ್ತದೆ.

ಪಕ್ಷದ ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಪಕ್ಷದ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ, ಸಂಚಾಲಕರು, ಸದಸ್ಯರು, ರಾಜ್ಯ, ಜಿಲ್ಲಾ, ತಾಲೂಕು ಘಟಕಗಳ ಪದಾಧಿಕಾರಿಗಳು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ರಾಜ್ಯ ಮತ್ತು ಜಿಲ್ಲಾ ಮಟ್ಟದ ವಿವಿಧ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ರಾಜ್ಯ ವಕ್ತಾರರು, ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷಕ್ಕೆ ಸೇರಿರುವ ಚುನಾಯಿತ ಪ್ರತಿನಿಧಿಗಳು, ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ಪಕ್ಷದ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ