ಸಭೆಯಲ್ಲಿ ಮೂಡದ ಒಮ್ಮತ : ಅತಿಥಿ ಉಪನ್ಯಾಸಕ ನೇಮಕ ಮತ್ತಷ್ಟು ತಡ

Published : Sep 27, 2025, 10:26 AM IST
Dr MC Sudhakar

ಸಾರಾಂಶ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ

 ಬೆಂಗಳೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ, ಅತಿಥಿ ಉಪನ್ಯಾಸಕರ ನೇಮಕ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ವಿವಿ ಧನ ಸಹಾಯ ಆಯೋಗ(ಯುಜಿಸಿ) ನಿಯಮಗಳ ಪ್ರಕಾರ ಅರ್ಹ ವಿದ್ಯಾರ್ಹತೆ ಹೊಂದಿರುವ ಹಾಗೂ ಅರ್ಹ ವಿದ್ಯಾರ್ಹತೆ ಇಲ್ಲದ ಅತಿಥಿ ಉಪನ್ಯಾಸಕರ ನಡುವೆ ನಡೆಯುತ್ತಿರುವ ತಿಕ್ಕಾಟಕ್ಕೆ ಅಂತ್ಯ ಹಾಡಿ ಕಾನೂನಿನಡಿ ಪರಿಹಾರ ಕಂಡುಕೊಳ್ಳಲು ಶುಕ್ರವಾರ ಸಚಿವದ್ವಯರು ಸಭೆ ನಡೆಸಿದರು. ಈ ಸಭೆಯಲ್ಲಿ ಸೂಕ್ತ ಪರಿಹಾರ ಸಿಗದ ಕಾರಣ ಅಡ್ವೋಕೇಟ್‌ ಜನರಲ್‌ ಸೇರಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದ ಉನ್ನತ ಅಧಿಕಾರಿಗಳೊಂದಿಗೆ ಶನಿವಾರ ಆನ್‌ಲೈನ್‌ನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಯುಜಿಸಿ ಮಾರ್ಗಸೂಚಿ ಪ್ರಕಾರ ವಿದ್ಯಾರ್ಹತೆ ಇರುವರು ಮತ್ತು ಇಲ್ಲದವರನ್ನೂ ಅತಿಥಿ ಉಪನ್ಯಾಸಕರಾಗಿ ಮುಂದುವರಿಸುವಂತೆ ಬೇರೆ ಬೇರೆ ಕೋರ್ಟ್‌ಗಳ ಆದೇಶವಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಇಕ್ಕಟಿನಲ್ಲಿ ಸರ್ಕಾರ ಸಿಲುಕಿದೆ.

ಅನರ್ಹರನ್ನು ಬಿಟ್ಟು ನಮ್ಮನ್ನು ಮಾತ್ರ ನೇಮಕಾತಿ ನಡೆಸಬೇಕು ಎಂದು ಯುಜಿಸಿ ವಿದ್ಯಾರ್ಹತೆ ಹೊಂದಿರುವವರು ಒತ್ತಾಯಿಸಿದ್ದಾರೆ. ಮತ್ತೊಂದೆಡೆ ನಮ್ಮ ಸೇವಾನುಭವ ಪರಿಗಣಿಸಿ ನೇಮಕಾತಿ ಮಾಡುವಂತೆ ಅರ್ಹ ವಿದ್ಯಾರ್ಹತೆ ಹೊಂದಿರದವರು ಪಟ್ಟು ಹಿಡಿದಿದ್ದಾರೆ. ಇದರಿಂದ 2 ತಿಂಗಳಿಂದ ನೇಮಕಾತಿ ನೆನೆಗುದಿಗೆ ಬಿದ್ದಿದೆ.

ಪ್ರತಿಭಟನೆ: ಉಪನ್ಯಾಸಕರ ನೇಮಕ ವಿಳಂಬ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌(ಎಬಿವಿಪಿ) ಕಾರ್ಯಕರ್ತರು ಶುಕ್ರವಾರ ಸಚಿವ ಸುಧಾಕರ್‌ ಮನೆ ಎದುರು ವಿದ್ಯಾರ್ಥಿಗಳಿಗೆ ಬೋಧನೆ ಮಾಡುವ ರೀತಿಯಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಅನುಮತಿ ಇಲ್ಲದ ಕಾರಣ ಪೊಲೀಸರು ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಈ ವೇಳೆ ಮಾತನಾಡಿದ ಎಬಿವಿಪಿ ಬೆಂಗಳೂರು ದಕ್ಷಿಣ ವಿಭಾಗದ ಸಂಚಾಲಕ ಅಭಿನಂದನ ಮಿರ್ಜಿ, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ಸ್ವರಿತವಾಗಿ ನಿರ್ಧಾರ ತೆಗೆದುಕೊಂಡು ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿರುವುದನ್ನು ತಪ್ಪಿಸಬೇಕು ಎಂದರು.

ತರಗತಿ ಬಹಿಷ್ಕಾರಕ್ಕೆ ಕರೆ: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ಎಐಡಿಎಸ್‌ಒ ಸಂಘಟನೆಯು ಸೆ.27ರಂದು ತರಗತಿ ಬಹಿಷ್ಕಾರಕ್ಕೆ ಕರೆ ನೀಡಿದೆ.

PREV
Read more Articles on

Recommended Stories

ಬೆಂಗಳೂರು 2ನೇ ದೆಹಲಿ ಆಗುವುದು ಸನ್ನಿಹಿತ!
ಏರ್‌ಪೋರ್ಟ್‌ನಿಂದ ದಾವಣಗೆರೆಗೆ ನೇರ ಫ್ಲೈಬಸ್‌ ಶುರು