;Resize=(412,232))
ಬೆಂಗಳೂರು : ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅಧೀನ ನ್ಯಾಯಾಲಯ ವಿಧಿಸಿರುವ ಜೀವನಪರ್ಯಂತ ಜೈಲು ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣ ಸಂಬಂಧ ತಮಗೆ ಜೀವನ ಪರ್ಯಂತ ಜೈಲು ಶಿಕ್ಷೆ ಮತ್ತು 11.60 ಲಕ್ಷ ರು. ದಂಡ ವಿಧಿಸಿ 2025ರ ಆ.2ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಪ್ರಜ್ವಲ್ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೆ, ಮೇಲ್ಮನವಿ ಇತ್ಯರ್ಥ ಮಾಡುವವರೆಗೆ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡಬೇಕು ಎಂದು ಮನವಿ ಮಾಡಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.
ಈ ಮಧ್ಯಂತರ ಅರ್ಜಿ ವಜಾಗೊಳಿಸಿ ನ್ಯಾಯಮೂರ್ತಿಗಳಾದ ಕೆ.ಎಸ್.ಮುದಗಲ್ ಮತ್ತು ನ್ಯಾಯಮೂರ್ತಿ ಟಿ.ವೆಂಕಟೇಶ್ ನಾಯಕ್ ಅವರಿದ್ದ ವಿಭಾಗೀಯ ಪೀಠ ಬುಧವಾರ ಆದೇಶಿಸಿದೆ. ಇದರಿಂದ ಮಧ್ಯಂತರ ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಪ್ರಜ್ವಲ್‌ಗೆ ಭಾರಿ ನಿರಾಶೆ ಉಂಟಾಗಿದೆ.
ಪ್ರಕರಣದ ದಾಖಲೆಗಳನ್ನು ಪರಿಗಣಿಸಿದಾಗ ಮೇಲ್ಮನವಿದಾರ ಆರೋಪಿ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ. ಈ ಹಂತದಲ್ಲಿ ಪ್ರಜ್ವಲ್ ಬಿಡುಗಡೆ ಮಾಡಿದರೆ ಅದು ಇತರರ ಮೇಲೆ ಪರಿಣಾಮ ಉಂಟು ಮಾಡಲಿದೆ. ಹಾಗಾಗಿ, ಜಾಮೀನು ಮಂಜೂರು ಮಾಡುವುದು ಸೂಕ್ತವಲ್ಲ ಎಂದು ಪೀಠ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ.