ಮೈಕ್ರೋಫೈನಾನ್ಸ್‌ಗಳ ವಿರುದ್ಧದ ಸುಗ್ರೀವಾಜ್ಞೆ ರೆಡಿ - ಕ್ಯಾಬಿನೆಟ್‌ ಒಪ್ಪಿಗೆ ಪಡೆದು ಗೌರ್ನರ್‌ಗೆ ರವಾನೆ

Published : Jan 30, 2025, 07:40 AM IST
Finance Horoscope 2025

ಸಾರಾಂಶ

ಸಾಲ ವಸೂಲಾತಿ ವೇಳೆ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಲು ಮಸೂದೆ ಕರಡು ಸಿದ್ಧಪಡಿಸಲಾಗಿದ್ದು, ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದರು.

  ಬೆಂಗಳೂರು : ಸಾಲ ವಸೂಲಾತಿ ವೇಳೆ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಲು ಮಸೂದೆ ಕರಡು ಸಿದ್ಧಪಡಿಸಲಾಗಿದ್ದು, ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದರು.

ವಿಧಾನಸೌಧದಲ್ಲಿ ಬುಧವಾರ ಮಸೂದೆ ಅಂತಿಮಗೊಳಿಸುವ ಸಂಬಂಧ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಜತೆಗೂಡಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ಗಳು ಸಾಲ ವಸೂಲಾತಿ ಸಂದರ್ಭದಲ್ಲಿ ಅಮಾನವೀಯವಾಗಿ ವರ್ತಿಸುತ್ತಿವೆ. ಅದರಿಂದಾಗಿ ಸಣ್ಣ ಪ್ರಮಾಣದ ಸಾಲ ಪಡೆದವರು ಸಮಸ್ಯೆಗೀಡಾಗುತ್ತಿದ್ದು, ಅದನ್ನು ತಪ್ಪಿಸಲು ನೂತನ ಮಸೂದೆ ಸಿದ್ಧಪಡಿಸಲಾಗಿದೆ. ಅದರ ಕುರಿತು ಮುಖ್ಯಮಂತ್ರಿಯವರೊಂದಿಗೆ ಅಂತಿಮವಾಗಿ ಚರ್ಚಿಸಿ ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಅದನ್ನು ಮಂಡಿಸಲಾಗುವುದು ಎಂದರು.

ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಮಾತನಾಡಿ, ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅದನ್ನು ತಡೆಯಲು ತ್ವರಿತವಾಗಿ ಕಾನೂನು ತರಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಹೀಗಾಗಿ ಮಸೂದೆ ಸಿದ್ಧಪಡಿಸಲಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಚರ್ಚಿಸಲಾಗುವುದು. ಅಲ್ಲದೆ, ಮಾರ್ಚ್‌ನಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಅಲ್ಲಿಯವರೆಗೆ ಕಾಯುವ ಬದಲು ಸುಗ್ರೀವಾಜ್ಞೆ ಮೂಲಕ ಮಸೂದೆಯನ್ನು ಶೀಘ್ರದಲ್ಲಿ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಮಸೂದೆಗೆ ಅನುಮೋದನೆ ಪಡೆದು, ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗುವುದು ಎಂದು ಹೇಳಿದರು.

ಮಸೂದೆಗೆ ಅನುಮೋದನೆ ದೊರೆಯುವವರೆಗೆ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಬರದಿದ್ದರೂ, ವಿಷಯ ತಿಳಿದರೆ ಸ್ವಯಂ ಪ್ರೇರಿತ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲ ಪೊಲೀಸ್‌ ಠಾಣೆಗಳಿಗೂ ಸೂಚಿಸಲಾಗಿದೆ. ಅದರ ಜತೆಗೆ ಸಾಲ ಪಡೆಯುವುದು ಮತ್ತು ಅದನ್ನು ಮರುಪಾವತಿಸುವ ಕುರಿತಂತೆ ಜನರಲ್ಲಿ ಜಾಗೃತಿಯನ್ನೂ ಮೂಡಿಸಲಾಗುವುದು ಎಂದು ತಿಳಿಸಿದರು.

ನೂತನ ಮಸೂದೆಯಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಆರ್ಥಿಕ ವ್ಯವಹಾರಗಳಿಗೆ ತಡೆಯೊಡ್ಡುತ್ತಿಲ್ಲ. ಬದಲಿಗೆ ಸಾಲ ವಸೂಲಾತಿ ವೇಳೆ ಕಿರುಕುಳ ನೀಡುವುದನ್ನು ತಪ್ಪಿಸುವ ಅಂಶಗಳು ಇರಲಿದೆ. ಕಿರುಕುಳದ ಕುರಿತು ದೂರುಗಳು ಬಂದು ಸಾಬೀತಾದರೆ ಮೈಕ್ರೋ ಫೈನಾನ್ಸ್‌ ಸಂಸ್ಥೆ ಮುಖ್ಯಸ್ಥರಿಗೆ ದಂಡ ವಿಧಿಸುವುದು ಮತ್ತು ಜೈಲು ಶಿಕ್ಷೆ ನೀಡುವಂತಹ ಕಠಿಣ ಅಂಶಗಳು ಮಸೂದೆಗೆ ಸೇರಿಸಲಾಗುತ್ತಿದೆ ಎಂದು ವಿವರಿಸಿದರು.

ಫೈನಾನ್ಸ್‌ ಕಿರುಕುಳಕ್ಕೆ ಮತ್ತೊರ್ವ ಮಹಿಳೆ ಬಲಿ

 ಮಂಡ್ಯ/ತುಮಕೂರು: ಮೈಕ್ರೋಫೈನಾನ್ಸ್‌ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಸಾವು ಸಂಭವಿಸಿದೆ. ದೌರ್ಜನ್ಯದಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ಕೊನ್ನಾಪುರ ಗ್ರಾಮದ ಪ್ರೇಮಾ (59) ಬುಧವಾರ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಅಲ್ಲಾಳಸಂದ್ರ ಹನುಮಂತಪುರದಲ್ಲಿ ಮಂಗಳಮ್ಮ ಎಂಬುವರು 30 ಬಿಪಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''