ಬಸವಣ್ಣ ಅಪಮಾನ ವಿರುದ್ಧ ಭುಗಿಲೆದ್ದ ಆಕ್ರೋಶ

Published : Nov 21, 2026, 09:14 AM IST
Basavanna

ಸಾರಾಂಶ

ರಾಜ್ಯದ ಸಾಂಸ್ಕೃತಿಕ ನಾಯಕ, ಕಾಯಕಯೋಗಿ, ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಮತ್ತು ಸಂದರ್ಶನ ಪ್ರಕಟಿಸಿ ಅವಮಾನ ಮಾಡಿರುವುದನ್ನು ಖಂಡಿಸಿ, ಲೇಖಕ ರವಿ ಹಂಜ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ರಾಜ್ಯದ ಹಲವೆಡೆ ಶುಕ್ರವಾರ ಪ್ರತಿಭಟನೆ

ಬೆಳಗಾವಿ : ರಾಜ್ಯದ ಸಾಂಸ್ಕೃತಿಕ ನಾಯಕ, ಕಾಯಕಯೋಗಿ, ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಬರಹ ಮತ್ತು ಸಂದರ್ಶನ ಪ್ರಕಟಿಸಿ ಅವಮಾನ ಮಾಡಿರುವುದನ್ನು ಖಂಡಿಸಿ, ಲೇಖಕ ರವಿ ಹಂಜ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ರಾಜ್ಯದ ಹಲವೆಡೆ ಶುಕ್ರವಾರ ಪ್ರತಿಭಟನೆಗಳು ನಡೆದವು. ಅಲ್ಲದೆ, ಈ ಘಟನೆಯನ್ನು ಲಿಂಗಾಯತ ಸಮಾಜದ ಧರ್ಮಗುರುಗಳು, ಪಕ್ಷಾತೀತವಾಗಿ ರಾಜಕೀಯ ನಾಯಕರು ಖಂಡಿಸಿದ್ದು, ಬಸವಣ್ಣನವರ ಘನತೆಗೆ ಚ್ಯುತಿ ತಂದ ಲೇಖಕ ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದೇ ವೇಳೆ, ಬೆಳಗಾವಿ, ವಿಜಯಪುರ, ಬಸವನಬಾಗೇವಾಡಿ, ಚನ್ನಗಿರಿ, ಚಾಮರಾಜನಗರ, ದಾವಣಗೆರೆಗಳಲ್ಲಿ ಲೇಖಕ ರವಿ ಹಂಜ್‌ ವಿರುದ್ಧ ಎಫ್‌ಐಆರ್‌ಗಳು ದಾಖಲಾಗಿವೆ.

ಪ್ರತಿಭಟನೆ:

‘ಬಸವ ಮಂಟಪ’ ಕೃತಿಯ ಲೇಖಕ ರವಿ ಹಂಜ್‌ ಬಂಧನಕ್ಕೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದವರು ಮೈಸೂರಿನ ಗನ್ ಹೌಸ್‌ ಬಳಿಯ ಬಸವೇಶ್ವರ ಪ್ರತಿಮೆ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು, ವಿವಾದಿತ ಕೃತಿ, ಲೇಖಕ ರವಿ‌ ಹಂಜ್ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಕೊಪ್ಪಳ ಬಸವತತ್ವ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ವಿಜಯಪುರದಲ್ಲಿ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ರಾಷ್ಟ್ರೀಯ ಬಸವ ಸೇನೆಯವರು, ರವಿ ಹಂಜ್ ಗಡೀಪಾರಿಗೆ ಆಗ್ರಹಿಸಿದರು. ಬೆಳಗಾವಿಯಲ್ಲಿ ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಹಾಗೂ ಅಥಣಿಯ ಮೊಟಗಿ ಮಠದ ಚನ್ನಬಸವ ಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಇದೇ ವೇಳೆ, ಕಲಬುರಗಿ, ಬೀದರ್‌, ಇಂಡಿ, ರಾಯಚೂರು ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು. ಈ ಮಧ್ಯೆ, ಶನಿವಾರ ಚನ್ನಗಿರಿಯಲ್ಲಿ ಮಠಾಧೀಶರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಪಕ್ಷಾತೀತವಾಗಿ ನಾಯಕರ ಖಂಡನೆ:

ಇದೇ ವೇಳೆ, ಬಸವಣ್ಣಗೆ ಅವಮಾನ ಮಾಡಿರುವುದನ್ನು ಪಕ್ಷಾತೀತವಾಗಿ ರಾಜಕೀಯ ನಾಯಕರು ಖಂಡಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಮಾಜಿ ಸಿಎಂ, ಬಸವರಾಜ ಬೊಮ್ಮಾಯಿ, ವಿವಾದಾತ್ಮಕ ಬಸವ ಮಂಟಪ ಕೃತಿಯನ್ನು ಮುಟ್ಟುಗೋಲು ಹಾಕಿಕೊಂಡು ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್, ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ನಡೆದಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ, ಇದು ಕರ್ನಾಟಕದ 7 ಕೋಟಿ ಕನ್ನಡಿಗರು ಹಾಗೂ ವಿಶ್ವದಾದ್ಯಂತ ಇರುವ ಬಸವಣ್ಣನವರ ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ಕಿಡಿಕಾರಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಶಾಸಕ, ಮಾಜಿ ಸಚಿವ ಶಿವಾನಂದ ಪಾಟೀಲ್‌, ಬಸವಣ್ಣನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಹಾಗೂ ಅವರ ವಚನಗಳನ್ನು ತಪ್ಪಾಗಿ ವಿಶ್ಲೇಷಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಕಿಡಿ ಕಾರಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಲೇಖಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದೇ ವೇಳೆ, ಬೀದರ್‌ನಲ್ಲಿ ಮಾತನಾಡಿದ ಬಸವ ಮಹಾಮನೆಯ ಅಲ್ಲಮಪ್ರಭು ಶೂನ್ಯಪೀಠದ ಅಧ್ಯಕ್ಷ ಸಿದ್ದರಾಮೇಶ್ವರ ಸ್ವಾಮೀಜಿ, ಗದಗದ ತೋಂಟದ ಸಿದ್ದರಾಮ ಶ್ರೀ ಕೂಡ ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಎಫ್‌ಆರ್‌:

ಇದೇ ವೇಳೆ, ಜಾಗತಿಕ ಲಿಂಗಾಯತ ಮಹಾಸಭಾದ ಮುಖಂಡರು ನೀಡಿದ ದೂರಿನ ಮೇಲೆ ರವಿ ಹಂಜ್‌ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆ, ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆ, ಬಸವನಬಾಗೇವಾಡಿ ಪೊಲೀಸ್ ಠಾಣೆ, ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಚನ್ನಗಿರಿ, ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್‌ ಗಳು ದಾಖಲಾಗಿವೆ. ಚಾಮರಾಜನಗರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ವತಿಯಿಂದ ಎಸ್ಪಿ ಮುತ್ತುರಾಜು ಅವರಿಗೆ ದೂರು ನೀಡಲಾಗಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಸಾಹುಕಾರ್‌ & ಟೀಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಸ್ತ್ರ
ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಓಡಾಟಕ್ಕೆ ಸುಪ್ರೀಂ ಅಸ್ತು