ಓಸಿ ಕಡ್ಡಾಯದಿಂದ ವಿದ್ಯುತ್‌ ಸಂಪರ್ಕ ಸಮಸ್ಯೆಗೆ ಶೀಘ್ರ ಪರಿಹಾರ: ಜಾರ್ಜ್

Published : May 30, 2025, 12:02 PM IST
KJ George

ಸಾರಾಂಶ

ವಸತಿ, ವಾಣಿಜ್ಯ ಹಾಗೂ ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಪಡೆಯಲು ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳುತ್ತೇವೆ ಎಂದ ಇಂಧನ ಸಚಿವ ಕೆ.ಜೆ.ಜಾರ್ಜ್‌

  ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ (ಓಸಿ) ಕಡ್ಡಾಯಗೊಳಿಸಿರುವುದರಿಂದ ವಸತಿ, ವಾಣಿಜ್ಯ ಹಾಗೂ ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಪಡೆಯಲು ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

ಸಮಸ್ಯೆಗೆ ಪರಿಹಾರ ಕಲ್ಪಿಸುವ ಕುರಿತ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಹೇಳಿದರು.

ಓಸಿ ಹಾಗೂ ಸಿಸಿ ನೆಪದಲ್ಲಿ 5,500 ಸಣ್ಣ ಕೈಗಾರಿಕೆಗಳಿಗೆ ವಿದ್ಯುತ್ ಸಂಪರ್ಕ ನೀಡುತ್ತಿಲ್ಲ ಎಂದು ಗುರುವಾರ ‘ಕನ್ನಡಪ್ರಭ’ ಪತ್ರಿಕೆ ವಿಶೇಷ ವರದಿ ಪ್ರಕಟಿಸಿತ್ತು. ಈ ಬಗ್ಗೆ ಗುರುವಾರ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿದ ಬಳಿಕ ಸಚಿವ ಕೆ.ಜೆ. ಜಾರ್ಜ್‌ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿದ್ದಾರೆ.

ಸಮಸ್ಯೆ ಇತ್ಯರ್ಥಕ್ಕೆ ಸಿಎಸ್‌ಗೂ ಸಿಎಂ ಸೂಚನೆ: ಸಚಿವ

ವಿದ್ಯುತ್ ಸಂಪರ್ಕಕ್ಕೆ ಓಸಿ ಕಡ್ಡಾಯಗೊಳಿಸಿರುವುದರಿಂದ ಮನೆ ನಿರ್ಮಾಣ, ಕೈಗಾರಿಕೋದ್ಯಮಕ್ಕೆ ಆಗುತ್ತಿರುವ ಸಮಸ್ಯೆ ಸರ್ಕಾರದ ಗಮನಕ್ಕೆ ಬಂದಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಸರ್ಕಾರ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ ಕಡ್ಡಾಯಗೊಳಿಸಿದೆ. ಇದರಿಂದ ಉದ್ಭವವಾಗಿರುವ ಸಮಸ್ಯೆ ನಿವಾರಿಸಲು ಬೈಲಾ ತಿದ್ದುಪಡಿ ಮಾಡಬೇಕಿದೆ. ಮುಖ್ಯಕಾರ್ಯದರ್ಶಿ ಅವರು ಪರಿಹಾರ ಕ್ರಮಗಳ ಕುರಿತು ವರದಿ ನೀಡಿದ ಕೂಡಲೇ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಂಡು ಸಮಸ್ಯೆ ನಿವಾರಿಸಲಾಗುವುದು ಎಂದು ಹೇಳಿದರು.

ಗೃಹ ಜ್ಯೋತಿ ಡಿ-ಲಿಂಕ್ ಸಮಸ್ಯೆ ಇಲ್ಲ:

ಗೃಹ ಜ್ಯೋತಿ ಯೋಜನೆ ಫಲಾನುಭವಿಗಳು ಬಾಡಿಗೆ ಮನೆ ಬದಲಿಸುವಾಗ ಹಳೆಯ ಆರ್.ಆರ್. ನಂಬರ್‌ನಿಂದ ಡಿ-ಲಿಂಕ್ ಮಾಡಿ ಹೊಸ ಆರ್.ಆರ್. ನಂಬರ್‌ಗೆ ಲಿಂಕ್‌ ಮಾಡಲು ಯಾವುದೇ ಸಮಸ್ಯೆ ಇಲ್ಲ. ಆನ್‌ಲೈನ್‌ ಮೂಲಕವೇ ಲಿಂಕ್‌ ಹಾಗೂ ಡಿ ಲಿಂಕ್‌ಗೆ ಅವಕಾಶ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಂದೊಮ್ಮೆ ಯಾರಾದರೂ ನಿರ್ದಿಷ್ಟ ವ್ಯಕ್ತಿಗಳಿಗೆ ಸಮಸ್ಯೆ ಆಗುತ್ತಿದ್ದರೆ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಕಾರ್ಯಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ