ಬೆಂಗಳೂರು : ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದ ವ್ಯಾಪ್ತಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯ ಮಾರುತಗಳು ಆಂಧ್ರ ಕರಾವಳಿ ಮೂಲಕ ಭೂಭಾಗ ಪ್ರದೇಶಿಸಿದ್ದು, ವಾಯುಭಾರ ಕುಸಿತವಾಗಿದೆ. ಇದರಿಂದ ರಾಜ್ಯಕ್ಕೆ ಹೆಚ್ಚಿನ ಪ್ರಭಾವಿಲ್ಲ. ಆದರೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗಲಿದೆ.
ಬೆಳಗಾವಿ, ಬಾಗಲಕೋಟೆ, ಕಲಬುರಗಿ, ವಿಜಯಪುರ ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಮಳೆಯೊಂದಿಗೆ ಗಾಳಿಯ ವೇಗ ಸಹ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಳಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಸೆ.15 ರಿಂದ ಸೆ.19ರ ವರೆಗೆ ಕರಾವಳಿಯ ಮೂರು ಜಿಲ್ಲೆಗಳು, ಸೆ.15 ಮತ್ತು 16ಕ್ಕೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ನೀಡಲಾಗಿದ್ದು, ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.