ರೂಪಾ ಮೌದ್ಗಿಲ್‌ ಮಾನಹಾನಿ ಕೇಸ್‌: ರೋಹಿಣಿ ಅರ್ಜಿ ವಜಾ

Published : Feb 22, 2026, 12:46 PM IST
Rohini Sindhuri vs D Roopa

ಸಾರಾಂಶ

ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರು ಹೂಡಿರುವ ಮಾನಹಾನಿ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಿಚಾರಣೆಗೆ ಪರಿಗಣಿಸಿ(ಸಂಜ್ಞೆ-ಕಾಗ್ನಿಜೆನ್ಸ್‌) ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮತ್ತೊಬ್ಬ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಶನಿವಾರ ವಜಾಗೊಳಿಸಿದೆ.

  ಬೆಂಗಳೂರು :  ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರು ಹೂಡಿರುವ ಮಾನಹಾನಿ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಿಚಾರಣೆಗೆ ಪರಿಗಣಿಸಿ(ಸಂಜ್ಞೆ-ಕಾಗ್ನಿಜೆನ್ಸ್‌) ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮತ್ತೊಬ್ಬ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಶನಿವಾರ ವಜಾಗೊಳಿಸಿದೆ.

‘ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್‌ ಅಧಿಕಾರಿ ರೂಪಾ ಅವರು ತನ್ನ ಮೇಲೆ ವೈಯಕ್ತಿಕ ಹಗೆ ಸಾಧಿಸಲು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ರೀತಿ ವರ್ತಿಸುತ್ತಿದ್ದಾರೆ’ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದನ್ನು ಆಧರಿಸಿ ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರು ರೋಹಿಣಿ ಮೇಲೆ ಮಾನಹಾನಿ ಪ್ರಕರಣ ದಾಖಲಿಸಿದ್ದರು.

ಪ್ರಕರಣದ ಸಂಬಂಧ ಜ.13ರಂದು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಸಂಜ್ಞೆ ಪರಿಗಣಿಸಿರುವುದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪ್ರಕಟಿಸಿದ್ದು, ವಿಸ್ತೃತ ಆದೇಶ ಇನ್ನಷ್ಟೇ ಹೊರಬರಬೇಕಿದೆ.

ಪ್ರಕರಣದ ಹಿನ್ನೆಲೆ:

ರೋಹಿಣಿ ಸಿಂಧೂರಿಯವರು ಮಾಧ್ಯಮ ಪ್ರಕಟಣೆಯಲ್ಲಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್‌ ಅಧಿಕಾರಿ ರೂಪಾ ತನ್ನ ವಿರುದ್ಧ ವೈಯಕ್ತಿಕ ಹಗೆ ಸಾಧಿಸಲು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವವರ ರೀತಿ ವರ್ತಿಸುತ್ತಿದ್ದಾರೆ. ರೂಪಾಗೆ ಇದೊಂದು ಅಭ್ಯಾಸವಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಹುದ್ದೆಗಳಲ್ಲಿ ಇದೇ ರೀತಿಯ ಆಧಾರರಹಿತ ಆರೋಪ ಮಾಡುವ ಮೂಲಕ ಮಾಧ್ಯಮಗಳ ಗಮನ ಸೆಳೆಯಲು ಹಾಗೂ ತಾನು ದ್ವೇಷಿಸುವ ವ್ಯಕ್ತಿಗಳ ಮೇಲೆ ವೈಯಕ್ತಿಕ ಹಗೆ ಸಾಧಿಸಲು ಕೀಳುಮಟ್ಟದ ಪ್ರವೃತ್ತಿ ಪ್ರದರ್ಶಿಸುತ್ತಿದ್ದಾರೆ. ಯಾವಾಗಲೂ ಸುದ್ದಿಯಲ್ಲಿರಬೇಕು ಎಂದು ಬಯಸುವ ರೂಪಾ, ತಮ್ಮ ಸಾಮಾಜಿಕ ಮಾಧ್ಯಮ ಪುಟದಲ್ಲಿ ಅದಕ್ಕೆ ಬೇಕಾದ ಪೋಸ್ಟ್‌ ಹಾಕುವ ಮೂಲಕ ಸುದ್ದಿಯ ಕೇಂದ್ರಬಿಂದುವಾಗಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.

ತೇಜೋವಧೆ ಮಾಡುವುದೇ ಅವರ  ಕೆಲಸ

ಮುಂದುವರಿದು, ‘ಜವಾಬ್ದಾರಿಯುತ ಸ್ಥಾನದಲ್ಲಿರುವ ರೂಪಾ ಒಳ್ಳೆಯ ಕೆಲಸಗಳತ್ತ ಗಮನಹರಿಸುವುದನ್ನು ಬಿಟ್ಟು ಅಥವಾ ಇನ್ನೊಬ್ಬರನ್ನು ಗುರಿಯಾಗಿಸಿಕೊಂಡು ತೇಜೋವಧೆ ಮಾಡುವುದೇ ಅವರ ಪ್ರಾಥಮಿಕ ಕೆಲಸ ಎಂದು ತೋರುತ್ತದೆ. ಅದರಲ್ಲೂ ತನ್ನ ವಿರುದ್ಧ ಯಾವುದೋ ವೈಯಕ್ತಿಕ ಹಗೆ ಇಟ್ಟುಕೊಂಡು ಸುಳ್ಳು, ವೈಯಕ್ತಿಕ ನಿಂದನೆ ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮ ಹಾಗೂ ವಾಟ್ಸಾಪ್‌ ಸ್ಟೇಟಸ್‌ ಸ್ಕ್ರೀನ್‌ ಶಾಟ್‌ಗಳ ಮೂಲಕ ಸಂಗ್ರಹಿಸಿರುವ ಫೋಟೊಗಳನ್ನು ತನ್ನ ತೇಜೋವಧೆ ಮಾಡಲು ರೂಪಾ ಬಳಸಿದ್ದಾರೆ. ಈ ಫೋಟೊಗಳನ್ನು ಕೆಲ ಅಧಿಕಾರಿಗಳಿಗೆ ಕಳುಹಿಸಿದ್ದೇನೆ ಎನ್ನುವ ಸುಳ್ಳು ಆರೋಪ ಮಾಡಿದ್ದಾರೆ. ಹೀಗಾಗಿ, ಆ ಅಧಿಕಾರಿಗಳ ಹೆಸರು ಬಹಿರಂಗಪಡಿಸಬೇಕು ಎಂದು ರೂಪಾ ಅವರನ್ನು ಆಗ್ರಹಿಸುತ್ತೇನೆ ಎಂದು ವಿವರಿಸಿದ್ದರು.

ಸೇವಾ ನಡತೆ ನಿಯಮಗಳ ಉಲ್ಲಂಘನೆಗಾಗಿ ರೂಪಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಕ್ಷಮ ಪ್ರಾಧಿಕಾರಕ್ಕೆ ದೂರು ನೀಡಿದ್ದೇನೆ. ಅಲ್ಲದೇ, ಐಪಿಸಿ ವಿವಿಧ ಸೆಕ್ಷನ್‌ಗಳ ಅನ್ವಯ ರೂಪಾ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ವಿವರಿಸಿದ್ದರು.

ಇದನ್ನು ಆಧರಿಸಿ ರೂಪಾ ಅವರು ಮಾನಹಾನಿ ಪ್ರಕರಣ ಹೂಡಿದ್ದು, ಸ್ವಯಂ ಹೇಳಿಕೆಯನ್ನೂ ದಾಖಲಿಸಿದ್ದರು. ಇದರ ಆಧಾರದಲ್ಲಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಸಂಜ್ಞೆ ಎಂದು ಪರಿಗಣಿಸಿತ್ತು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಅತ್ಯುತ್ತಮ ವಿವಿ ಕಟ್ಟಲು ಏಕೆ ಆಗುತ್ತಿಲ್ಲ? : ಸಿದ್ದರಾಮಯ್ಯ
ನೇಮಕ, ವರ್ಗಕ್ಕೆ ಯಾರಿಗೂ ಹಣ ಕೊಡ್ಬೇಡಿ : ಸಿಎಂ