;Resize=(412,232))
ಬೆಂಗಳೂರು : ರಾಜ್ಯದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿರುವ, ವಿಧಾನಮಂಡಲ ಅಧಿವೇಶನದಲ್ಲೂ ಚರ್ಚೆಗೆ ಬರಲಿರುವ ಕೇಂದ್ರ ಸರ್ಕಾರದ ‘ಜಿ ರಾಮ್ ಜಿ’ ಯೋಜನೆ ಕುರಿತು ಖುದ್ದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ಕ್ಲಾಸ್ ತೆಗೆದುಕೊಳ್ಳಲಿದ್ದಾರೆ.
ಈ ಯೋಜನೆಯನ್ನು ವಿರೋಧಿಸಿ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿರುವ ಹಿನ್ನೆಲೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಉಭಯ ಪಕ್ಷಗಳ ಶಾಸಕರನ್ನು ಉದ್ದೇಶಿಸಿ ಯೋಜನೆ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷಗಳ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಈ ವೇಳೆ ಉಪಸ್ಥಿತರಿರಲಿದ್ದಾರೆ. ಬಳಿಕ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದ ನಾಯಕರೊಂದಿಗೆ ಪತ್ರಿಕಾಗೋಷ್ಠಿಯನ್ನೂ ಉದ್ದೇಶಿಸಿ ಮಾತನಾಡಲಿದ್ದಾರೆ.
- ಯುಪಿಎ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಯೋಜನೆಯ ಬದಲಿಗೆ ಜಿ ರಾಮ್ ಜಿ ರೂಪಿಸಿರುವ ಕೇಂದ್ರ
- ಇದರ ವಿರುದ್ಧ ರಾಷ್ಟ್ರವ್ಯಾಪಿ ಹೋರಾಟಕ್ಕೆ ಕರೆ ನೀಡಿರುವ ಕಾಂಗ್ರೆಸ್. ಕರ್ನಾಟಕದಲ್ಲಿ ವಿಶೇಷ ಅಧಿವೇಶನ
- ಗುರುವಾರದಿಂದ ಕಲಾಪ ಆರಂಭ. ಹೀಗಾಗಿ ಮೈತ್ರಿ ಶಾಸಕರಿಗೆ ಕೇಂದ್ರ ಸಚಿವರಿಂದಲೇ ಕಾಯ್ದೆ ಬಗ್ಗೆ ವಿವರ
- ಯೋಜನೆಯ ಕುರಿತು ಸಂಪೂರ್ಣ ಮಾಹಿತಿ ನೀಡಲಿರುವ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಚೌಹಾಣ್
- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿ