ಭದ್ರಾ ಮೇಲ್ದಂಡೆ ಹಣಕ್ಕಾಗಿ ಸಚಿವೆ ನಿರ್ಮಲಾಗೆ ಸಿದ್ದರಾಮಯ್ಯ ಪತ್ರ - 2 ವರ್ಷ ಹಿಂದೆ ಘೋಷಿಸಿದ್ದ ಹಣ ಬಿಡುಗಡೆಗೆ ಮನವಿ

ಸಾರಾಂಶ

ಕೇಂದ್ರ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿ ಬಿಡುಗಡೆ ಮಾಡದ 5,300 ಕೋಟಿ ರು. ಹಣವನ್ನು 2025-26ನೇ ಸಾಲಿನ ಬಜೆಟ್‌ನಲ್ಲಾದರೂ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಬೆಂಗಳೂರು : ಕೇಂದ್ರ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿ ಬಿಡುಗಡೆ ಮಾಡದ 5,300 ಕೋಟಿ ರು. ಹಣವನ್ನು 2025-26ನೇ ಸಾಲಿನ ಬಜೆಟ್‌ನಲ್ಲಾದರೂ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಸಂಬಂಧಪಟ್ಟ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌. ಪಾಟೀಲ್‌, ಕೇಂದ್ರ ಜಲಶಕ್ತಿ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಪತ್ರ ಬರೆದು ಅನುದಾನಕ್ಕೆ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯದ ಕೇಂದ್ರದ ಭಾಗದ 2.25 ಲಕ್ಷ ಹೆಕ್ಟೇರ್‌ ಭೂ ಪ್ರದೇಶಕ್ಕೆ ನೀರುಣಿಸುವ ಮಹತ್ವದ ಉದ್ದೇಶದೊಂದಿಗೆ ಭದ್ರಾ ಮೇಲ್ದಂಡೆ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಹನಿ ನೀರಾವರಿ ಮೂಲಕ 2.25 ಲಕ್ಷ ಹೆಕ್ಟೇರ್‌ಗೆ ನೀರುಣಿಸುವ ಜತೆಗೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಯ 367 ಸಣ್ಣ ನೀರಾವರಿ ಕೆರೆಗಳಿಗೆ 29.90 ಟಿಎಂಸಿ ನೀರು ಒದಗಿಸಲು 2008ರಲ್ಲಿ ಯೋಜನೆ ನಿರ್ಮಾಣ ಶುರು ಮಾಡಲಾಯಿತು. ಈವರೆಗೆ 10.121 ಕೋಟಿ ರು. ವೆಚ್ಚ ಮಾಡಲಾಗಿದ್ದು, ಇನ್ನೂ 16,125 ಕೋಟಿ ರು. ಬೇಕಾಗಬಹುದು ಎಂದು ಕೇಂದ್ರ ಸರ್ಕಾರವು ಅಂದಾಜಿಸಿದೆ.

ಇದರ ನಡುವೆಯ 2023-24ನೇ ಸಾಲಿನ ಕೇಂದ್ರದ ಬಜೆಟ್‌ನಲ್ಲಿ 5,300 ಕೋಟಿ ರು. ಅನುದಾನದ ಜತೆಗೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವುದಾಗಿ ತಿಳಿಸಲಾಗಿತ್ತು. ಆದರೆ ಮೂರು ವರ್ಷವಾದರೂ ಅನುದಾನ ಬಿಡುಗಡೆ ಮಾಡಲಾಗಿಲ್ಲ. ಈ ವರ್ಷವಾದರೂ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Share this article