ಕೇಂದ್ರದ ಕಪಾಳಕ್ಕೆ ಸುಪ್ರೀಂ ‘ನ್ಯಾಯದಂಡ’ ಚಾಟಿ: ಸಿದ್ದು

Published : Jul 22, 2025, 07:11 AM IST
Karnataka Chief Minister Siddaramaiah (File Photo/ANI)

ಸಾರಾಂಶ

ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ವಿರುದ್ಧ ತನಿಖೆಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. 

  ಬೆಂಗಳೂರು :  ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ವಿರುದ್ಧ ತನಿಖೆಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಈ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿ. ಕಪೋಲಕಲ್ಪಿತ ಆರೋಪ ಮಾಡಿದ್ದ ಬಿಜೆಪಿ-ಜೆಡಿಎಸ್‌ ನಾಯಕರಿಗೆ ಮಾನ-ಮರ್ಯಾದೆ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ವಿರುದ್ಧ ತನಿಖೆಗೆ ಅವಕಾಶ ಕೋರಿ ಇ.ಡಿ. ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದ್ದು, ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಕೊಳ್ಳಬೇಕೇ ಹೊರತು ಇದಕ್ಕಾಗಿ ಇ.ಡಿ.ಯಂಥ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು ಎಚ್ಚರಿಸಿದೆ.

ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದ ಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ಸಂವಿಧಾನ, ನೆಲದ ಕಾನೂನಿನ ಮೇಲಿನ ನನ್ನ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಕಾಪಾಡಿದೆ. ಬಿಜೆಪಿಯು ಐಟಿ, ಸಿಬಿಐ ಮತ್ತು ಇ.ಡಿ. ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ. ನ್ಯಾಯ ವ್ಯವಸ್ಥೆ ಮೇಲೆ ಭರವಸೆ ಮೂಡಿಸಿದೆ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಮುಡಾ ಪ್ರಕರಣಕ್ಕೆ ಸಂಬಂಧಿಸಿ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪ ಮಾಡುತ್ತಾ ಬಂದಿದ್ದರು. ಅವರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮಾನಸಿಕ ಕಿರುಕುಳ ಮರೆಯಲಾರೆ:

‘ನನ್ನ ಪತ್ನಿ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ. ನನ್ನ ಮನದಾಳದ ಮಾತನ್ನೇ ಗೌರವಾನ್ವಿತ ಗವಾಯಿ ಅವರು ಹೇಳಿದ್ದಾರೆ. ‘ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಕೊಳ್ಳಬೇಕೇ ಹೊರತು, ಇದಕ್ಕಾಗಿ ಇ.ಡಿ.ಯಂಥ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು’ ಎಂಬ ಅವರ ಮಾತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೋದಿ, ಅಮಿತ್ ಶಾ ಪಾಪ ತೊಳೆದುಕೊಳ್ಳಲಿ:

ಸುಪ್ರೀಂಕೋರ್ಟ್‌ನ ಈ ಕಣ್ಣುತೆರೆಸುವ ಆದೇಶದ ನಂತರವಾದರೂ ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಮತ್ತು ಇ.ಡಿ.ಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಬೇಕು. ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹ ವ್ಯಕ್ತಪಡಿಸಿದ್ದಾರೆ.

- ಸಿಎಂ ಹೇಳಿದ್ದೇನು?

- ಮುಡಾ ಕೇಸಲ್ಲಿ ನನ್ನ ವಿರುದ್ಧ ಸುಳ್ಳೇಸುಳ್ಳು ಆರೋಪ

- ಪ್ರಕರಣದಿಂದ ಆದ ಕಿರುಕುಳ ನಾನು ಮರೆಯಲಾಗಲ್ಲ

- ನ್ಯಾಯದಂಡವು ಕೇಂದ್ರ ಸರ್ಕಾರದ ಕಪಾಳಕ್ಕೆ ಬಾರಿಸಿದೆ

- ತೀರ್ಪಿನಿಂದ ಸಮಾಧಾನ. ನ್ಯಾಯದ ಮೇಲೆ ಭರವಸೆ

- ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಮಾಡಬಾರದು

- ಇನ್ನಾದರೂ ಮೋದಿ, ಶಾ ಪಾಪ ತೊಳೆದುಕೊಳ್ಳಬೇಕು

- ಪ್ರತಿಪಕ್ಷ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದು ಕಿಡಿ

PREV
Read more Articles on

Latest Stories

ದಾವಣಗೆರೆಯಲ್ಲಿ ವೀರಶೈವ ಪಂಚಪೀಠಗಳ ಸಮಾಗಮ
ಹವ್ಯಕ ಪ್ರತಿಷ್ಠಾನ ವಾರ್ಷಿಕೋತ್ಸವ ಸಂಪನ್ನ
5 ಪಾಲಿಕೆ ರಚನೆಗೆ ಆಕ್ಷೇಪಣೆ ಸಲ್ಲಿಸಲು ಹಕ್ಕಿದೆ: ಡಿಕೆಶಿ