ಸರ್ಕಾರ ಜತೆ ಮಾತುಕತೆ ವಿಫಲ: ಆಶಾ ಹೋರಾಟ ಮುಂದುವರಿಕೆ

Published : Nov 22, 2026, 10:52 AM IST
ASHA Workers Turn Down CM Appeal

ಸಾರಾಂಶ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಐದು ದಿನದಿಂದ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರೊಂದಿಗೆ ಸರ್ಕಾರ ಶನಿವಾರ ನಡೆಸಿದ ಮಾತುಕತೆ ವಿಫಲವಾಗಿದ್ದು, ಹೋರಾಟ ಮುಂದುವರೆಯಲಿದೆ.

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಐದು ದಿನದಿಂದ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರೊಂದಿಗೆ ಸರ್ಕಾರ ಶನಿವಾರ ನಡೆಸಿದ ಮಾತುಕತೆ ವಿಫಲವಾಗಿದ್ದು, ಹೋರಾಟ ಮುಂದುವರೆಯಲಿದೆ.

ಆರೋಗ್ಯ ಸಚಿವ ಯು.ಟಿ.ಖಾದರ್‌ ಅವರು ಶನಿವಾರ ಆಶಾ ಕಾರ್ಯಕರ್ತೆಯರ ಸಂಘದ ಪ್ರಮುಖರೊಂದಿಗೆ ಬೇಡಿಕೆಗಳ ಬಗ್ಗೆ ಎರಡನೇ ಸುತ್ತಿನ ಚರ್ಚೆ ನಡೆಸಿದರಾದರೂ ಮಾಸಿಕ 15 ಸಾವಿರ ರು. ಗೌರವಧನ ಪಾವತಿಗೆ ಸಂಬಂಧಿಸಿ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಹೋರಾಟ ಮುಂದುವರೆಸುವುದಾಗಿ ಆಶಾ ಕಾರ್ಯಕರ್ತೆಯರು ಸ್ಪಷ್ಟಪಡಿಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್‌, ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಎನ್‌ಎಚ್‌ಎಂ ಯೋಜನೆಯಡಿ ಬರುತ್ತಾರೆ. ಕೇಂದ್ರ ಸರ್ಕಾರವೂ ಗೌರವಧನ ಹೆಚ್ಚಳ ಮಾಡಿಲ್ಲ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಿಹಿ ಸುದ್ದಿ ಕೊಡುತ್ತೇನೆ ಎಂದು ಹೇಳಿದ್ದಾರೆ. ಸ್ವಲ್ಪ ಕಾಲಾವಕಾಶ ನೀಡುವಂತೆ ಹೇಳಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಯುಸಿಐ ರಾಜ್ಯ ಕಾರ್ಯದರ್ಶಿ ಕೆ.ಉಮಾ, ನಮ್ಮ ಬೇಡಿಕೆಗಳು ನ್ಯಾಯಯುತವಾಗಿವೆ. ಆದರೆ ಸರ್ಕಾರ ಸ್ಪಷ್ಟ ಭರವಸೆ ನೀಡದಿರುವುದರಿಂದ ಒಗ್ಗಟ್ಟಿನ ಹೋರಾಟ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.

ಮತ್ತೆ ಹಲವರು ಅಸ್ವಸ್ಥ:

ಶನಿವಾರವೂ ಹಲವು ಆಶಾ ಕಾರ್ಯಕರ್ತೆಯರು ಅಸ್ವಸ್ಥಗೊಂಡಿದ್ದು ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಕೊರೆಯವು ಚಳಿಯಲ್ಲೂ ಆಶಾ ಕಾರ್ಯಕರ್ತೆಯರು ಹೋರಾಟ ಮುಂದುವರೆಸಿದ್ದಾರೆ. ಬೇಡಿಕೆಗಳು ಈಡೇರುವವರೆಗೂ ಸ್ವಾತಂತ್ರ್ಯ ಉದ್ಯಾನವನ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಅಣ್ಣನಾಗಿ ಕೇಳ್ತಿದ್ದೇನೆ, ನಿಮ್ಮ ಪ್ರತಿಭಟನೆ ಕೈಬಿಡಿ: ಸಿಎಂ 

 ಹಿರಿಯೂರು : ಆಶಾ ಕಾರ್ಯಕರ್ತೆಯರು ನನಗೆ ಕೇವಲ ಕಾರ್ಯಕರ್ತರಲ್ಲ. ಅವರು ಸಹೋದರಿಯರಿದ್ದಂತೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಿಎಂ, ನಿಮ್ಮ ಬೇಡಿಕೆಗಳಿಗಾಗಿ ನೀವು ನಡೆಸುತ್ತಿರುವ ಹೋರಾಟದ ನೋವು ಮತ್ತು ಸಂಕಷ್ಟ ನನಗೆ ಅರ್ಥವಾಗುತ್ತದೆ. ನಿಮ್ಮ ಕುಟುಂಬದವರನ್ನು ಬಿಟ್ಟು ಹಗಲು-ರಾತ್ರಿ ಎನ್ನದೆ ಹೋರಾಟ ಮಾಡುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ನೀವು ನನಗೆ ಕೇವಲ ಆಶಾ ಕಾರ್ಯಕರ್ತೆಯರಲ್ಲ, ನನ್ನ ಸಹೋದರಿಯರಿದ್ದಂತೆ ಎಂದಿದ್ದಾರೆ.

ಅಂಗನವಾಡಿಗಳ ಸ್ಥಾಪನೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರಂಭ ಹಾಗೂ ಆಶಾ ಕಾರ್ಯಕರ್ತೆಯರ ಹುದ್ದೆಗಳ ಸೃಷ್ಟಿಯ ಮೂಲಕ ಮಹಿಳೆಯರು ಮತ್ತು ಆರೋಗ್ಯ ಕ್ಷೇತ್ರದ ಕಾರ್ಯಕರ್ತೆಯರಿಗೆ ಸೇವೆಯ ಅವಕಾಶ ಕಲ್ಪಿಸಿದ್ದು ನಮ್ಮ ಕಾಂಗ್ರೆಸ್‌ ಸರ್ಕಾರ.

ನಿಮ್ಮ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಸಮಗ್ರ ಮತ್ತು ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ. ಸಂಪುಟದ ಜೊತೆಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ನಿಮ್ಮೊಂದಿಗೆ ನಾವಿದ್ದೇವೆ. ಒಬ್ಬ ಅಣ್ಣನಾಗಿ ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ನನ್ನ ಮನವಿಗೆ ಸ್ಪಂದಿಸಿ, ಹೋರಾಟವನ್ನು ಕೈಬಿಡಿ. ನಿಮ್ಮ ಸೇವೆ, ಶ್ರಮ ಮತ್ತು ತ್ಯಾಗವನ್ನು ನಾವು ಗೌರವಿಸುತ್ತೇವೆ. ನಿಮ್ಮ ಬೇಡಿಕೆಗಳಿಗೆ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ರಾಜ್ಯ ಸರ್ಕಾರದ 2027ರ ರಜಾದಿನಗಳ ಪಟ್ಟಿ ಪ್ರಕಟ
ಕೋಣನಕುಂಟೆ ಕ್ರಾಸ್‌ ಟ್ರಾಫಿಕ್‌ ನಿವಾರಣೆಗೆ ಹೊಸ ಪ್ಲಾನ್