ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ - ಮಾರ್ಚ್‌ ತಿಂಗಳಲ್ಲಿ ಹೆಚ್ಚಾಗಲಿದೆ ಬಿಸಿಲ ತಾಪ

Published : Feb 21, 2025, 10:19 AM IST
EV Monsoon Precautions

ಸಾರಾಂಶ

ಫೆಬ್ರವರಿ-ಮಾರ್ಚ್‌ನಲ್ಲಿ ಬಿಸಿಲ ತಾಪ ಹೆಚ್ಚಾಗಲಿದ್ದು, ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್‌ ಬಿಸಿಲು ಅಧಿಕವಾಗಿರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.

 ಬೆಂಗಳೂರು : ಫೆಬ್ರವರಿ-ಮಾರ್ಚ್‌ನಲ್ಲಿ ಬಿಸಿಲ ತಾಪ ಹೆಚ್ಚಾಗಲಿದ್ದು, ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್‌ ಬಿಸಿಲು ಅಧಿಕವಾಗಿರಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಪ್ರಕೃತಿ ವಿಕೋಪ ಸಂಬಂಧ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಸ್ತುತ ಸಾಲಿನ ಹಿಂಗಾರು-ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು. ಈ ವೇಳೆ ಅಧಿಕಾರಿಗಳು ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್- ಮೇ ತಿಂಗಳಲ್ಲಿ ಉತ್ತಮ ಮಳೆಯಾಗಲಿದೆ. ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ ಎಂದು ಮಾಹಿತಿ ನೀಡಿದರು.

ಬಳಿಕ ಸಚಿವ ಕೃಷ್ಣ ಬೈರೇಗೌಡ, ಬಿಸಿಲಿನ ತಾಪ ಹೆಚ್ಚಾಗುವುದರಿಂದ ಬೇಸಿಗೆಯಲ್ಲಿ ರಾಜ್ಯಾದ್ಯಂತ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳ 13 ತಾಲೂಕುಗಳ ವ್ಯಾಪ್ತಿಯ 66 ಗ್ರಾಮಗಳಿಗೆ ದೀರ್ಘಕಾಲೀನ ಸಮಸ್ಯೆ ಹಾಗೂ ನೀರಿನ ಗುಣಮಟ್ಟದ ಸಮಸ್ಯೆಯಿಂದಾಗಿ ಬಾಡಿಗೆ ಟ್ಯಾಂಕರ್ ಮತ್ತು ಬೋರ್‌ವೆಲ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿ ಮಾಡಬೇಕು ಎಂದು ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಈ ಹಿಂದಿನ ವರ್ಷಗಳಲ್ಲಿ ಕೈಗೊಂಡ ಕ್ರಮಗಳ ಜೊತೆಗೆ ಕೈಗೊಳ್ಳಬಹುದಾದ ಹೆಚ್ಚುವರಿ ಕ್ರಮಗಳ ಕುರಿತು ಸಂಪೂರ್ಣ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಈ ಕುರಿತು ಸ್ಪಷ್ಟವಾದ ವರದಿಯನ್ನು ಮುಂದಿನ ಸಭೆಯಲ್ಲಿ ಮಂಡಿಸಬೇಕು ಎಂದು ನಿರ್ದೇಶನ ನೀಡಿದ ಅವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರರ ಪಿ.ಡಿ. ಖಾತೆಯಲ್ಲಿ ಪ್ರಸ್ತುತ ಒಟ್ಟು 488.30 ಕೋಟಿ ರು. ಅನುದಾನ ಲಭ್ಯವಿದೆ. ಇದನ್ನು ಬಳಸಿಕೊಳ್ಳಬಹುದು. ಪರಿಹಾರ ಕ್ರಮಕ್ಕೆ ಯಾವುದೇ ಹಣಕಾಸು ಸಮಸ್ಯೆ ಇಲ್ಲ ಎಂದರು.

ಇದೇ ವೇಳೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಸಂಗ್ರಹಣೆ ಕುರಿತು ಸಭೆಯಲ್ಲಿ ಕೂಲಂಕಷವಾಗಿ ಪರಿಶೀಲಿಸಲಾಯಿತು. ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ ಒಟ್ಟು 535.21 ಟಿಎಂಸಿ ನೀರಿನ ಸಂಗ್ರಹ ಇದ್ದು, ಸರಾಸರಿ ನೀರಿನ ಸಂಗ್ರಹಣೆಯ ಶೇ.60 ರಷ್ಟು ಇದೆ. ಕಳೆದ ವರ್ಷ ಇದೇ ಸಮಯದಲ್ಲಿ 332.52 ಟಿಎಂಸಿ ನೀರಿನ ಸಂಗ್ರಹ ಇತ್ತು ಎಂಬ ವಿಷಯವನ್ನು ಚರ್ಚಿಸಲಾಯಿತು.

ಕೆಲ ಜಲಾಶಯಗಳಲ್ಲಿ ನೀರಿನ ಮಟ್ಟ ತೃಪ್ತಿಕರವಾಗಿಲ್ಲದಿರುವ ಬಗ್ಗೆ ಸಮಾಲೋಚನೆ ನಡೆಸಲಾಗಿದ್ದು, ಜಲಾನಯನ ಪ್ರದೇಶಗಳಲ್ಲಿನ ಬೆಳೆಗಳಿಗೆ ಅವಶ್ಯವಿರುವ ನೀರಿನ ಪ್ರಮಾಣ ಸೇರಿ ಇತರೆ ವಿಷಯಗಳನ್ನು ಗಮನದಲ್ಲಿರಿಸಿಕೊಂಡು ಮುಂಬರುವ ದಿನಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಯಾವ ಮಟ್ಟ ತಲುಪಲಿದೆ? ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಎಂಬುದರ ಸ್ಪಷ್ಟ ಮಾಹಿತಿ ನೀಡುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ಕೃಷಿ ಸಚಿವ ಚಲುವರಾಯಸ್ವಾಮಿ‌ ಉಪಸ್ಥಿತರಿದ್ದರು.

PREV

Recommended Stories

ಹಬ್ಬಗಳಲ್ಲಿ ಭಾವೈಕ್ಯತೆ-ಸಾಮರಸ್ಯ ಅಗತ್ಯ
ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್‌ ದುಷ್ಪರಿಣಾಮಗಳ ಜನಜಾಗೃತಿ