ವಾಲ್ಮೀಕಿ ನಿಗಮ ಅಕ್ರಮ : ನಾಗೇಂದ್ರಗೆ ಕ್ಲೀನ್‌ಚಿಟ್‌?

Published : Nov 26, 2026, 06:50 AM IST
B Nagendra

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಅಂತಿಮ ದೋಷಾರೋಪಪಟ್ಟಿ ಸಲ್ಲಿಸಿದ್ದು, ಪ್ರಮುಖ ಆರೋಪಿ, ಮಾಜಿ ಸಚಿವ ನಾಗೇಂದ್ರ ಅವರಿಗೆ ಪರೋಕ್ಷವಾಗಿ ಕ್ಲೀನ್‌ಚಿಟ್‌ ನೀಡಲಾಗಿದೆ.

 ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಅಂತಿಮ ದೋಷಾರೋಪಪಟ್ಟಿ ಸಲ್ಲಿಸಿದ್ದು, ಪ್ರಮುಖ ಆರೋಪಿ, ಮಾಜಿ ಸಚಿವ ನಾಗೇಂದ್ರ ಅವರಿಗೆ ಪರೋಕ್ಷವಾಗಿ ಕ್ಲೀನ್‌ಚಿಟ್‌ ನೀಡಲಾಗಿದೆ.

ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ನಗರದ 24ನೇ ಸಿಸಿಎಚ್‌ ನ್ಯಾಯಾಲಯಕ್ಕೆ ಬುಧವಾರ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಬಿ.ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷರಾಗಿದ್ದ ಶಾಸಕ ಬಸವರಾಜ್ ದದ್ದಲ್ ಅವರನ್ನು ಪ್ರಮುಖ ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿದೆ. ಈ ಮೂಲಕ ಮೂಲಕ ನಾಗೇಂದ್ರ ಅವರಿಗೆ ಎಸ್‌ಐಟಿ ಪರೋಕ್ಷವಾಗಿ ಕ್ಲೀನ್‌ಚಿಟ್‌ ನೀಡಿದಂತಾಗಿದೆ.

ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕರಾದ ಪರುಶರಾಮ್, ನೆಕ್ಕುಂಟಿ ನಾಗರಾಜ್ ಮತ್ತು ಹೈದ್ರಾಬಾದ್‌ನ ಸತ್ಯನಾರಾಯಣ ವರ್ಮ ಈ ಹಗರಣದ ಪ್ರಮುಖ ಆರೋಪಿಗಳಾಗಿದ್ದಾರೆ. ನಿಗಮದ ಹಣವನ್ನು ಮಾಜಿ ಸಚಿವ ಬಿ.ನಾಗೇಂದ್ರ ಅವರು ವೈಯಕ್ತಿಕವಾಗಿ ದುರುಪಯೋಗಪಡಿಸಿಕೊಂಡಿಲ್ಲ. ಆದರೆ ಪ್ರಮುಖ ಆರೋಪಿ ನೆಕ್ಕುಂಟಿ ನಾಗರಾಜ್ ನಿಗಮದ ಎಂಡಿ ಪರಶುರಾಮ್ ಜತೆ ಸೇರಿ ರಹಸ್ಯವಾಗಿ ಡೀಲ್ ಮಾಡಿಕೊಂಡು, ನಿಗಮದ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಮಾಡಿಕೊಡುವುದಾಗಿ ಪ್ರಚೋದಿಸಿ ವರ್ಗಾವಣೆ ಮಾಡಿಸಿಕೊಂಡಿದ್ದ. ಮತ್ತೊಂದೆಡೆ ಆರೋಪಿಗಳ ಅಕ್ರಮ ಹಣ ವರ್ಗಾವಣೆ ಸಚಿವ ನಾಗೇಂದ್ರ ಅವರ ಗಮನಕ್ಕೆ ಬಂದಿಲ್ಲ ಎಂದು ಆರೋಪಪಟ್ಟಿಯಲ್ಲಿ ಸಿಐಡಿ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಜೀನಾಮೆ ನೀಡಿದ್ದ ಸಚಿವ:

ನಾಗೇಂದ್ರ ಅವರು ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. ಜೂನ್ 2024ರಲ್ಲಿ ಇದೇ ಪ್ರಕರಣಕ್ಕೆ ಸಂಬಂಧಿಸಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿಯೂ ಅವರು ಸಚಿವರಾಗಿದ್ದರು. ಆದರೆ ಪ್ರತಿ ಪಕ್ಷಗಳ ಪ್ರತಿಭಟನೆ ಮತ್ತು ಒತ್ತಾಯಕ್ಕೆ ಮಣಿದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಏನಿದು ಪ್ರಕರಣ?:

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಇದರ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರು. ಅಕ್ರಮವಾಗಿ ವರ್ಗಾವಣೆಯಾಗಿದೆ.

ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಇ-ಮೇಲ್‌, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಂಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಬಳಿಕ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಮತ್ತೊಂದೆಡೆ ಇ.ಡಿ ಕೂಡ ಪ್ರಕರಣದ ತನಿಖೆ ನಡೆಸುತ್ತಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

14 ಬಾಂಗ್ಲಾದೇಶಿ ಪ್ರಜೆಗಳ ವಿಳಾಸ ದೃಢೀಕರಣಕ್ಕೆ ವೈದ್ಯನ ಅಕ್ರಮ ಸಹಿ
ಕಬ್ಬನ್ ಪಾರ್ಕ್‌ನಲ್ಲಿ ಹೂವುಗಳ ಲೋಕ ಅನಾವರಣ : ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ