;Resize=(412,232))
ಬೆಂಗಳೂರು : ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಕಾವೇರಿ ನೀರು ಹರಿಸಬಾರದು ಎಂದು ಒತ್ತಾಯಿಸಿ ಹಮ್ಮಿಕೊಂಡಿರುವ ಆ.13ರ ಕರ್ನಾಟಕ ಬಂದ್ ಸಂಬಂಧ ಜಾಗೃತಿ ಮೂಡಿಸಲು ಹಾಗೂ ಮಹದಾಯಿ, ಕಳಸಾ ಬಂಡೂರಿ ಹಾಗೂ ಮೇಕೆದಾಟು ಯೋಜನೆ ಜಾರಿ ಮಾಡಬೇಕು ಎಂಬುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಭಾನುವಾರ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಒಕ್ಕೂಟದ ಕಾರ್ಯಕರ್ತರು, ಬಿಡದಿ ಉಪನಗರ ಬೇಡ, ಮೇಕೆದಾಡು ಯೋಜನೆ ಆಗಬೇಕು. ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ತೀರ್ಪನ್ನು ತಿರಸ್ಕರಿಸಬೇಕು. ಮಹಾದಾಯಿ, ಕಳಸಾ ಬಂಡೂರಿ ಕಾರ್ಯಗತವಾಗಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಅವರು, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಆ.13ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಅದರ ಪೂರ್ವಭಾವಿಯಾಗಿ ಆ.10ರಂದು ಸೋಮವಾರ ಮಧ್ಯಾಹ್ನ 12.30ಕ್ಕೆ ಅತ್ತಿಬೆಲೆ ಗಡಿ ಬಂದ್ ಮಾಡಲಾಗುವುದು. ಕನ್ನಡ ಒಕ್ಕೂಟದಲ್ಲಿರುವ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಎಂಇಎಸ್ ನಿಷೇಧ ಮಾಡಬೇಕು. ಗಡಿನಾಡು ಬೆಳಗಾವಿ ಅಭಿವೃದ್ಧಿಯಾಗಬೇಕು. ಕನ್ನಡಿಗರಿಗೆ ಉದ್ಯೋಗ ಕೊಡಬೇಕು. ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕು. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಆಲಮಟ್ಟಿ ಜಲಾಶಯ ಎತ್ತರ ಆಗಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಲಾಗುವುದು ಎಂದು ತಿಳಿಸಿದರು.