ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆ.19 ಮತ್ತು 20 ರಂದು ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ. ಆ.21ರಂದು ಮಳೆ ಪ್ರಮಾಣ ಕಡಿಮೆಯಾಗಲಿದ್ದು, ಮೋಡ ಕವಿದ ವಾತಾವರಣವಿರಲಿದೆ. ತಿಂಗಳ ಕೊನೆಯ ವಾರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಬಿಸಿಲಿನ ವಾತಾವರಣ ನಿರ್ಮಾಣವಾಗಲಿದೆ.
ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದ್ದು ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಬುಧವಾರ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ ಇದೆ. ಇನ್ನುಳಿದಂತೆ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.