ಕೊಪ್ಪಳ:
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಶ್ರೇಷ್ಠ ಸ್ಥಾನವಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನೀಡಿದ ಮತದಾನದ ಹಕ್ಕಿನಿಂದಾಗಿ ನನ್ನಂತಹವರು ಶಾಸಕ, ಸಚಿವನಾಗಲು ಸಾಧ್ಯವಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.ಜಿಲ್ಲಾಡಳಿತದಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮತದಾನ ಅತ್ಯಂತ ಪವಿತ್ರ ಮತ್ತು ಶಕ್ತಿಯುತವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಬಹಳ ಜವಾಬ್ದಾರಿಯುತವಾಗಿದ್ದು ಅಂಬೇಡ್ಕರ್ ಇದಕ್ಕೆ ದೊಡ್ಡ ಶಕ್ತಿ ನೀಡಿದ್ದರು. ದೇಶದಲ್ಲಿ ಮೊದಲು ಕೆಲವರಿಗೆ ಮಾತ್ರ ಮತದಾನದ ಹಕ್ಕು ನೀಡಲಾಗಿತ್ತು. ಸಂವಿಧಾನ ರಚಿಸಿದ ಬಳಿಕ ಎಲ್ಲರಿಗೂ ಹಕ್ಕು ನೀಡಲಾಯಿತು ಎಂದರು.
18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ಮತ ಚಲಾಯಿಸುವ ಮೂಲಕ ಸಂವಿಧಾನ, ಪ್ರಜಾಪ್ರಭುತ್ವದ ಅರಿವು ಹೊಂದಬೇಕೆಂದು ಕರೆ ನೀಡಿದರು.ರಾಬಕೊವಿ ಅಧ್ಯಕ್ಷ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, ಪ್ರಜಾಪ್ರಭುತ್ವ ನಾಗರಿಕರಿಗೆ ಸಿಕ್ಕಿರುವ ಅಧಿಕಾರ. ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶಕ್ಕೆ ಕೊಟ್ಟ ದೊಡ್ಡ ಕೊಡುಗೆಯಾಗಿದೆ. ದೇಶದಲ್ಲಿ ಸಾವಿರಾರು ಜಾತಿ-ಜನಾಂಗಗಳು ಇದ್ದರೂ ಪ್ರತಿಯೊಬ್ಬರು ಸಹೋದರ ಭ್ರಾತೃತ್ವದಿಂದ ಬಾಳುತ್ತಿದ್ದಾರೆ ಎಂದರು.
ವಿಪ ಸದಸ್ಯೆ ಹೇಮಲತಾ ನಾಯಕ ಹಾಗೂ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಮಾತನಾಡಿದರು. ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕ ಬಸವರಾಜ ಹಿರೇಮಠ ವಿಶೇಷ ಉಪನ್ಯಾಸ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿದೇಶಕ ಅಜ್ಜಪ್ಪ ಸೊಗಲದ ಸಂವಿಧಾನ ಪೀಠಿಕೆ ಬೋಧಿಸಿದರು. ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಚಿತ್ರಕಲಾ ಸ್ಪರ್ಧೆ, ಪೋಟೋಗ್ರಫಿ ಹಾಗೂ ಭಾಷಣ ಸ್ಪರ್ಧೆಗಳ ಕರಪತ್ರವನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಜಿಪಂ ಸಿಇಒ ವರ್ಣಿತ್ ನೇಗಿ, ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತ ಕ್ಯಾ. ಮಹೇಶ ಮಾಲಗಿತ್ತಿ ಸೇರಿದಂತೆ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಜಾಗೃತಿ ಜಾಥಾ....ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೆಳಗ್ಗೆ ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾಡಳಿತ ಭವನದ ವರೆಗೆ ಸೈಕಲ್ ಜಾಥಾ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ, ಜಿಪಂ ಸಿಇಒ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.