ಹುಬ್ಬಳ್ಳಿ: ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ ಟಾರ್ಗೆಟ್ ತಲುಪಲು ಪಕ್ಷದ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡಬೇಕು. ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಪಣತೊಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆ ನೀಡಿದರು.
ಪ್ರಧಾನಿ ಮೋದಿ ಅವರು ಪ್ರತಿ ಬೂತ್‌ನಲ್ಲಿಯೂ ಹಿಂದಿನ ಚುನಾವಣೆಯಲ್ಲಿ ಪಡೆದ ಮತಗಳ ಮೇಲೆ 370 ಹೆಚ್ಚು ಮತಗಳನ್ನು ಪಡೆಯುವ ಟಾರ್ಗೆಟ್ ನೀಡಿದ್ದಾರೆ. ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಇದನ್ನು ಸಾಕಾರಗೊಳಿಸಲು ಅವಿರತವಾಗಿ ಶ್ರಮಿಸಬೇಕು ಎಂದರು.
2024 ಚುನಾವಣೆಯಲ್ಲಿ ತಾವು ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಿದ್ದೇನೆ. ಇದನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸುತ್ತೇನೆ. ಈ ವರೆಗೂ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರ ವಿಶ್ವಾಸಕ್ಕೆ ಧಕ್ಕೆ ತರುವ ಕೆಲಸ ಮಾಡಿಲ್ಲ. ಇದೇ ವಿಶ್ವಾಸ, ನಂಬಿಕೆಯನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ಈಗಾಗಲೇ ಕ್ಷೇತ್ರದ ಜನರು ನೀಡಿದ ಅಧಿಕಾರದಲ್ಲಿ ಸಾಕಷ್ಟುಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.ವಿಧಾನಸಭೆ ಉಪನಾಯಕ ಅರವಿಂದ ಬೆಲ್ಲದ ಮಾತನಾಡಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ತೆರಿಗೆ ಹಣ ವಿಚಾರದಲ್ಲಿ ಕೇಂದ್ರದ ಮೇಲೆ ಗೂಬೆ ಕುರಿಸುವ ಕೆಲಸ ಮಾಡುತ್ತಿದೆ. ಆ ಮೂಲಕ ಜನರ ದಿಕ್ಕು ತಪ್ಪಿಸಲು ರಾಜ್ಯ ಮತ್ತು ಕೇಂದ್ರದ ನಡುವಿನ ಚುನಾವಣೆ ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ದೂರಿದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಧಾರವಾಡ ಲೋಕಸಭಾ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವಲ್ಲಿ ಪ್ರಹ್ಲಾದ ಜೋಶಿ ಪಾತ್ರ ಗಣನೀಯವಾಗಿದೆ. ಈ ಬಾರಿ ಚುನಾವಣೆಯಲ್ಲಿ ಜೋಶಿ ಅವರು 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ಹೇಳಿದರು.