ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಾಗಾರ

KannadaprabhaNewsNetwork |  
Published : Jan 24, 2026, 03:45 AM IST
ಗೋಪಾಲಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಾಗಾರ | Kannada Prabha

ಸಾರಾಂಶ

ಕೊಡಗು ಜಿಲ್ಲಾಡಳಿತ, ಜಿಪಂ, ಕಾನೂನು ಸೇವಾ ಪ್ರಾಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಮಾಹಿತಿ ಕಾರ್ಯಾಗಾರ ಗುರುವಾರ ಗೋಪಾಲಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಸೋಮವಾರಪೇಟೆ: ಕೊಡಗು ಜಿಲ್ಲಾಡಳಿತ, ಜಿಪಂ, ಕಾನೂನು ಸೇವಾ ಪ್ರಾಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಮಾಹಿತಿ ಕಾರ್ಯಾಗಾರ ಗುರುವಾರ ಗೋಪಾಲಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ನಿಡ್ತ ಗ್ರಾಪಂ ಅಧ್ಯಕ್ಷ ಟಿ.ಕೆ. ಅಶೋಕ್ ಮಾತನಾಡಿ, ಪ್ರತಿಯೊಬ್ಬ ಮಕ್ಕಳು ಸರ್ಕಾರದಿಂದ ಸಿಗುವ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಹೆಣ್ಣು ಮತ್ತು ಗಂಡು ನಡುವೆ ಸಮಾನತೆ ಇರಬೇಕು. ಯಾವುದೇ ಬೇದ ಭಾವ ಮಾಡದೆ ಒಂದೇ ಎಂಬ ಭಾವನೆಯನ್ನು ಎಲ್ಲ ಪೋಷಕರು ಅಳವಡಿಸಿಕೊಳ್ಳಬೇಕು ಎಂದರು.

ಕೊಡಗು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಮಿಷನ್ ಸಂಯೋಜಕಿ ಮಮತ ಮಾತನಾಡಿ, ಲಿಂಗಾನುಪಾತದ ಅಂತರವನ್ನು ಕಡಿಮೆ ಮಾಡುವುದು, ಮಹಿಳಾ ಸಬಲೀಕರಣವನ್ನು ಉತ್ತೇಜಿಸುವುದು ಮತ್ತು ಲಿಂಗ ಅಸಮಾನತೆಯನ್ನು ತೆಗೆದುಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಜಾರಿ ಮಾಡಿದೆ. ಈ ಮೂಲಕ ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಲು ಮತ್ತು ಸಮಾಜದಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.

ಎಲ್ಲಾದರೂ ಲಿಂಗ ಪತ್ತೆ ಪರೀಕ್ಷೆ ಕಂಡುಬಂದರೆ ಮತ್ತು ಮಹಿಳೆಯರ ಅಥವಾ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಕಂಡುಬಂದರೆ ಯಾರೇ ಆದರೂ ಸಂಬಂಧಪಟ್ಟವರಿಗೆ ವರದಿ ಮಾಡಿ ಕ್ರಮ ಕೈಗೊಳ್ಳುವಂತೆ ಮಾಡಬೇಕು ಎಂದರು. ಮಕ್ಕಳಿಗೆ ಏನಾದರೂ ತೊಂದರೆಗಳಾದಾಗ, ಸಂಕಷ್ಟ ಎದುರಾದಾಗ ತುರ್ತು ಸೇವೆಗಾಗಿ ಮಕ್ಕಳ ಸಹಾಯವಾಣಿ ಇದ್ದು, ಯಾರೇ ಏನೇ ತೊಂದರೆ ಎದುರಾದರೂ ಈ ನಂಬರ್‌ಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು ಎಂದರು. ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಮೇಲ್ವಿಚಾರಕಿ ಸಾವಿತ್ರವ್ವ ಅವರು ಮಾತನಾಡಿ, ಮಕ್ಕಳ ರಕ್ಷಣೆಗಾಗಿ ಅನೇಕ ಹಕ್ಕುಗಳಿದ್ದು, ಹಕ್ಕುಗಳ ರಕ್ಷಣೆಯಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಬಾಲ್ಯವಿವಾಹವು ಸಮಾಜಕ್ಕೆ ಒಂದು ಪಿಡುಗು ಆಗಿದೆ. ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಯಲು ಸರ್ಕಾರ ೨೦೧೨ರಲ್ಲಿ ಪೋಕ್ಸೊ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದು ಮಕ್ಕಳಿಗೆ ರಕ್ಷಣೆ ನೀಡುವ ಪ್ರಬಲ ಕಾಯ್ದೆಯಾಗಿದೆ ಎಂದರು.

ರಾಜ್ಯ ಸರ್ಕಾರ ಹೊಸದಾಗಿ ಅಕ್ಕಪಡೆ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದು, ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆದು, ತಕ್ಷಣದ ರಕ್ಷಣೆ ನೀಡುವ ನಿಟ್ಟಿನಲ್ಲಿ ಈ ಯೋಜನೆ ಇದ್ದು, ಏನೇ ಸಮಸ್ಯೆ, ತೊಂದರೆ ಎದುರಾದರೆ ತುರ್ತು ಸಹಾಯಕ್ಕಾಗಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಗ್ರಾಪಂ ಸದಸ್ಯರಾದ ತಸ್ಲಿಂ, ಎಸ್. ಕಾರ್ತಿಕ್, ತೀರ್ಥನಂದ, ಗೋಪಾಲಪುರ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಪಿ.ಕೆ. ಸಾವಿತ್ರಿ ಹಾಗೂ ಪಂಚಾಯಿತಿ ಪಿಡಿಒ ಮಾನಸ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ