ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಹಳೇ ಕೆಡಿಪಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ "ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ " ಎಂಬ ಶೀರ್ಷಿಕೆಯಡಿ ಆರ್‌ಟಿಇ ಕಾಯ್ದೆಯ ಅನುಷ್ಠಾನ ಹಾಗೂ ಮಕ್ಕಳೊಂದಿಗೆ ಸಂವಾದ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳನ್ನು ಉತ್ತಮ ವಾತಾವರಣದಲ್ಲಿ ಬೆಳೆಸಬೇಕು. ಆಗ ಮಾತ್ರ ಸದೃಢ ಸಮಾಜ ನಿರ್ಮಿಸಲು ಸಾಧ್ಯವಾಗಲಿದೆ. ಮಕ್ಕಳಿಗೆ ಸಾಮಾಜಿಕ ನ್ಯಾಯ, ಸಹೋದರತ್ವ, ಭ್ರಾತೃತ್ವ ಭಾವನೆಗಳಿಂದ ಕೂಡಿದ ಮೌಲ್ಯಯುತ ಶಿಕ್ಷಣ ನೀಡಬೇಕು. ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಶಾಲೆಯಲ್ಲಿ ಶಿಕ್ಷಣದ ಜೊತೆಗೆ ರಕ್ಷಣೆ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಸರ್ಕಾರದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜೊತೆಗೂಡಿ ರಾಜ್ಯಾದ್ಯಂತ ಆರ್‌ಟಿಇ ಕಾಯ್ದೆ ಅನುಷ್ಠಾನದ ಬಗ್ಗೆ ಸಂವಾದ, ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಆರ್‌ಟಿಇ ಕಾಯ್ದೆಯು ಮಕ್ಕಳ ಪ್ರತಿಭೆಗಳನ್ನು ಹೊರ ತರಲು ಅನೇಕ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು.
ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ ಕುರಿತು ಮೊದಲ ಬಾರಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಕ್ಕಳೊಂದಿಗೆ ಸಂವಾದ ನಡೆಸಿ ಮಕ್ಕಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುತ್ತದೆ. ಈ ಸಂವಾದದಲ್ಲಿ ಮಕ್ಕಳ ಪ್ರಶ್ನೆಗಳನ್ನು ಆಧರಿಸಿ ಆಯೋಗದ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.